image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸಿದ್ದರಾಮಯ್ಯರಿಂದ ತಾಕೀತು!

ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಸಿದ್ದರಾಮಯ್ಯರಿಂದ ತಾಕೀತು!

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಪರಸ್ಪರ 'ಸಹಕಾರ' ವಾರ್‌ ನಡೆಯುತ್ತಿದ್ದು, ಕರ್ನಾಟಕದಲ್ಲಿ ರೈಲ್ವೆ ಯೋಜನೆ ಅನುಷ್ಠಾನಕ್ಕೆ ಭೂಮಿ ಸಿಗುತ್ತಿಲ್ಲ, ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂಬುದಾಗಿ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್‌ ಹಾಗೂ ವಿ.ಸೋಮಣ್ಣ ಹೇಳಿಕೆ ನೀಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ರೈಲ್ವೆ ಯೋಜನೆಗಳ ತ್ವರಿತ ಪ್ರಕ್ರಿಯೆಯತ್ತ ಗಮನ ಹರಿಸಿದ್ದಾರೆ. ರೈಲ್ವೆ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕೃಷ್ಣಾದಲ್ಲಿ ಸೋಮವಾರ ಜರುಗಿದ ವಿವಿಧ ರೈಲ್ವೆ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಪ್ರಗತಿಯಲ್ಲಿರುವ ವಿವಿಧ ರೈಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರದಿಂದ ಕಾಮಗಾರಿಗಳಿಗೆ 2581.67 ಕೋಟಿ ರೂ. ಹಾಗೂ ಭೂಸ್ವಾಧೀನ ಪ್ರಕ್ರಿಯೆಗೆ 2950.22 ಕೋಟಿ ರೂ.ವನ್ನು ಬಿಡುಗಡೆ ಮಾಡಲಾಗಿದೆ. ಇನ್ನು ರೈಲ್ವೆ ಕಾಮಗಾರಿಗಳಿಗೆ ಬಾಕಿಯಿರುವ ಭೂಸ್ವಾಧೀನ ಪ್ರಕ್ರಿಯೆಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು. ಕುಡಚಿ-ಬಾಗಲಕೋಟೆ, ತುಮಕೂರು-ದಾವಣಗೆರೆ, ಬೇಲೂರು-ಹಾಸನ, ಶಿವಮೊಗ್ಗ-ರಾಣೆಬೆನ್ನೂರು, ಧಾರವಾಡ-ಬೆಳಗಾವಿ ರೈಲ್ವೆ ಮಾರ್ಗಗಳ ನಿರ್ಮಾಣ ಕಾಮಗಾರಿ ನಿಗದಿತ ಅವಧಿಯೊಳಗಾಗಿ ಕೈಗೊಳ್ಳಲು ಎಲ್ಲ ಅಗತ್ಯ ಪ್ರಕ್ರಿಯೆಗಳನ್ನು ತ್ವರಿತಗೊಳಿಸಬೇಕು ಎಂದು ಸೂಚನೆ ನೀಡಿದರು.

ರಾಜ್ಯದಲ್ಲಿ ಅನುಮೋದನೆಗೊಂಡಿರುವ ಎಲ್ಲ ರೈಲು ಯೋಜನೆಗಳಿಗೆ ಒಟ್ಟು 16,554 ಎಕರೆ ಭೂಮಿಯ ಅವಶ್ಯಕತೆ ಇದ್ದು, ಈ ಪೈಕಿ ಶೇಕಡಾ ಶೇ.84ರಷ್ಟು ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಇನ್ನು ಅಂದಾಜು 2685 ಎಕರೆಗಳಷ್ಟು ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಬೇಕಿದೆ ಎಂದರು. ರಾಜ್ಯದಲ್ಲಿ ಒಟ್ಟು 6 ವಿಮಾನ ನಿಲ್ದಾಣಗಳ ಕಾಮಗಾರಿಗಳು ಅನುಷ್ಠಾನದ ವಿವಿಧ ಹಂತದಲ್ಲಿವೆ. ಹಾಸನ ವಿಮಾನ ನಿಲ್ದಾಣ ಭೂಸ್ವಾಧೀನ ಪರಿಹಾರವನ್ನು ರೈತರಿಗೆ ಆದಷ್ಟು ಬೇಗನೆ ವಿತರಿಸಬೇಕು. ಎಲ್ಲ ವಿಮಾನ ನಿಲ್ದಾಣಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲು ಇರುವ ಎಲ್ಲ ತಾಂತ್ರಿಕ ಅಡಚಣೆಗಳನ್ನು ನಿವಾರಿಸಬೇಕು ಎಂದು ಮುಖ್ಯಮಂತ್ರಿ ನಿರ್ದೇಶನ ನೀಡಿದರು. ರಾಜ್ಯದ ರೈಲ್ವೆ ಯೋಜನೆಗಳಿಗೆ ಭೂಸ್ವಾಧೀನ ವಿಳಂಬವೇ ತೊಡಕಾಗಿದ್ದು, 3341 ಹೆಕ್ಟೇರ್‌ನಷ್ಟು ಭೂಮಿಗಾಗಿ ರೈಲ್ವೆ ಇಲಾಖೆ ಕಾದು ಕುಳಿತಿದೆ. ರೈಲ್ವೆ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಸಿದ್ಧವಿದೆ. ಭೂಸ್ವಾಧೀನ ವಿಚಾರದಲ್ಲಿ ಕರ್ನಾಟಕ ಸರ್ಕಾರ ಎಷ್ಟರ ಮಟ್ಟಿಗೆ ಸಹಕರಿಸುತ್ತದೆ ಎನ್ನುವುದರ ಮೇಲೆ ಯಶಸ್ಸು ನಿಂತಿದೆ ಎಂಬುದು ರಾಜ್ಯಸಭೆಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಉತ್ತರಿಸಿದ್ದರು. ಇನ್ನು ಹೆಜ್ಜಾಲ-ಚಾಮರಾಜನಗರ ಸೇರಿದಂತೆ ಇನ್ನಿತರ ರೈಲ್ವೆ ಯೋಜನೆ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಮನವಿ ಮಾಡಿದ್ದರೂ ಸ್ಪಂದನೆ ಸಿಕ್ಕಿಲ್ಲ ಎಂಬುದಾಗಿ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಈಚೆಗೆ ಹೇಳಿದ್ದರು.

Category
ಕರಾವಳಿ ತರಂಗಿಣಿ