image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಹೆದ್ದಾರಿಗಳಲ್ಲಿ ಕಳಪೆ ಸಿ.ಸಿ.ಟಿವಿ ಕ್ಯಾಮೆರಾ ಅಳವಡಿಕೆ :ಪೊಲೀಸರ ಅಸಮಾಧಾನ

ಹೆದ್ದಾರಿಗಳಲ್ಲಿ ಕಳಪೆ ಸಿ.ಸಿ.ಟಿವಿ ಕ್ಯಾಮೆರಾ ಅಳವಡಿಕೆ :ಪೊಲೀಸರ ಅಸಮಾಧಾನ

ಚಿತ್ರದುರ್ಗ: 'ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಳವಡಿಸಿರುವ ಸಿ.ಸಿ. ಟಿವಿ ಕ್ಯಾಮೆರಾಗಳು ಗುಣಮಟ್ಟದಿಂದ ಕೂಡಿಲ್ಲ. ವಿಡಿಯೊಗಳಲ್ಲಿ ವಾಹನದ ನಂಬರ್ ಕೂಡ ಗೋಚರಿಸುವುದಿಲ್ಲ. ಅಪಘಾತಗಳು ಸಂಭವಿಸಿದಾಗ ವಾಹನಗಳ ಮಾಹಿತಿ ಸರಿಯಾಗಿ ದೊರೆಯುತ್ತಿಲ್ಲ' ಎಂದು ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಸೋಮವಾರ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಪೊಲೀಸರು ಅಸಮಾಧಾನ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಟಿ.ವೆಂಕಟೇಶ್‌ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ ಕುಮಾರ್‌ ಬಂಡಾರು ಮಾತನಾಡಿ, 'ಗುಣಮಟ್ಟದ ಸಿ.ಸಿ. ಟಿವಿ ಕ್ಯಾಮೆರಾ ಅಳವಡಿಸದ ಕಾರಣ ಸಮಸ್ಯೆಯಾಗುತ್ತಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ನಾವು ಹೇಳುವ ಕಡೆಗಳಲ್ಲಿ ಕ್ಯಾಮೆರಾ ಅಳವಡಿಸಬೇಕು. ಜೊತೆಗೆ ನಗರದಲ್ಲಿ ಟ್ರಾಫಿಕ್ ಸಿಗ್ನಲ್ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅವುಗಳನ್ನು ನಗರಸಭೆಯವರು ನಿರ್ವಹಣೆ ಮಾಡಬೇಕು' ಎಂದು ಹೇಳಿದರು.

ಜಿಲ್ಲಾಧಿಕಾರಿ ವೆಂಕಟೇಶ್‌ ಮಾತನಾಡಿ 'ರಾಷ್ಟ್ರೀಯ ಹೆದ್ದಾರಿ ಬೆಂಗಳೂರು ಕಡೆ ಹೋಗುವ ರಸ್ತೆಯಲ್ಲಿ ಗೊರ್ಲಡಕು ಗೇಟ್, ಜೆ.ಜೆ. ಹಳ್ಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಸುಗಮ ಸಂಚಾರಕ್ಕೆ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಎರಡು ದಿನದೊಳಗೆ ರಸ್ತೆ ಕಾಮಗಾರಿ ಮುಗಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಎರಡು ದಿನದೊಳಗೆ ಕಾಮಗಾರಿ ಪೂರ್ಣಗೊಳಿಸದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಬಂಧಿಸಬೇಕು' ಎಂದು ಪೊಲೀಸರಿಗೆ ಸೂಚಿಸಿದರು. 'ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನಗಳಿಗೆ ನಿಗದಿಯನುಸಾರ ಟೋಲ್‌ ಸಂಗ್ರಹಿಸಲಾಗುತ್ತಿದೆ. ಆದರೆ ಕೆಲವೆಡೆ ರಸ್ತೆಗಳು ಬಹಳಷ್ಟು ಹಾಳಾಗಿದ್ದು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ' ಎಂದರು. 'ಜಿಲ್ಲಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ, ಜಿಲ್ಲಾ ಮುಖ್ಯ ರಸ್ತೆ ಹಾಗೂ ಗ್ರಾಮೀಣ ರಸ್ತೆಗಳನ್ನು ಸಂಪರ್ಕಿಸುವ ರಸ್ತೆಗಳಲ್ಲಿ, ಜಂಕ್ಷನ್, ತಿರುವುಗಳಲ್ಲಿ ಅಗತ್ಯ ಮುಂಜಾಗ್ರತಾ ರಸ್ತೆ ಸುರಕ್ಷಾ ಕ್ರಮ ಕೈಗೊಳ್ಳಬೇಕು. ಬ್ಲಾಕ್ ಸ್ಪಾಟ್‍ಗಳಲ್ಲಿ ಸೂಚನಾ ಫಲಕ, ಹಂಪ್ಸ್, ರಂಬಲ್ ಸ್ಟ್ರೀಪ್ಸ್, ಕ್ಯಾಟ್ ಐಸ್ ಮತ್ತು ಬ್ಲಿಂಕರ್ಸ್ ಅಳವಡಿಕೆ ಸೇರಿದಂತೆ ಅಗತ್ಯ ರಸ್ತೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಬೇಕು' ಎಂದರು. 'ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿಲ್ಲಿಸುತ್ತಿರುವ ಲಾರಿಗಳಿಂದ ಅಪಘಾತ ಸಂಭವಿಸುತ್ತಿವೆ. ಪಾರ್ಕಿಂಗ್ ಮಾಡದಂತೆ ವಿವಿಧ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡಂತೆ ಉಪ ಸಮಿತಿ ರಚನೆ ಮಾಡಿ ಪಾರ್ಕಿಂಗ್ ಮಾಡುತ್ತಿರುವ ಲಾರಿಗಳನ್ನು ವಶಪಡಿಸಿಕೊಳ್ಳಬೇಕು. ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ರಸ್ತೆ ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲು ಹೆಚ್ಚಿನ ಅನುದಾನ ಒದಗಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು' ಎಂದು ಜಿಲ್ಲಾಧಿಕಾರಿ ತಿಳಿಸಿದರು. 'ರಾಷ್ಟ್ರೀಯ ಹೆದ್ದಾರಿಯ ಟೋಲ್ ಸಂಗ್ರಹಣಾ ಸ್ಥಳಗಳ ಎರಡೂ ಬದಿಗಳಲ್ಲಿ ಅನಧಿಕೃತವಾಗಿ ಗೂಡಂಗಡಿಗಳು ನಿರ್ಮಾಣಗೊಂಡಿವೆ. ವಾಹನಗಳ ಪಾರ್ಕಿಂಗ್ ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟು ಮಾಡುತ್ತಿವೆ. ಈ ಅಂಗಡಿಗಳಿಗೆ ಯಾವುದೇ ಅನುಮತಿ ಇಲ್ಲ. ಹೀಗಾಗಿ ಕೂಡಲೇ ಇಂತಹ ಅಂಗಡಿಗಳನ್ನು ತೆರವುಗೊಳಿಸಲು ಕ್ರಮ ವಹಿಸಬೇಕು' ಎಂದರು.

Category
ಕರಾವಳಿ ತರಂಗಿಣಿ