image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅನುತ್ತೀರ್ಣರಾದವರಿಗೆ ವಿಶೇಷ ಬೋಧನಾ ತರಗತಿ ಆರಂಭ

ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಅನುತ್ತೀರ್ಣರಾದವರಿಗೆ ವಿಶೇಷ ಬೋಧನಾ ತರಗತಿ ಆರಂಭ

ಮಂಗಳೂರು : ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಬಯಸುವ ವಿದ್ಯಾರ್ಥಿಗಳಿಗಾಗಿ ಶಾಲಾ ಶಿಕ್ಷಣ ಇಲಾಖೆಯು (ಪದವಿ ಪೂರ್ವ) ಮಹತ್ವದ ನಿರ್ಧಾರ ಕೈಗೊಂಡಿದೆ. ಇಂತಹ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ವಿಶೇಷ ಹೆಚ್ಚುವರಿ ಬೋಧನಾ ತರಗತಿ ಹಾಗೂ ವಿವಿಧ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಇಲಾಖೆಯು ಅಧಿಕೃತ ಸುತ್ತೋಲೆ ಹೊರಡಿಸಿದೆ.

​ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಪಿಯು ಕಾಲೇಜುಗಳಲ್ಲಿ ಈಗಾಗಲೇ ಈ ವಿಶೇಷ ತರಗತಿಗಳು ಆರಂಭಗೊಂಡಿದ್ದು, ಪರೀಕ್ಷೆಯಲ್ಲಿ ಹಿನ್ನಡೆ ಅನುಭವಿಸಿದ ವಿದ್ಯಾರ್ಥಿಗಳಿಗೆ ಇದು ಆಶಾಕಿರಣವಾಗಿದೆ. ವಿಶೇಷವಾಗಿ ಕಠಿಣವೆನಿಸುವ ಇಂಗ್ಲಿಷ್ ಮತ್ತು ರಾಜ್ಯಶಾಸ್ತ್ರದಂತಹ ವಿಷಯಗಳ ಮೇಲೆ ಹೆಚ್ಚಿನ ಗಮನಹರಿಸಲಾಗುತ್ತಿದ್ದು, ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿಸುವ ಪ್ರಯತ್ನ ಮಾಡಲಾಗುತ್ತಿದೆ. ದ್ವಿತೀಯ ಪಿಯುಸಿಯ 'ಪರೀಕ್ಷೆ-೨' (ಹಳೆಯ ಪೂರಕ ಪರೀಕ್ಷೆ) ಏಪ್ರಿಲ್ ೩೦ರಿಂದ ಪ್ರಾರಂಭವಾಗಲಿದ್ದು, ಆ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ.

​ಜಿಲ್ಲೆಯ ಸುಮಾರು ೨೧೩ ಕಾಲೇಜುಗಳ ವಿದ್ಯಾರ್ಥಿಗಳಿಗಾಗಿ ಎಂಟು ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಫಲಿತಾಂಶ ಸುಧಾರಣೆಗೆ ಇಲಾಖೆಯು ಸರ್ವ ಸನ್ನದ್ಧವಾಗಿದೆ. ಈ ತರಬೇತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ವರ್ಷವನ್ನು ಉಳಿಸಿಕೊಳ್ಳಲು ಮತ್ತು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಲು ಅವಕಾಶ ಕಲ್ಪಿಸಲಾಗಿದೆ. ಪೋಷಕರು ಮತ್ತು ವಿದ್ಯಾರ್ಥಿಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.

Category
ಕರಾವಳಿ ತರಂಗಿಣಿ