ಬೆಂಗಳೂರು : ರಾಜ್ಯ ಸರ್ಕಾರ ಹಾಗೂ ಪಕ್ಷಕ್ಕೆ ತೀವ್ರ ಹಾನಿಯುಂಟು ಮಾಡುತ್ತಿರುವ ನಾಯಕತ್ವ ಬದಲಾವಣೆ ಗೊಂದಲಕ್ಕೆ ಅಂತಿಮ ತೆರೆ ಎಳೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇರಾನೇರ ಒತ್ತಾಯಿಸಿದ್ದಾರೆ. ಇದಕ್ಕೆ ಸ್ಪಂದಿಸಿರುವ ಖರ್ಗೆ ಅವರು, ದೆಹಲಿಗೆ ತೆರಳಿದ ಕೂಡಲೇ ವರಿಷ್ಠ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಈ ಬಗ್ಗೆ ಸ್ಪಷ್ಟತೆ ನೀಡುವ ಮೂಲಕ ಗೊಂದಲ ಪರಿಹರಿಸುವ ಭರವಸೆ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ, ಪ್ರಸ್ತುತ ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ನ. 26ರಂದು ಹಿಂತಿರುಗಲಿದ್ದು, ಅನಂತರ ಹೈಕಮಾಂಡ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿಗೆ ಬುಲಾವ್ ನೀಡಿ ಈ ವಿಚಾರದ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ. ಈ ನಡುವೆ ಸಂಪುಟ ಪುನಾರಚನೆಗೆ ಅವಕಾಶ ಕೋರಿ ಮತ್ತೊಮ್ಮೆ ಖರ್ಗೆ ಬಳಿ ಸಿಎಂ ಸಿದ್ದರಾಮಯ್ಯ ಬೇಡಿಕೆ ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ತುಂಬಿದ ಬೆನ್ನಲ್ಲೇ ತೀವ್ರಗೊಂಡಿರುವ ಅಧಿಕಾರ ಹಸ್ತಾಂತರ ಗೊಂದಲ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ನಡೆಸಿದ ಸುಮಾರು ಒಂದೂವರೆ ಗಂಟೆ ಅವಧಿಯ ಸುದೀರ್ಘ ಚರ್ಚೆಯ ಒಟ್ಟಾರೆ ಫಲಿತಾಂಶವಿದು. ಈ ಚರ್ಚೆಯ ವೇಳೆ ಸಚಿವ ಸಂಪುಟ ಪುನಾರಚನೆಯೂ ಸೇರಿದಂತೆ ಹಲವು ವಿಚಾರಗಳ ಬಗ್ಗೆ ವಿವರವಾದ ಚರ್ಚೆ ನಡೆದಿದೆ. ಆದರೆ, ಮುಖ್ಯವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬೆಂಬಲಿತ ಶಾಸಕರು ನಾಯಕತ್ವ ಬದಲಾವಣೆ ವಿಚಾರವನ್ನು ಬಹಿರಂಗವಾಗಿ ಚರ್ಚಿಸುತ್ತಿರುವುದು ಹಾಗೂ ದೆಹಲಿಗೆ ಪರೇಡ್ ನಡೆಸುತ್ತಿರುವುದನ್ನು ಪ್ರಸ್ತಾಪಿಸಿದ ಸಿದ್ದರಾಮಯ್ಯ ಅವರು ತೀವ್ರ ಬೇಸರ ವ್ಯಕ್ತಪಡಿಸಿದರು ಎನ್ನಲಾಗಿದೆ.
ಈ ಬೆಳವಣಿಗೆಗಳಿಂದ ಪಕ್ಷ ಹಾಗೂ ಸರ್ಕಾರಕ್ಕೆ ಭಾರಿ ಪ್ರಮಾಣದಲ್ಲಿ ಹಾನಿಯುಂಟಾಗುತ್ತಿದ್ದು, ಸಾರ್ವಜನಿಕರಲ್ಲೂ ಗೊಂದಲಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ಮಧ್ಯಪ್ರವೇಶಿಸಿ, ಈ ವಿಚಾರಕ್ಕೆ ತೆರೆ ಎಳೆಯಬೇಕು ಎಂದು ನೇರ ಒತ್ತಾಯ ಮಾಡಿದರು ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಖರ್ಗೆ ಅವರು ಬಣ ರಾಜಕಾರಣದಿಂದ ಪಕ್ಷಕ್ಕೆ ಹಾನಿಯುಂಟಾಗುತ್ತಿದ್ದು, ಇದಕ್ಕೆ ಅಧಿಕಾರ ಹಸ್ತಾಂತರ ವಿಚಾರವೇ ಮುಖ್ಯ ಕಾರಣ. ಹೀಗಾಗಿ ವರಿಷ್ಠರೊಂದಿಗೆ ಚರ್ಚಿಸಿ ಸ್ಪಷ್ಟತೆ ನೀಡುವ ಭರವಸೆ ನೀಡಿದರು ಎನ್ನಲಾಗಿದೆ.