ಬೆಂಗಳೂರು: ದ್ವೇಷ ಭಾಷಣ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಎಷ್ಟೇ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ನಿರ್ದೇಶನ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಶನಿವಾರ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆಗಿನ ಎರಡು ದಿನಗಳ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಾಧ್ಯಮಗೋಷ್ಟಿ ನಡೆಸಿದ ಅವರು, ದ್ವೇಷ ಭಾಷಣ ಸಂಬಂಧ ಕಾನೂನು ತಿದ್ದುಪಡಿ ಮಾಡಲು ಚಿಂತನೆ ನಡೆಸಲಾಗಿದೆ. ದ್ವೇಷ ಭಾಷಣ ಮಾಡುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.
ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ದ್ವೇಷ ಭಾಷಣದ ಬಗ್ಗೆ ಸುಪ್ರೀಂಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದ್ದರೂ, ಯಾಕೆ ಜಿಲ್ಲೆಗಳಲ್ಲಿ ದ್ವೇಷ ಭಾಷಣದ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ? ಎಂದು ಪ್ರಶ್ನಿಸಿದರು. ತಕ್ಷಣ ದೂರು ದಾಖಲಿಸಿ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಇದೇ ರೀತಿ ಸರ್ಕಾರದ ಯೋಜನೆಗಳ ಬಗ್ಗೆ, ಕೈಗೊಂಡಿರುವ ಕ್ರಮಗಳ ಬಗ್ಗೆ ಸುಳ್ಳು ಸುದ್ದಿಗಳನ್ನು, ಮಾಹಿತಿಗಳನ್ನು ಹರಡುವ ಪ್ರಕರಣಗಳಲ್ಲಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದರು.
ನಾವು ರಾಜ್ಯವನ್ನು ಮಾದಕ ದ್ರವ್ಯ ಮುಕ್ತ ಕರ್ನಾಟಕ ಮಾಡುತ್ತೇವೆ ಎಂದು ಈಗಾಗಲೇ ಘೋಷಿಸಿದ್ದೇವೆ. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಮುಂದುವರೆಸಬೇಕು. ಮಾದಕ ವಸ್ತು ಮಾರಾಟ ಮಾಡುವವರ ಅಂಗಡಿ ಮತ್ತಿತರ ಕೇಂದ್ರಗಳ ಪರವಾನಗಿ ರದ್ದುಗೊಳಿಸುವ ಸಂಬಂಧ ಕಾನೂನು ತಿದ್ದುಪಡಿ ತನ್ನಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಇದೇ ವೇಳೆ ಸಿಎಂ ತಿಳಿಸಿದರು.
2023ರಲ್ಲಿ 6,767 ಪ್ರಕರಣಗಳು, 2024ರಲ್ಲಿ 4188 ಪ್ರಕರಣಗಳು ದಾಖಲಾಗಿವೆ. ಈ ವರ್ಷ ಇದುವರೆಗೆ 1793 ಪ್ರಕರಣಗಳು ದಾಖಲಾಗಿವೆ. ಜಿಲ್ಲೆಗಳಲ್ಲಿ ಮಾದಕ ದ್ರವ್ಯ ದಂಧೆಯನ್ನು ಮಟ್ಟ ಹಾಕಲು ಡಿಸಿ ಹಾಗೂ ಎಸ್ಪಿ ಅವರು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯಬಿದ್ದರೆ ಇನ್ನಷ್ಟು ಕಠಿಣ ಕಾಯ್ದೆಗಳನ್ನು ಜಾರಿಗೆ ತರಲು ನಾವು ಬದ್ಧರಾಗಿದ್ದೇವೆ. ಶಾಲಾ, ಕಾಲೇಜುಗಳಲ್ಲಿ ಮಾದಕ ದ್ರವ್ಯ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಲು ಸೂಚನೆ ನೀಡಿದ್ದೇನೆ ಎಂದು ವಿವರಿಸಿದರು.
ಅಧಿಕಾರಿಗಳಲ್ಲಿ ಅನುಭೂತಿ ಇರಬೇಕು. ಸಮನ್ವಯದಿಂದ ಕೆಲಸ ಮಾಡಬೇಕು. ಇಗೋ ಇಟ್ಟು ಕೆಲಸ ಮಾಡಬಾರದು. ಕೆಲವರು ಮನೆಯಿಂದಲೇ ಕಚೇರಿ ಕೆಲಸ ಮಾಡುತ್ತಿರುವ ಬಗ್ಗೆ ದೂರು ಬಂದಿತ್ತು. ಈ ಹಿನ್ನೆಲೆ ಎಲ್ಲಾ ಅಧಿಕಾರಿಗಕಳಿಗೆ ಮನೆಯಿಂದ ಯಾರೂ ಕೂಡ ಕೆಲಸ ಮಾಡಬಾರದು. ಕಚೇರಿಗೆ ಹೋಗಬೇಕು. ಯಾವಾಗ ಕಚೇರಿಯಲ್ಲಿ ಇರುತ್ತೀರ ಎಂಬುದನ್ನು ಸಾರ್ವಜನಿಕರಿಗೆ ತಿಳಿಸಬೇಕು. ಡಿಸಿ, ಸಿಇಒಗಳಿಗೆ ಅನುಭೂತಿ ಇರಬೇಕು. ಅನುಕಂಪ ಮಾತ್ರ ಅಲ್ಲ. ಅನುಭೂತಿನೂ ಇರಬೇಕು. ಜನರ ಭಾವನೆಗಳನ್ನು ತಿಳಿದುಕೊಂಡರೇ ಮಾತ್ರ ಕೆಲಸ ಮಾಡಬಹುದು ಎಂದು ತಿಳಿಸಿದರು.