ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಮೀಸಲಿರಿಸಿದ್ದ ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳು ಲಭ್ಯರಿಲ್ಲದ ಕಾರಣ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಣಯ ಕೈಗೊಂಡಿದ್ದು, ಸಭೆ ನಂತರ ಕಾನೂನು ಸಚಿವ ಎಚ್.ಕೆ. ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡರು.
2021 22ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಿರಿಸಲಾಗಿದ್ದ ಉರ್ದು ಮಾಧ್ಯಮದ ಶಿಕ್ಷಕರ ಹುದ್ದೆಗಳನ್ನು ಸಾಮಾನ್ಯ ಅಭ್ಯರ್ಥಿಗಳಿಂದ ಭರ್ತಿ ಮಾಡಲು ಅವಕಾಶ ಕಲ್ಪಿಸುವ ಬಗ್ಗೆ ತೀರ್ಮಾನಿಸಲಾಗಿದೆ. ಇತರೆ ಹಿಂದುಳಿದ ವರ್ಗಗಳಿಗೆ ಮೀಸಲಿರಿಸಿರುವ ಆದರೆ ಅರ್ಹ ಅಭ್ಯರ್ಥಿಗಳು ಲಭ್ಯತೆಯಿಲ್ಲದ ಕಾರಣ ಭರ್ತಿಯಾಗದೆ ಉಳಿದಿರುವ 67 ಉರ್ದು ಮಾಧ್ಯಮ ಶಿಕ್ಷಕರ ಹುದ್ದೆಗಳನ್ನು ಸಾಮಾನ್ಯ ವರ್ಗಕ್ಕೆ ಪರಿವರ್ತಿಸಲು ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಂದ ಈ ಹುದ್ದೆಗಳನ್ನು ಭರ್ತಿ ಮಾಡಲು ಒಂದು ಬಾರಿ ಅವಕಾಶ ಕಲ್ಪಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.