image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಕರ್ನಾಟಕದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ: ಕೇಂದ್ರ ಸ್ಪಷ್ಟನೆ

ಕರ್ನಾಟಕದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ: ಕೇಂದ್ರ ಸ್ಪಷ್ಟನೆ

ಬೆಂಗಳೂರು: ನಕಲಿ, ಕಳಪೆ ಗುಣಮಟ್ಟದ ಉತ್ಪನ್ನಗಳ ಮಾರಾಟದ ಐದು ಎಫ್‌ಐಆರ್‌ಗಳು ದಾಖಲಾಗಿದ್ದರೂ ಕರ್ನಾಟಕದಲ್ಲಿ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಪರಿಣಾಮ ಬೀರಿಲ್ಲ ಎಂದು ಕೇಂದ್ರ ಸರಕಾರ ಸ್ಪಷ್ಟನೆ ನೀಡಿದೆ. ಈ ವರ್ಷ ಕರ್ನಾಟಕದಲ್ಲಿ ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಐದು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ, ಆದರೆ ಪ್ರಸ್ತುತ ಖಾರಿಫ್ ಋತುವಿಗೆ ರಾಜ್ಯದಲ್ಲಿ ರಸಗೊಬ್ಬರಗಳ ಸಾಕಷ್ಟು ಲಭ್ಯತೆ ಇದೆ ಎಂದು ಸ್ಪಷ್ಟಪಡಿಸಿದೆ. ಲೋಕಸಭೆಯಲ್ಲಿ ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮತ್ತು ಚಿತ್ರದುರ್ಗ ಸಂಸದ ಗೋವಿಂದ್ ಎಂ. ಕಾರಜೋಳ ಅವರ ಪ್ರತ್ಯೇಕ ಪ್ರಶ್ನೆಗೆ ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಉತ್ತರಿಸಿದ್ದಾರೆ, ನಕಲಿ ಮತ್ತು ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟ ಸಂಬಂಧ ಐದು ಎಫ್‌ಐಆರ್‌ಗಳು ದಾಖಲಾಗಿವೆ ಎಂದು ರಾಜ್ಯ ಸರ್ಕಾರ ಕೇಂದ್ರಕ್ಕೆ ತಿಳಿಸಿದೆ ಎಂದು ಮಾಹಿತಿ ನೀಡಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ನಕಲಿ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಎಫ್‌ಐಆರ್‌ಗಳು ದಾಖಲಾಗಿದ್ದರೆ, ಹಾವೇರಿ ಜಿಲ್ಲೆಯಲ್ಲಿ ಕಳಪೆ ಗುಣಮಟ್ಟದ ರಸಗೊಬ್ಬರಗಳ ಮಾರಾಟಕ್ಕೆ ಸಂಬಂಧಿಸಿದಂತೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ. ಗ್ರಾಮೀಣ ಮಾರುಕಟ್ಟೆಗಳಲ್ಲಿ ನಕಲಿ ರಸಗೊಬ್ಬರಗಳ ಚಲಾವಣೆಯನ್ನು ಪತ್ತೆಹಚ್ಚಲು ಮತ್ತು ತಡೆಯಲು ಯಾವುದೇ ಕಾರ್ಯವಿಧಾನಗಳು ಪ್ರಸ್ತುತ ಜಾರಿಯಲ್ಲಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ನಕಲಿ ಮತ್ತು ಕಳಪೆ ರಸಗೊಬ್ಬರ ಮಾರಾಟವನ್ನು ತಡೆಯಲು 1985ರ ರಸಗೊಬ್ಬರ ನಿಯಂತ್ರಣ ಆದೇಶದ ಅನ್ವಯ ಕ್ರಮ ಕೈಗೊಳ್ಳಲಾಗುತ್ತಿದೆ. ಇಂತಹ ಗೊಬ್ಬರ ಮಾರಾಟವು ಅಗತ್ಯ ವಸ್ತುಗಳ ಕಾಯ್ದೆಯಡಿ ಶಿಕ್ಷಾರ್ಹ ಅಪರಾಧವಾಗಿದೆ ಎಂದು ಸಚಿವೆ ತಿಳಿಸಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಗುಣಮಟ್ಟ ನಿಯಂತ್ರಣ ಮತ್ತು ಅರಿವು ವ್ಯವಸ್ಥೆಯಿದೆ. ಪತ್ರಿಕೆ, ದೃಶ್ಯ ಮಾಧ್ಯಮ, ಕಿಸಾನ್ ಗೋಷ್ಠಿ, ಕೃಷಿ ಮೇಳ ಮತ್ತು ಕೃಷಿ ಮಹೋತ್ಸವಗಳ ಮೂಲಕ ರೈತರಿಗೆ ರಸಗೊಬ್ಬರದ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ರಾಜ್ಯದಲ್ಲಿ ರಸಗೊಬ್ಬರ ಮಾದರಿಗಳನ್ನು ಪರೀಕ್ಷಿಸಲು ಏಳು ರಸಗೊಬ್ಬರ ನಿಯಂತ್ರಣ ಪ್ರಯೋಗಾಲಯಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು, ಅವುಗಳಲ್ಲಿ ಆರು NABL ಮಾನ್ಯತೆ ಪಡೆದಿವೆ ಎಂದು ಮಾಹಿತಿ ನೀಡಿದ್ದಾರೆ. ಅಧಿಸೂಚಿತ ತನಿಖಾಧಿಕಾರಿಗಳು ತಮ್ಮ ಅಧಿಕಾರ ವ್ಯಾಪ್ತಿಯಲ್ಲಿರುವ ಡೀಲರ್‌ಗಳು, ಉತ್ಪಾದನಾ ಘಟಕಗಳು ಮತ್ತು ಗೋದಾಮುಗಳನ್ನು ನಿಯಮಿತವಾಗಿ ಪರಿಶೀಲಿಸುತ್ತಾರೆ. ರಸಗೊಬ್ಬರ (ನಿಯಂತ್ರಣ) ಆದೇಶ, 1985 ರ ನಿಬಂಧನೆಗಳ ಪ್ರಕಾರ ನಕಲಿ ಅಥವಾ ಕಳಪೆ ರಸಗೊಬ್ಬರಗಳ ಮಾರಾಟದ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾರೆ. ನಕಲಿ ರಸಗೊಬ್ಬರಗಳಿಂದ ಹಾನಿಗೊಳಗಾದ ರೈತರಿಗೆ ಪರಿಹಾರ ನೀಡಲು ಕೇಂದ್ರವು ಮಾರ್ಗಸೂಚಿಗಳನ್ನು ಹೊರಡಿಸಿಲ್ಲ ಎಂದು ಅನುಪ್ರಿಯಾ ಪಟೇಲ್ ಸ್ಪಷ್ಟಪಡಿಸಿದರು.

Category
ಕರಾವಳಿ ತರಂಗಿಣಿ