image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಆದ್ಯತೆ

ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗೆ ಹೆಚ್ಚಿನ ಆದ್ಯತೆ

ಬೆಳಗಾವಿ: ಡಿಸೆಂಬರ್ 2ರಿಂದ 11ರವರೆಗೆ ಒಟ್ಟು 9 ದಿನಗಳ ಕಾಲ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚಿಸಲು ಹೆಚ್ಚಿನ ಸಮಯ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಜಿ.ಎಸ್. ಪಾಟೀಲ್ ಹಾಗೂ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ತಿಳಿಸಿದ್ದಾರೆ.

ಸುವರ್ಣ ವಿಧಾನಸೌಧದಲ್ಲಿ ಜಂಟಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಸ್ಪೀಕರ್ ಜಿ.ಎಸ್. ಪಾಟೀಲ್, ಕಳೆದ ಅಧಿವೇಶನದಲ್ಲಿ 21 ಗಂಟೆಗಳ ಕಾಲ ಉತ್ತರ ಕರ್ನಾಟಕದ ಬಗ್ಗೆ ಚರ್ಚಿಸಲಾಗಿತ್ತು. ಈ ಬಾರಿ ಅದಕ್ಕಿಂತಲೂ ಹೆಚ್ಚಿನ ಸಮಯ ನೀಡಲು ಸರ್ಕಾರದೊಂದಿಗೆ ಸಮಾಲೋಚಿಸಲಾಗುವುದು ಎಂದರು. ಅಧಿವೇಶನದ ಹಿನ್ನೆಲೆಯಲ್ಲಿ ವಸತಿ, ಊಟ, ಸಾರಿಗೆ, ಭದ್ರತೆ ಹಾಗೂ ಅಂತರ್ಜಾಲ ವ್ಯವಸ್ಥೆ ಸೇರಿದಂತೆ ಎಲ್ಲಾ ಪೂರ್ವಸಿದ್ಧತೆಗಳನ್ನು ಪರಿಶೀಲಿಸಲಾಗಿದೆ. ಈ ಬಾರಿ ಹೊಸದಾಗಿ ಪುಸ್ತಕ ಮೇಳ, ಶಾಸಕರಿಗೆ ಯೋಗಾಭ್ಯಾಸ, ಮಕ್ಕಳಿಗೆ ಎ.ಐ. (AI) ಸಂವಾದ ಹಾಗೂ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.

ಪ್ರತಿಭಟನೆಗಳ ಸಂಖ್ಯೆ ತಗ್ಗಿಸಲು ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಧಿಕಾರಿಗಳು ಸ್ಥಳೀಯ ಮಟ್ಟದಲ್ಲೇ ಜನರ ಸಮಸ್ಯೆಗಳನ್ನು ಬಗೆಹರಿಸಲು ಸೂಚಿಸಲಾಗಿದೆ. ಅಲ್ಲದೆ, ವರ್ಷವಿಡೀ ಸುವರ್ಣ ವಿಧಾನಸೌಧ ಕ್ರಿಯಾಶೀಲವಾಗಿರಲು ಪ್ರತಿ ತಿಂಗಳು ಒಂದು ಸದನ ಸಮಿತಿಯ ಸಭೆಯನ್ನು ಇಲ್ಲಿಯೇ ನಡೆಸಲು ಉದ್ದೇಶಿಸಲಾಗಿದೆ. ಶಾಸಕರ ಭವನ ನಿರ್ಮಾಣಕ್ಕೆ ಜಾಗ ಅಂತಿಮಗೊಳಿಸಿ, ಅವಕಾಶ ಸಿಕ್ಕರೆ ಇದೇ ಅಧಿವೇಶನದಲ್ಲಿ ಶಂಕುಸ್ಥಾಪನೆ ನೆರವೇರಿಸಲಾಗುವುದು. ಕಲಾಪಕ್ಕೆ ಈಗಾಗಲೇ ಒಂದು ವಿಧೇಯಕ ಸಲ್ಲಿಕೆಯಾಗಿದ್ದು, ಶಾಸಕರಿಂದ ಒಟ್ಟು 1,488 ಪ್ರಶ್ನೆಗಳು ಬಂದಿವೆ ಎಂದು ವಿವರಿಸಿದರು.

ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಮಾತನಾಡಿ, ಆಡಳಿತ ಹಾಗೂ ವಿರೋಧ ಪಕ್ಷಗಳ ಸಹಕಾರದೊಂದಿಗೆ ಅರ್ಥಪೂರ್ಣ ಕಲಾಪ ನಡೆಸಲಾಗುವುದು. ಸದನದಲ್ಲಿ ಸದಸ್ಯರ ಹಾಜರಾತಿ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಮತ್ತು ಅಧಿವೇಶನದ ದಿನಗಳನ್ನು ವಿಸ್ತರಿಸುವ ಕುರಿತು ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದರು.

ಮಾಧ್ಯಮಗೋಷ್ಠಿಗೂ ಮುನ್ನ ಉಭಯ ಸದನಗಳ ಅಧ್ಯಕ್ಷರು ವಿಧಾನಸಭೆ, ಪರಿಷತ್ ಸಭಾಂಗಣಗಳು, ಸೆಂಟ್ರಲ್ ಹಾಲ್ ಹಾಗೂ ವಾಚನಾಲಯಗಳಿಗೆ ಭೇಟಿ ನೀಡಿ ಸ್ವಚ್ಛತೆ ಮತ್ತು ಧ್ವನಿ ವ್ಯವಸ್ಥೆಯನ್ನು ಪರಿಶೀಲಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಿಧಾನಸಭೆ ಕಾರ್ಯದರ್ಶಿ ಆರ್. ವಿಶಾಲಾಕ್ಷಿ, ಪರಿಷತ್ ಕಾರ್ಯದರ್ಶಿ ಜ್ಯೋತಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಕಮಿಷನರ್ ಪ್ರಕಾಶ್ ನಿಕ್ಕಂ, ಎಸ್ಪಿ ಕೆ. ರಾಮರಾಜನ್ ಹಾಗೂ ಜಿ.ಪಂ. ಸಿಇಒ ರಾಹುಲ್ ಶಿಂಧೆ ಉಪಸ್ಥಿತರಿದ್ದರು.

 

Category
ಕರಾವಳಿ ತರಂಗಿಣಿ