image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸ್ಥಳೀಯ ಚುನಾವಣೆಗಳಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಸಜ್ಜು: ತಳಮಟ್ಟದಲ್ಲಿ ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸ್ಥಳೀಯ ಚುನಾವಣೆಗಳಿಗೆ ಬಿಜೆಪಿ-ಜೆಡಿಎಸ್ ಮೈತ್ರಿ ಸಜ್ಜು: ತಳಮಟ್ಟದಲ್ಲಿ ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ದೀರ್ಘಕಾಲದ ರಾಜಕೀಯ ಶಕ್ತಿಯಾಗಿ ರೂಪಿಸುವ ನಿಟ್ಟಿನಲ್ಲಿ ಎನ್‌ಡಿಎ ನಾಯಕರು ಮಹತ್ವದ ಕಾರ್ಯತಂತ್ರ ರೂಪಿಸಿದ್ದಾರೆ ಎಂದು ಮೈತ್ರಿ ಮೂಲಗಳು ತಿಳಿಸಿವೆ. ಮುಂಬರುವ ಉಪಚುನಾವಣೆಗಳು, ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು, ಎರಡೂ ಪಕ್ಷಗಳ ನಡುವೆ ಸಂಘಟನಾತ್ಮಕ ಒಗ್ಗಟ್ಟು ಮೂಡಿಸಲು ಸಮನ್ವಯ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಮೈತ್ರಿಯೊಳಗಿನ ಗೊಂದಲ ಮತ್ತು ಸ್ಥಳೀಯ ಮಟ್ಟದ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಲು ಮೇಲ್ಮಟ್ಟದ ನಾಯಕರ ಜೊತೆಗೆ ತಳಮಟ್ಟದ ಕಾರ್ಯಕರ್ತರ ನಡುವೆ ವಿಶ್ವಾಸ ವೃದ್ಧಿಸುವ ಅಗತ್ಯವಿದೆ ಎಂದು ಸಭೆಯಲ್ಲಿ ಅಭಿಪ್ರಾಯಪಡಲಾಗಿದೆ. ಈ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ರಾಜ್ಯಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲಾಗುತ್ತಿದ್ದು, ನಂತರ ಜಿಲ್ಲಾ, ತಾಲೂಕು ಮತ್ತು ಹೋಬಳಿ ಮಟ್ಟದಲ್ಲೂ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಗಿದೆ. ವಿಶೇಷವಾಗಿ ಎರಡೂ ಪಕ್ಷಗಳು ಪ್ರತ್ಯೇಕ ರಾಜಕೀಯ ನೆಲೆ ಹೊಂದಿರುವ ಪ್ರದೇಶಗಳಲ್ಲಿ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡುವ ವಾತಾವರಣ ನಿರ್ಮಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಇದರೊಂದಿಗೆ ರಾಜಧಾನಿ ಬೆಂಗಳೂರಿನ ರಾಜಕೀಯ ಮಹತ್ವವನ್ನು ಪರಿಗಣಿಸಿ, GBA ಚುನಾವಣೆಗಾಗಿ ಪ್ರತ್ಯೇಕವಾಗಿ ವಲಯವಾರು ಸಮನ್ವಯ ಸಮಿತಿಗಳನ್ನು ರಚಿಸಲು ಉಭಯ ಪಕ್ಷಗಳ ನಾಯಕರು ಮುಂದಾಗಿದ್ದಾರೆ. ನಗರದಲ್ಲಿ ಬಿಜೆಪಿಯ ಸಾಂಪ್ರದಾಯಿಕ ಸಂಘಟನಾ ಶಕ್ತಿ ಹಾಗೂ ಜೆಡಿಎಸ್‌ನ ಸ್ಥಳೀಯ ಪ್ರಭಾವವನ್ನು ಪರಸ್ಪರ ಪೂರಕವಾಗಿ ಬಳಸಿಕೊಳ್ಳುವ ಮೂಲಕ ಆಡಳಿತಾರೂಢ ಕಾಂಗ್ರೆಸ್‌ಗೆ ಸವಾಲೊಡ್ಡಲು ಮೈತ್ರಿ ನಾಯಕರು ಲೆಕ್ಕಾಚಾರ ಹಾಕಿದ್ದಾರೆ. ಇದಕ್ಕೆ ಪೂರಕವಾಗಿ ರಾಜ್ಯ ಸರ್ಕಾರದ ವಿರುದ್ಧ ಜಂಟಿ ಹೋರಾಟ ರೂಪಿಸುವ ಮೂಲಕ ಚುನಾವಣಾ ಸಿದ್ಧತೆಗೆ ಅಧಿಕೃತ ಚಾಲನೆ ನೀಡಲು ಎನ್‌ಡಿಎ ನಾಯಕರು ಸಜ್ಜಾಗಿದ್ದಾರೆ.

 

 

Category
ಕರಾವಳಿ ತರಂಗಿಣಿ