image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬಿಬಿಎಂಪಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಕುರಿತ ಟೆಂಡರ್​ಗೆ ಹೈಕೋರ್ಟ್ ತಡೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿ ಕುರಿತ ಟೆಂಡರ್​ಗೆ ಹೈಕೋರ್ಟ್ ತಡೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ 2024ರ ನವೆಂಬರ್ ತಿಂಗಳಿ​​ನಲ್ಲಿ "ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ ನಿಗಮ ನಿಯಮಿತ" (ಬಿಎಸ್​ಡಬ್ಲೂಎಂಎಲ್) ಹೊರಡಿಸಿದ್ದ ಮರು ಟೆಂಡರ್​ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಆದೇಶಿಸಿದೆ. ಟೆಂಡರ್ ಪ್ರಶ್ನಿಸಿ ಬೆಂಗಳೂರು ಮಹಾನಗರ ಸ್ವಚ್ಛತೆ ಮತ್ತು ಲಾರಿ ಮಾಲೀಕರ ಸಂಘ ಹಾಗೂ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಎಸ್.ಎನ್.ಬಾಲಸುಬ್ರಮಣಿಯನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಬಿಎಸ್​ಡಬ್ಲೂಎಂಎಲ್ ಹೊರಡಿಸಿದ್ದ ಹೊಸ ಟೆಂಡರ್ ನಿಯಮಗಳನ್ನು ಪ್ರಶ್ನಿಸಿ ಹಲವು ಗುತ್ತಿಗೆದಾರರು ಸಲ್ಲಿಸಿದ್ದ ಅರ್ಜಿಗಳನ್ನು ಇದೇ ನ್ಯಾಯಪೀಠ ಇತ್ತೀಚೆಗೆ ವಿಚಾರಣೆ ಮಾಡಿ ವಿಲೇವಾರಿ ಮಾಡಿದೆ. ಆ ದೇಶದಂತೆ ನಾಲ್ಕು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಆದೇಶಿಸಲಾಗಿತ್ತು. ಆದರೆ, ಈ ಆದೇಶದ ಅನುಸಾರ ಈಗ ಮರು ಟೆಂಡರ್ ಕರೆಯಲಾಗಿದೆ. ಆದರೆ, ಮರು ಟೆಂಡರ್ ಅಧಿಸೂಚನೆಯಲ್ಲಿ; ಸಕ್ಷಮ ಪ್ರಾಧಿಕಾರಗಳಿಂದ ಅನುಮೋದನೆಯೊಂದಿಗೆ ಅನುಷ್ಠಾನಗೊಳಿಸಲು ಆದೇಶಿಸಲಾಗಿದೆ. ಇದು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕ ಕಾಯ್ದೆ-1999ಕ್ಕೆ ತದ್ವಿರುದ್ಧವಾಗಿದೆ ಎಂದು ಪೀಠಕ್ಕೆ ವಿವರಿಸಿದೆ.

ಇದಕ್ಕೆ ಸರ್ಕಾರದ ಪರ ವಕೀಲರು, ಈ ಪ್ರಕರಣದಲ್ಲಿ ಅಡ್ವೊಕೇಟ್ ಜನರಲ್ ಬಂದು ವಾದ ಮಂಡಿಸಲಿದ್ದಾರೆ. ಅದಕ್ಕಾಗಿ ಒಂದಷ್ಟು ಕಾಲವಕಾಶ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು. ನ್ಯಾಯಪೀಠ, ಅರ್ಜಿದಾರರ ಮಧ್ಯಂತರ ಮನವಿಯನ್ನು ಮನ್ನಿಸಿ ಹೊಸ ಟೆಂಡರ್ ಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು. ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಹಸಿ ಮತ್ತು ಒಣ ತ್ಯಾಜ್ಯ ಮತ್ತು ರಸ್ತೆ ಗುಡಿಸುವಿಕೆ ತ್ಯಾಜ್ಯದ ಸಂಗ್ರಹಣೆ, ಪ್ರಾಥಮಿಕ ಸಾಗಾಣಿಕೆ ಹಾಗೂ ದ್ವಿತೀಯ ಹಂತದ ಸಾಗಾಣಿಕೆ ಸೇವೆಯನ್ನು ಸಮರ್ಪಕವಾಗಿ ನಿರ್ವಹಿಸಲು ಮರು ಟೆಂಡರ್​ಗೆ ನಗರಾಭಿವೃದ್ಧಿ ಇಲಾಖೆ ಆದೇಶಿಸಿತ್ತು. ಈ ಟೆಂಡರ್ ಪ್ರಕ್ರಿಯೆಯಲ್ಲಿ ಗೊಂದಲಗಳಿರುವ ಕಾರಣ ಇದೀಗ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Category
ಕರಾವಳಿ ತರಂಗಿಣಿ