ಬೆಂಗಳೂರು: ರಾಜ್ಯದ ಕೈಗಾರಿಕಾ ವಲಯಕ್ಕೆ ಭರ್ಜರಿ ಉತ್ತೇಜನ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (SHLCC) 67ನೇ ಸಭೆಯಲ್ಲಿ ಒಟ್ಟು 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಮಹತ್ವದ ಅನುಮೋದನೆ ನೀಡಲಾಗಿದೆ. ಈ ಬೃಹತ್ ಹೂಡಿಕೆಯಿಂದ ರಾಜ್ಯದಲ್ಲಿ ಸುಮಾರು 15,032 ಜನರಿಗೆ ಹೊಸದಾಗಿ ಉದ್ಯೋಗಾವಕಾಶಗಳು ಲಭ್ಯವಾಗಲಿವೆ. ಗೃಹಕಚೇರಿ 'ಕೃಷ್ಣಾ'ದಲ್ಲಿ ನಡೆದ ಈ ಸಭೆಯಲ್ಲಿ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಚಾಲನೆ ನೀಡಲಾಗಿದ್ದು, ಇವುಗಳಲ್ಲಿ 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿವೆ. ಹೊಸದಾಗಿ ಅನುಮೋದನೆಗೊಂಡ 11 ಯೋಜನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 14,906.9 ಕೋಟಿ ರೂ. ಹೂಡಿಕೆಯಾಗಲಿದ್ದು, 13,050 ಉದ್ಯೋಗಗಳು ಸೃಷ್ಟಿಯಾಗಲಿವೆ. ಇನ್ನುಳಿದ 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳ ಮೂಲಕ 3,523.54 ಕೋಟಿ ರೂ. ಹೂಡಿಕೆಯಾಗಲಿದ್ದು, ಇದರಿಂದ 1,982 ಜನರಿಗೆ ಕೆಲಸ ಸಿಗಲಿದೆ. ಈ ಪ್ರಮುಖ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಬಿ.ಪಾಟೀಲ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಚಲುವರಾಯಸ್ವಾಮಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಉದ್ದೇಶಿತ 'ಆಟೋಮೋಟಿವ್ ರಿಸರ್ಚ್ ಅಸೋಸಿಯೇಷನ್ ಆಫ್ ಇಂಡಿಯಾ' (ARAI) ಪರೀಕ್ಷಾ ಕೇಂದ್ರದ ಸ್ಥಾಪನೆ ಕುರಿತು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ರಾಜ್ಯ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದರು. ಕೇಂದ್ರ ಸರ್ಕಾರ ಈಗಾಗಲೇ ಈ ಯೋಜನೆಗೆ ಅನುಮತಿ ನೀಡಿದ್ದು, ರಾಜ್ಯ ಸರ್ಕಾರವು 105 ಎಕರೆ ಜಾಗವನ್ನು ಒದಗಿಸಿದೆ. ಈ ಕೇಂದ್ರದ ಸುತ್ತಮುತ್ತ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿಪಡಿಸಲು ಹೆಚ್ಚುವರಿಯಾಗಿ 500ರಿಂದ 1,000 ಎಕರೆ ಜಾಗ ನೀಡುವಂತೆ ಚರ್ಚಿಸಲಾಗಿದ್ದು, ಇದರಿಂದ ಸುಮಾರು 25,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆಯಿದೆ. ಮೊದಲ ಹಂತದಲ್ಲಿ 750 ಕೋಟಿ ರೂ. ವೆಚ್ಚದಲ್ಲಿ ಈ ಕೇಂದ್ರ ನಿರ್ಮಾಣವಾಗಲಿದ್ದು, ಇದು ಕರ್ನಾಟಕದ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನಾ ಕೇಂದ್ರವಾಗಿ ಹೊರಹೊಮ್ಮಲಿದೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಈ ಕುರಿತು ಜಾಗ ಪರಿಶೀಲಿಸಿ ವರದಿ ನೀಡುವಂತೆ ಸಚಿವ ಎಂ.ಬಿ.ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.