ಬೆಂಗಳೂರು: ಮೆಟ್ರೋ ನಿಲ್ದಾಣಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರು ಇಡುವ ಬಗ್ಗೆ ನಾನು ಹಾಗೂ ಮುಖ್ಯಮಂತ್ರಿಗಳು ಚರ್ಚೆ ಮಾಡಿ ತೀರ್ಮಾನಿಸುತ್ತೇವೆ. ಕಾರ್ಯಪ್ಪ ಅವರ ಹೆಸರಿಡುವುದು ನಮ್ಮ ಭಾಗ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.
ಕರ್ನಾಟಕ ಸರ್ಕಾರ ಬೆಂಗಳೂರಿನಲ್ಲಿ ಏಳು ಎಕರೆ ಭೂಮಿ ಮಂಜೂರು ಮಾಡಿರುವ ಹಿನ್ನೆಲೆಯಲ್ಲಿ ಕೊಡವ ಸಮಾಜದವರು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ಉದ್ದೇಶಿಸಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾತನಾಡಿದ ಅವರು, ಈ ವಿಚಾರವಾಗಿ ನಾವು ಮುಕ್ತ ಮನಸ್ಸು ಹೊಂದಿದ್ದೇವೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಹಾಗೂ ಈ ಡಿ.ಕೆ. ಶಿವಕುಮಾರ್ ಸೇರಿ ಕಾರ್ಯಪ್ಪ ಅವರ ಹೆಸರನ್ನು ಉಳಿಸುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಮನುಷ್ಯನಿಗೆ ಮುತ್ತು -ರತ್ನ ಶೋಭೆ ತರುವಂತೆ ಇಡೀ ದೇಶಕ್ಕೆ ಕೊಡಗು ಹಾಗೂ ಕೊಡವರು ಆಭರಣವಿದ್ದಂತೆ. ಇತಿಹಾಸ ನೋಡಿದಾಗ ನಿಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ಅದನ್ನು ಸಮರ್ಥವಾಗಿ ನಿಭಾಯಿಸಿದ್ದೀರಿ. ರಾಜಕೀಯ ಮಾತ್ರವಲ್ಲ ಕ್ರೀಡೆ, ಕಾನೂನು ವ್ಯವಸ್ಥೆ, ಸೇನೆ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಕೊಡವರ ಕೊಡುಗೆ ಅಪಾರ. ದೇಶದ ಸ್ವಾತಂತ್ರ್ಯ ಹೋರಾಟಕ್ಕೂ ನಿಮ್ಮ ಕೊಡುಗೆ ಇದೆ ಎಂದು ಬಣ್ಣಿಸಿದರು.