image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸರ್ಕಾರಿ ಶಾಲೆಗಳ ಸಬಲೀಕರಣವೇ ನಮ್ಮ ಸರ್ಕಾರದ ಆದ್ಯತೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳ ಸಬಲೀಕರಣವೇ ನಮ್ಮ ಸರ್ಕಾರದ ಆದ್ಯತೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಮಕ್ಕಳ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳನ್ನು ಬಲಪಡಿಸುವುದು ಮತ್ತು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರು ಹೇಳಿದರು.
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ 55ನೇ ಸುವರ್ಣ ಸಂಭ್ರಮ ಹಾಗೂ ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನದಲ್ಲಿ ಪಾಲ್ಗೊಂಡು ಅವರು ಮಾತನಾಡಿ, 
ಕಳೆದ ಎರಡು ವರ್ಷಗಳಲ್ಲಿ ಸುಮಾರು 14,499 ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಉತ್ತರ ಕರ್ನಾಟಕ ಭಾಗದ ಶಿಕ್ಷಕರು ಎದುರಿಸುತ್ತಿದ್ದ ವರ್ಗಾವಣೆ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಶಿಕ್ಷಕ ಸ್ನೇಹಿ ಆಡಳಿತಕ್ಕೆ ಒತ್ತು ನೀಡಲಾಗಿದೆ ಎಂದರು.ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯದ 46,000 ಸರ್ಕಾರಿ ಶಾಲೆಗಳಲ್ಲಿ ಏಕಕಾಲಕ್ಕೆ ಪೋಷಕರ ಸಭೆಯನ್ನು ನಡೆಸುವ ಮೂಲಕ ಶಾಲಾ ಅಭಿವೃದ್ಧಿಯಲ್ಲಿ ಸಮುದಾಯದ ಸಹಭಾಗಿತ್ವವನ್ನು ಹೆಚ್ಚಿಸಲಾಗಿದೆ.
ಮಕ್ಕಳಿಗೆ ಮೊಟ್ಟೆ, ಹಾಲು, ಶೂ-ಸಾಕ್ಸ್ ಮತ್ತು ಪೌಷ್ಟಿಕಾಂಶಯುಕ್ತ ಆಹಾರ ನೀಡುವ ಯೋಜನೆಗಳನ್ನು ಚುರುಕುಗೊಳಿಸಲಾಗಿದೆ. ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿಯನ್ನು ಶೇಕಡಾ 20 ರಷ್ಟು ಹೆಚ್ಚಿಸುವ ಗುರಿಯನ್ನು ಶಿಕ್ಷಕರು ಹೊಂದಬೇಕು ಎಂದು ಸಚಿವರು ಕರೆ ನೀಡಿದರು.
ಮಕ್ಕಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದು ದೇಶದಲ್ಲೇ ಮಾದರಿ ಯೋಜನೆಯಾಗಿದೆ.

ಕಾರ್ಯಕ್ರಮದಲ್ಲಿ ಸಾಹಿತಿ ಡಾ. ಬರಗೂರು ರಾಮಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ರಾಮೋಜಿಗೌಡ, ಎಐಪಿಟಿಎಫ್ ರಾಷ್ಟ್ರಾಧ್ಯಕ್ಷ ಬಸವರಾಜ ಗುರಿಕಾರ, ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಚಂದ್ರಶೇಖರ ನುಗ್ಗಲಿ ಸೇರಿದಂತೆ ಸಾವಿರಾರು ಶಿಕ್ಷಕರು ಭಾಗವಹಿಸಿದ್ದರು.

Category
ಕರಾವಳಿ ತರಂಗಿಣಿ