ಮಂಡ್ಯ: ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯವು ಭರ್ತಿಯಾಗುವ ಹಂತಕ್ಕೆ ತಲುಪಿದೆ. ಹೀಗಾಗಿ, ಡ್ಯಾಂನಿಂದ ಯಾವುದೇ ಸಮಯದಲ್ಲಿ ಹೆಚ್ಚಿನ ನೀರು ಬಿಡುಗಡೆಯಾಗುವ ಸಾಧ್ಯತೆಯಿದ್ದು, ನದಿ ಪಾತ್ರದ ಜನರು ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಕೆಆರ್‌ಎಸ್ ಜಲಾಶಯದ ಒಳ ಹರಿವಿನ ಪ್ರಮಾಣವೂ ಹೆಚ್ಚಾಗಿದೆ. ಹೀಗಾಗಿ, ಅಣೆಕಟ್ಟೆಯಿಂದ ಪ್ರಸ್ತುತ 17 ಸಾವಿರ ಕ್ಯೂಸೆಕ್ ನೀರನ್ನು ಹೊರ ಬಿಡಲಾಗಿದೆ. ಈ ಪ್ರಮಾಣವು ಯಾವುದೇ ಸಂದರ್ಭದಲ್ಲೂ 30,000 ಕ್ಯೂಸೆಕ್‌ಗೆ ಹೆಚ್ಚಾಗಬಹುದು. ಇದರಿಂದ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳು ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಜನರು ಎಚ್ಚರ ವಹಿಸಬೇಕು. ತಮ್ಮ ಆಸ್ತಿಪಾಸ್ತಿ, ಜಾನುವಾರುಗಳ ರಕ್ಷಣೆಗೆ ಕ್ರಮ ವಹಿಸಬೇಕು ಎಂದು ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಎಂಜಿನಿಯರ್ ಕೆ.ರಘುರಾಮ್ ಮುನ್ನೆಚ್ಚರಿಕೆ ನೀಡಿದ್ದಾರೆ. ಜೊತೆಗೆ ಪ್ರವಾಸಿ ತಾಣಗಳಿಗೂ ಪ್ರವಾಸಿಗರ ನಿಷೇಧ ಹೇರಲಾಗಿದೆ.
ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿಂದ ನೆರೆ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ. ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಮಿತಿ ಸಭೆ ನಡೆಸಿರುವ ಜಿಲ್ಲಾಧಿಕಾರಿ, ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಆಗಬಹುದಾದ ಹಾನಿ ಹಾಗೂ ಕೈಗೊಳ್ಳಬಹುದಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ.