ಬೆಂಗಳೂರು : ರಾಷ್ಟ್ರ ರಾಜಧಾನಿ ದಿಲ್ಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ 28 ಶಾಸಕರೊಂದಿಗೆ ಸಭೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ರಾಜಾಜಿ ನಗರ ಶಾಸಕ ಸುರೇಶ್ ಕುಮಾರ್ ಅವರ ಕೋರಿಕೆಯ ಮೇರೆಗೆ ಅವರೊಂದಿಗೆ ಇಂದು ಉನ್ನತಾಧಿಕಾರಿಗಳ ಸಭೆ ನಡೆಸಿದ ಸಚಿವರು, ಬೆಂಗಳೂರು ನಗರದಲ್ಲಿ ವಾಯುಮಾಲಿನ್ಯ, ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ಹೆಚ್ಚಾಗುತ್ತಿದ್ದು ಇದರ ನಿಯಂತ್ರಣಕ್ಕೆ ಪಕ್ಷಾತೀತವಾಗಿ ಎಲ್ಲ ಜನಪ್ರತಿನಿಧಿಗಳ ಸಹಕಾರದ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ಸುರೇಶ್ ಕುಮಾರ್ ವಿಷಯ ಪ್ರಸ್ತಾಪಿಸಿ ಬೆಂಗಳೂರು ನಗರದಲ್ಲಿ ರಸ್ತೆಯಲ್ಲಿನ ಧೂಳಿನಿಂದಾಗಿ ವಾಯು ಗುಣಮಟ್ಟ ಕ್ಷೀಣಿಸುತ್ತಿದ್ದು, ಮಕ್ಕಳಲ್ಲಿ ಉಸಿರಾಟದ ಸಮಸ್ಯೆ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ವೈದ್ಯರು ಬೆಂಗಳೂರು ಹೊರ ವಲಯಕ್ಕೆ ಹೋಗುವಂತೆ ಸಲಹೆ ನೀಡುತ್ತಿದ್ದಾರೆ. ವಾಯು ಗುಣಮಟ್ಟ ಕಾಪಾಡಲು ತುರ್ತು ಕ್ರಮ ಕೈಗೊಳ್ಳಬೇಕು ಎಂದರು.
ಇದಕ್ಕೆ ಸ್ಪಂದಿಸಿದ ಪರಿಸರ ಸಚಿವರು, ಈಗಾಗಲೇ ಬೆಂಗಳೂರಿನ 11 ಸ್ಥಳಗಳಲ್ಲಿ ಸ್ಥಾಪಿತ ಮತ್ತು 13 ಸಂಚಾರ ಘಟಕಗಳ ಮೂಲಕ ವಾಯು ಗುಣಮಟ್ಟ ಸೂಚ್ಯಂಕದ ಮೌಲ್ಯಮಾಪನ ಮಾಡಲಾಗುತ್ತಿದೆ ಎಂಬ ಮಾಹಿತಿ ನೀಡಿ. ವಾಯು ಗುಣಮಟ್ಟ ಸೂಚ್ಯಂಕ ಮೌಲ್ಯವು 100 ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ಜಾರಿ ಮಾಡಿ ನಿಗದಿತ ಕಾಲಮಿತಿಯಲ್ಲಿ ನಿಯಂತ್ರಿಸಲು ಸೂಚಿಸಿ. ಕ್ರಮ ವಹಿಸದಿದ್ದರೆ ನಿಯಮಾನುಸಾರ ಮೊಕದ್ದಮೆ ದಾಖಲಿಸಿ ಎಂದು ಸೂಚನೆ ನೀಡಿದರು. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಶೀಘ್ರವೇ ಅವರ ಅಧ್ಯಕ್ಷತೆಯಲ್ಲೇ ಬೆಂಗಳೂರು ನಗರದ ಎಲ್ಲ ಜನಪ್ರತಿನಿಧಿಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದರು. ಕೆಲವೇ ದಶಕಗಳ ಹಿಂದೆ ನಿವೃತ್ತರ ಸ್ವರ್ಗ, ಹವಾನಿಯಂತ್ರಿತ ನಗರ ಎಂದು ಖ್ಯಾತಿ ಪಡೆದಿದ್ದು ಉದ್ಯಾನ ನಗರಿ ಬೆಂಗಳೂರಿನಲ್ಲೂ ಇಂದು ಬಿಸಿಲ ಬೇಗೆ ಹೆಚ್ಚುತ್ತಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆ ಇದಕ್ಕೆ ಕಾರಣವಾಗಿದ್ದರೂ, ನಗರದ ಹಸಿರು ಹೊದಿಕೆ ಹೆಚ್ಚಿಸಿ ನಗರದ ವಾಯು ಗುಣಮಟ್ಟ ರಕ್ಷಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.