ಬೆಂಗಳೂರು: ಹುಬ್ಬಳ್ಳಿ ಮಹಾನಗರ ಪಾಲಿಕೆಗೆ ಸೇರಿದ ಜಾಗವನ್ನು ಧಾರವಾಡ ಜಿಲ್ಲಾ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಮಂಜೂರು ಮಾಡಿ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿ ಆದೇಶಿಸಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರಾದ ಬೀರಪ್ಪ ಹಾಗೂ ಸಂತೋಷ್ ಎಸ್.ಚವಾಣ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ಪೀಠ, ನಗರಾಭಿವೃದ್ಧಿ ಇಲಾಖೆ, ನೈರುತ್ಯ ರೈಲ್ವೆ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಧಾರವಾಡ ಜಿಲ್ಲಾ ಘಟಕಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಏಪ್ರಿಲ್ 21ಕ್ಕೆ ಮುಂದೂಡಿತು.
ಅರ್ಜಿದಾರರ ಪರ ಹಿರಿಯ ವಾದ ಮಂಡಿಸಿದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ, ಮಂಜೂರು ಮಾಡಲಾಗಿರುವ ಜಾಗವು ಮೂಲತಃ ರೈಲ್ವೆ ಇಲಾಖೆಗೆ ಸೇರಿದ್ದು, ಅದನ್ನು ಬಹಳ ವರ್ಷಗಳ ಹಿಂದೆಯೇ ಪಾಲಿಕೆಗೆ ಹಸ್ತಾಂತರಿಸಲಾಗಿದೆ. ಸದ್ಯ ಅದು ಪಾಲಿಕೆಯ ಜಾಗ. ಈ ಜಾಗವನ್ನು ಕುಡಿಯುವ ನೀರು ಸಂಗ್ರಹಿಸಿಡಲು ಮೀಸಲಿಡಲಾಗಿದೆ. ಪಾಲಿಕೆಗೆ ಸೇರಿದ ಜಾಗ ಮಂಜೂರು ಮಾಡುವ ಸಂಬಂಧ 2003ರಲ್ಲಿ ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ. ಕರ್ನಾಟಕ ಮುನ್ಸಿಪಲ್ ಕಾರ್ಪೋರೇಷನ್ ಕಾಯ್ದೆ ಸೆಕ್ಷನ್ 176ಕ್ಕೆ ವಿರುದ್ಧವಾಗಿ ಜಮೀನು ಮಂಜೂರು ಮಾಡಲಾಗಿದೆ ಎಂದು ವಿವರಿಸಿದರು.
ನೈರುತ್ಯ ರೈಲ್ವೆ ಪರ ಸಹಾಯಕ ಸಾಲಿಸಿಟರ್ ಜನರಲ್ ಅರವಿಂದ್ ಕಾಮತ್ ವಾದ ಮಂಡಿಸಿ, ಜಾಗವು ರೈಲ್ವೆ ಇಲಾಖೆಗೆ ಸೇರಿದ್ದರ ಹಾಗೂ ಸದ್ಯದ ಆ ಜಾಗದ ವಸ್ತುಸ್ಥಿತಿಯ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಲು ಕಾಲಾವಕಾಶ ಬೇಕು ಎಂದು ಕೋರಿದರು. ಕೆಎಂಸಿ ಕಾಯ್ದೆಯ ಸೆಕ್ಷನ್ 176ರಡಿ ಈ ಹಿಂದೆ ಜಮೀನು ಮಂಜೂರು ಮಾಡಿರುವ ಉದಾಹರಣೆಗಳನ್ನು ನ್ಯಾಯಾಲಯದ ಮುಂದಿಡಲಾಗುವುದು. ಅಷ್ಟಕ್ಕೂ ಈ ಪ್ರಕರಣದಲ್ಲಿ ಒಂದು ರಾಜಕೀಯ ಪಕ್ಷಕ್ಕೆ ಮಂಜೂರು ಮಾಡಿದ್ದನ್ನು ಇನ್ನೊಂದು ರಾಜಕೀಯ ಪಕ್ಷ ವಿರೋಧಿಸಿತ್ತಿದೆ. ಏನೇ ಆಗಲಿ ಮುಂದಿನ ವಿಚಾರಣೆವರೆಗೆ ರಾಜ್ಯ ಸರ್ಕಾರ ಈ ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಿದೆ ಎಂದು ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಭರವಸೆ ನೀಡಿದರು.