ಮೈಸೂರು: ಫೆಬ್ರವರಿ 10 ರಿಂದ 12 ರವರೆಗೆ ಟಿ.ನರಸೀಪುರದ ತ್ರಿವೇಣಿ ಸಂಗಮದ ಬಳಿ ಕುಂಭಮೇಳ 2025 ಅನ್ನು ಹಮ್ಮಿಕೊಳ್ಳಲಾಗಿದೆ. ಭಕ್ತಾದಿಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಸೂಚನೆ ನೀಡಿದರು.
ಇಂದು ಕುಂಭ ಮೇಳ -2025ರ ಆಚರಣೆಯ ಸಂಬಂಧ ಜಲದರ್ಶಿನಿ ಅಥಿತಿ ಗೃಹದಲ್ಲಿ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಥಮ ಬಾರಿಗೆ 1989ರಲ್ಲಿ ಈ ಕುಂಭಮೇಳ ಪ್ರಾರಂಭವಾಯಿತು. ಇದು 3 ವರ್ಷಗಳಿಗೆ ಒಮ್ಮೆ ನಡೆಯುವ ಮೇಳ. ಕುಂಭಮೇಳದಲ್ಲಿ ಸ್ವಚ್ಛತೆ ಕಾಪಾಡಬೇಕು. ಪ್ಲಾಸ್ಟಿಕ್ ಮುಕ್ತ ಪ್ರದೇಶ ಎಂದು ಘೋಷಣೆ ಮಾಡಬೇಕು. ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಮೊಬೈಲ್ ಟಾಯ್ಲೆಟ್ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.
ಸಾಂಸ್ಕೃತಿಕ ಹಾಗೂ ಜನಪದ ಸಂಗೀತ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ, ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಬೇಕು. ಕೆಎಸ್ಆರ್ಟಿಸಿ ವತಿಯಿಂದ ವಿವಿಧ ಭಾಗಗಳಿಂದ ಹೆಚ್ಚಿನ ಬಸ್ಗಳ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.