ಬೆಂಗಳೂರು: ಹಸಿವಿನಿಂದ ಭಿಕ್ಷೆ ಬೇಡುವವರನ್ನು ಶಿಕ್ಷಿಸಬಾರದು, ಆದರೆ ಜನರನ್ನು ಬಲವಂತವಾಗಿ ಭಿಕ್ಷಾಟನೆಗೆ ದೂಡುತ್ತಿರುವ ಗ್ಯಾಂಗ್ಗಳ ಹಾವಳಿಯ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೆ, ರಾಜ್ಯದಲ್ಲಿ ಭಿಕ್ಷಾಟನೆ ತಡೆಗಟ್ಟಲು ಹಾಗೂ ನಿರ್ಗತಿಕರ ಪುನರ್ವಸತಿಗೆ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಭಿಕ್ಷಾಟನೆಯನ್ನು ಅಪರಾಧವೆಂದು ಪರಿಗಣಿಸುವ 'ಕರ್ನಾಟಕ ಭಿಕ್ಷಾಟನೆ ನಿಷೇಧ ಕಾಯ್ದೆ-1975'ರ ಹಲವು ಸೆಕ್ಷನ್ಗಳನ್ನು ರದ್ದುಪಡಿಸಬೇಕು, ಭಿಕ್ಷುಕರ ಪುನರ್ವಸತಿ ಕೇಂದ್ರಗಳನ್ನು ಸುಧಾರಿಸಬೇಕು ಮತ್ತು ಭಿಕ್ಷುಕರ ಸೆಸ್ ಸಂಗ್ರಹ ಹಾಗೂ ಲೆಕ್ಕಪತ್ರಗಳ ಕುರಿತು ಸ್ಪಷ್ಟತೆ ನೀಡಬೇಕು ಎಂದು ಕೋರಿ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (ಪಿಯುಸಿಎಲ್) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ನ್ಯಾಯಮೂರ್ತಿ ಅನು ಶಿವರಾಮನ್ ಹಾಗೂ ನ್ಯಾಯಮೂರ್ತಿ ಕೆ.ಎಸ್. ಭರತ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಹಸಿವಿನಿಂದ ಭಿಕ್ಷೆ ಬೇಡುವುದು ಅಪರಾಧವಲ್ಲ, ಅದು ಬದುಕುವ ಹಕ್ಕಿನ ಭಾಗವಾಗಿದೆ ಎಂದು ವಾದಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಬಡತನದ ಕಾರಣಕ್ಕೆ ಭಿಕ್ಷೆ ಬೇಡುವುದನ್ನು ಒಪ್ಪಬಹುದು, ಆದರೆ ಭಿಕ್ಷಾಟನೆಯನ್ನು ಒಂದು ದಂಧೆಯನ್ನಾಗಿ ಮಾಡಿಕೊಂಡು ಗ್ಯಾಂಗ್ಗಳನ್ನು ನಡೆಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮೌಖಿಕವಾಗಿ ತಿಳಿಸಿತು.
ಅಂತಿಮವಾಗಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಸಲ್ಲಿಸಿರುವ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುವಂತೆ 2021ರ ಸೆಪ್ಟೆಂಬರ್ 8ರಂದು ನ್ಯಾಯಾಲಯ ನೀಡಿದ್ದ ಆದೇಶವನ್ನು ಪಾಲಿಸಿರುವ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದ ಪೀಠ, ಮುಂದಿನ ವಿಚಾರಣೆಯನ್ನು 2027ರ ಜನವರಿ 12ಕ್ಕೆ ಮುಂದೂಡಿತು.