ಬೆಂಗಳೂರು: ಬಿಜೆಪಿ ಅನರ್ಹ ಶಾಸಕರ ಕುರಿತು ಸಿಎಂ ಸಿದ್ದರಾಮಯ್ಯ ಅವರು ಸಂಪುಟ ಸಭೆಯಲ್ಲಿ ಚರ್ಚೆ ಮಾಡಿದ್ದು, ಮೇ 25ರಂದು ಸಭೆ ಕರೆಯಲು ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೇ 25ರಂದು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹಾಗೂ ಶಾಸಕರು ಭಾಗಿಯಾಗಲಿದ್ದಾರೆ. ಅಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ ದತ್ತಾಂಶಗಳ ಅಧ್ಯಯನ ವರದಿ-2024ರಲ್ಲಿ ಮಾಡಿರುವ ಶಿಫಾರಸುಗಳ ಬಗ್ಗೆ ಇನ್ನೂ ಕೆಲ ಸಚಿವರು ಉತ್ತರ ನೀಡಬೇಕಿದೆ. ಹಾಗಾಗಿ, ಇದರ ಚರ್ಚೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. 2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಆಯ್ಕೆ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಸೇವಾ ಆಯೋಗದ ಹಿಂದಿನ ಅಧ್ಯಕ್ಷರು ಹಾಗೂ ಹಿಂದಿನ ಎಂಟು ಸದಸ್ಯರುಗಳನ್ನು ಅಭಿಯೋಜನೆಗೊಳಪಡಿಸುವುದರ ಬಗ್ಗೆ ಕೈಬಿಟ್ಟು ಪ್ರಕರಣವನ್ನು ಮುಕ್ತಾಯಗೊಳಿಸಲಾಗಿದೆ ಎಂದು ವಿವರಿಸಿದ್ದಾರೆ.