ಕಲಬುರಗಿ : ಕಲಬುರಗಿ ಜಿಲ್ಲೆಯ ಆಳಂದದ ಲಾಡ್ಲೆ ಮಶಾಕ್ ದರ್ಗಾ ಗಲಭೆ ಪ್ರಕರಣವು ಈಗ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ಮುಸ್ಲಿಂ ಯುವಕರನ್ನು ಅಮಾಯಕರೆಂದು ಪರಿಗಣಿಸಿ ಅವರ ಮೇಲಿನ ಮೊಕದ್ದಮೆಗಳನ್ನು ಕೈಬಿಡುವಂತೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಗೃಹ ಸಚಿವ ಜಿ. ಪರಮೇಶ್ವರ್ ಅವರಿಗೆ ಬರೆದಿರುವ ಪತ್ರವು ತೀವ್ರ ವಿವಾದಕ್ಕೆ ನಾಂದಿ ಹಾಡಿದೆ. ಸ್ಪೀಕರ್ ಅವರ ಈ ನಡೆಯು ತಟಸ್ಥವಾಗಿರಬೇಕಾದ ಸಾಂವಿಧಾನಿಕ ಹುದ್ದೆಯ ಘನತೆಗೆ ಕುಂದು ತಂದಿದೆ ಎಂದು ಆರೋಪಿಸಿರುವ ಹಿಂದೂ ಸಂಘಟನೆಗಳು ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯ ಎಚ್ಚರಿಕೆ ನೀಡಿವೆ.
2022ರಲ್ಲಿ ಲಾಡ್ಲೆ ಮಶಾಕ್ ದರ್ಗಾ ಆವರಣದಲ್ಲಿರುವ ಶ್ರೀ ರಾಘವ ಚೈತನ್ಯ ಶಿವಲಿಂಗಕ್ಕೆ ಕಿಡಿಗೇಡಿಗಳು ಅಪವಿತ್ರಗೊಳಿಸಿದ ಹಿನ್ನೆಲೆಯಲ್ಲಿ, ಶಿವಲಿಂಗದ ಶುದ್ದೀಕರಣಕ್ಕೆ ತೆರಳಿದ್ದ ಹಿಂದೂ ಮುಖಂಡರು ಹಾಗೂ ಅಧಿಕಾರಿಗಳ ಮೇಲೆ ಭೀಕರ ಕಲ್ಲುತೂರಾಟ ನಡೆದಿತ್ತು. ಅಂದಿನ ಕೇಂದ್ರ ಸಚಿವ ಭಗವಂತ್ ಖೂಬಾ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವಾಹನಗಳನ್ನೇ ಗುರಿಯಾಗಿಸಿಕೊಂಡು ನೂರಾರು ಜನರು ದಾಳಿ ನಡೆಸಿದ್ದರು. ಈ ಗಲಭೆಗೆ ಸಂಬಂಧಿಸಿದಂತೆ ಮಾಸ್ಟರ್‌ಮೈಂಡ್ ಅನ್ಸಾರಿ ಸೇರಿದಂತೆ ಹಲವರ ವಿರುದ್ಧ ಆಳಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಕಾನೂನು ಪ್ರಕ್ರಿಯೆ ನಡೆಯುತ್ತಿದೆ.
ಆದರೆ, ಈಗ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಈ ಪ್ರಕರಣದಲ್ಲಿ ಬಂಧಿತರಾಗಿರುವ ಯುವಕರನ್ನು ಬಿಡುಗಡೆ ಮಾಡುವಂತೆ ಶಿಫಾರಸು ಮಾಡಿರುವುದು ಶಿವಸೇನೆ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರು ಒಂದು ನಿರ್ದಿಷ್ಟ ಸಮುದಾಯದ ಪರವಾಗಿ ನಿಂತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಸಂಘಟನೆಗಳು, ಒಂದು ವೇಳೆ ಸರ್ಕಾರ ಪ್ರಕರಣಗಳನ್ನು ವಾಪಸ್ ಪಡೆದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿವೆ. ಈ ಪತ್ರವು ರಾಜಕೀಯ ವಲಯದಲ್ಲೂ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆಯ ದೃಷ್ಟಿಯಿಂದ ಈ ಬೆಳವಣಿಗೆಯು ಕುತೂಹಲ ಕೆರಳಿಸಿದೆ.