ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ ಜೀವರಕ್ಷಕ ಸವಲತ್ತುಗಳಿರುವ ಆಂಬ್ಯುಲೆನ್ಸ್ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಇಂದು ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ "ಮುಖ್ಯಮಂತ್ರಿಗಳ ಆಪತ್ಕಾಲ ಯಾನ ಸೇವೆ: ನೂತನ 65 ಆಂಬ್ಯುಲೆನ್ಸ್"ಗಳನ್ನು ಲೋಕಾರ್ಪಣೆ ಮಾಡಲಾಯಿತು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ''ಅಪಘಾತದ ಸಂದರ್ಭದಲ್ಲಿ 'ಗೋಲ್ಡನ್ ಅವರ್' ಬಹಳ ಮುಖ್ಯ. ಈ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆಂಬ್ಯುಲೆನ್ಸ್ಗಳು ನೆರವಾಗುತ್ತವೆ. ಸದ್ಯ 65 ಆಧನಿಕ ಮತ್ತು ಪ್ರಾಥಮಿಕ ಆಂಬ್ಯುಲೆನ್ಸ್ಗಳನ್ನು ಲೋಕಾರ್ಪಣೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಆಧುನಿಕ ಸವಲತ್ತುಗಳಿರುವ ಆಂಬ್ಯುಲೆನ್ಸ್ ವಿಸ್ತರಿಸಲಾಗುವುದು ಎಂದು ಹೇಳಿದರು.
ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಯುವ ಸಮೂಹಕ್ಕೆ ಸಿಎಂ ಕಿವಿಮಾತು ಹೇಳಿದರು.
ಮೊಬೈಲ್ನಲ್ಲಿ ಮಾತನಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತದಾ? ಎಂದು ಪ್ರಶ್ನಿಸಿದ ಸಿಎಂ, ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೂ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ತಿಳಿಸಿದರು.