ಮೈಸೂರು: 'ನಾಡಿನ ಅತ್ಯಂತ ಪ್ರತಿಷ್ಠಿತ ಹಾಗೂ ಐತಿಹಾಸಿಕ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರಾತ್ರಿ ವಾಹನಗಳ ಸಂಚಾರ ನಿಷೇಧ ತೆರವುಗೊಳಿಸದಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲಿದ್ದು, ಸೂಕ್ತ ಕ್ರಮ ಕೈಗೊಳ್ಳಲಿದೆ' ಎಂದು ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸದರು, "ಈಗಾಗಲೇ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ನನಗೆ ಪತ್ರ ಬರೆದು ಈ ವಿಷಯದ ಕುರಿತಂತೆ ಸುಪ್ರೀಂ ಕೋರ್ಟ್‌ಗೆ ಸೂಕ್ತ ಪ್ರತಿಕ್ರಿಯೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ" ಎಂದರು. 2025ರ ಲೋಕಸಭಾ ಬಜೆಟ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಈ ಕುರಿತಾಗಿ ಸದನದಲ್ಲಿ ವಿಷಯವನ್ನು ಪ್ರಸ್ತಾಪಿಸಿದ್ದೆ ಎಂದು ಸಂಸದರು ವಿವರಿಸಿದ್ದಾರೆ.
"ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ನಿಷೇಧವನ್ನು ಕೈ ಬಿಡಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸುತ್ತಿದೆ. ಅರಣ್ಯ ಪರಿಸರ ಮತ್ತು ಹವಾಮಾನ ಇಲಾಖೆಯು ಮಧ್ಯ ಪ್ರವೇಶಿಸಿ, ಯಾವುದೇ ಕಾರಣಕ್ಕೂ ಈ ಅರಣ್ಯ ಪ್ರದೇಶದಲ್ಲಿ ರಾತ್ರಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಬಾರದು. ಇದರಿಂದಾಗಿ ವನ್ಯ ಜೀವಿ - ಮಾನವ ಸಂಘರ್ಷಗಳು ಮತ್ತಷ್ಟು ಹೆಚ್ಚಾಗುತ್ತದೆ. ಪರಿಸರಕ್ಕೆ ತೀವ್ರ ಧಕ್ಕೆ ಉಂಟಾಗುತ್ತದೆ ಎಂದು ಸ್ಪಷ್ಟಪಡಿಸಿದ್ದೆ. ಕರ್ನಾಟಕದ ಸರ್ಕಾರವು ಪರಿಸರ ಹಾಗೂ ವನ್ಯಜೀವಿಗಳಿಗೆ ತೊಂದರೆಯಾಗುವ ನಿರ್ಧಾರ ಕೈಗೊಳ್ಳದಂತೆ ಸೂಕ್ತ ಕ್ರಮ ಕೈಗೊಳ್ಳಲು ಮನವಿ ಮಾಡಲಾಗಿತ್ತು" ಎಂದು ಮಾಹಿತಿ ನೀಡಿದ್ದಾರೆ.
"ಈಗ ಈ ಮನವಿಗೆ ಸ್ಪಂದಿಸಿರುವ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್, ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸಂರಕ್ಷಣೆಗೆ ಆದ್ಯತೆ ನೀಡುವ ಭರವಸೆಯನ್ನು ನೀಡಿದ್ದಾರೆ. ಬಂಡೀಪುರದ ಕುರಿತು ಸದನದಲ್ಲಿ ನಾನು ಪ್ರಸ್ತಾಪಿಸಿದ ವಿಷಯಕ್ಕೆ ಸೂಕ್ತವಾಗಿ ಸ್ಪಂದಿಸಿ, ಅದರ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿರುವ ಕೇಂದ್ರ ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಅವರಿಗೆ ತುಂಬು ಹೃದಯದ ಧನ್ಯವಾದಗಳನ್ನು ತಿಳಿಸುತ್ತೇನೆ" ಎಂದು ಯದುವೀರ್ ಒಡೆಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.