ಕೊಪ್ಪಳ: ಬಿಎಸ್ಪಿಎಲ್ ಕಾರ್ಖಾನೆ ಆರಂಭಕ್ಕೆ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಈ ಕಾರ್ಖಾನೆಯ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಬಂದಿಲ್ಲ ಎಂದು ಹೇಳಿದ್ದಾರೆ.ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಎಸ್ಪಿಎಲ್ ಕಾರ್ಖಾನೆಯಿಂದ ಇಲ್ಲಿನ ಪರಿಸರಕ್ಕೆ ಹಾನಿಯಾಗುತ್ತಿದೆ ಎಂದು ಗವಿಸಿದ್ದೇಶ್ವರ ಸ್ವಾಮೀಜಿ ಮತ್ತು ಜನರು ಹೋರಾಟ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಹೋರಾಟಕ್ಕೆ ನನ್ನ ಬೆಂಬಲವೂ ಇದೆ. ಆದರೆ ಇದು ರಾಜ್ಯ ಸರ್ಕಾರ ಹಾಗೂ ಕಾರ್ಖಾನೆ ನಡುವೆ ನಡೆದ ಒಪ್ಪಂದ. ನನ್ನ ಬಳಿ ಪ್ರಸ್ತಾಪ ಬಂದಿಲ್ಲ ಎಂದರು.
ಸ್ವಾಮೀಜಿಗಳ ನೇತೃತ್ವದಲ್ಲಿ ಕಾರ್ಖಾನೆಗೆ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕರು ಮತ್ತು ಸ್ವಾಮೀಜಿಗಳ ಜೊತೆ ಸರ್ಕಾರ ಕುಳಿತು ಮಾತುಕತೆ ನಡೆಸಬೇಕು. ಪರಿಸರಕ್ಕೆ ಯಾವುದೇ ರೀತಿಯ ಹಾನಿಯಾಗದಂತೆ ಯೋಜನೆಯ ಅನುಷ್ಠಾನಗೊಳಿಸುವ ಕುರಿತು ಸರ್ಕಾರ ಗಮನ ಹರಿಸಬೇಕಿದೆ ಎಂದು ತಿಳಿಸಿದರು.
ವಿಶೇಷ ಕೈಗಾರಿಕಾ ನೀತಿಯನ್ನು ಕೊಪ್ಪಳಕ್ಕೆ ನೀಡುವಂತೆ ಸ್ವಾಮೀಜಿಗಳ ಬೇಡಿಕೆಗೆ ನನ್ನ ಸಂಪೂರ್ಣ ಸಹಮತವಿದೆ. ದೇಶದಲ್ಲಿ ಉಕ್ಕು ಉತ್ಪಾದಿಸುವ ಸರ್ಕಾರಿ ಕಾರ್ಖಾನೆಗಳು ಪರಿಸರಕ್ಕೆ ಹಾನಿಯಾಗದಂತೆ ಅರಣ್ಯೀಕರಣ ಮಾಡಿ ಕ್ರಮ ಕೈಗೊಂಡಿವೆ. ಪರಿಸರಕ್ಕೆ ಹಾನಿಯಾಗದ ರೀತಿಯಲ್ಲಿ, ಜನರ ಆರೋಗ್ಯದ ಮೇಲೆ ಸಮಸ್ಯೆ ಆಗದ ರೀತಿಯಲ್ಲಿ ಕಾರ್ಖಾನೆ ನಿರ್ಮಿಸಬೇಕಾಗಿದೆ ಎಂದರು.
ರಾಜ್ಯ ಸರ್ಕಾರ ಜನರ ಪರವಾಗಿರಬೇಕು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಹಣದ ಕೊರತೆ ಇಲ್ಲ. ಆದರೆ, ದುರ್ಬಳಕೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ. ಹತ್ತು ಹಲವಾರು ಯೋಜನೆಗಳು ಕೇವಲ ಘೋಷಣೆಗೆ ಮಾತ್ರ ಸೀಮಿತವಾಗಿವೆ. ಕೆಲವು ಯೋಜನೆಗಳಲ್ಲಿ ಹಣ ದುರ್ಬಳಕೆಯಾಗುತ್ತಿದೆ ಎಂದು ಆರೋಪಿಸಿದರು.