ಹಾಸನ : ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯನ್ನು ಅಪಹರಿಸಿದ ಆರೋಪ ಎದುರಿಸುತ್ತಿರುವ ಶಾಸಕ ಹೆಚ್.ಡಿ. ರೇವಣ್ಣ ಅವರು ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ. ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ಸಿಐಡಿ ಸಲ್ಲಿಸಿರುವ ದೋಷಾರೋಪ ಪಟ್ಟಿಯನ್ನು ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಅವರಿದ್ದ ಪೀಠವು, ಕೆಳ ನ್ಯಾಯಾಲಯದಲ್ಲಿ ವಿಚಾರಣೆಯನ್ನು ಕಾನೂನುಬದ್ಧವಾಗಿ ಮುಂದುವರಿಸಲು ಸೂಚನೆ ನೀಡಿತು. ಈ ಹಿನ್ನೆಲೆಯಲ್ಲಿ ರೇವಣ್ಣ ಪರ ವಕೀಲರು ಅರ್ಜಿಯನ್ನು ವಾಪಸ್ ಪಡೆದಿದ್ದು, ಇದರಿಂದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಸುಗಮವಾಗಿ ನಡೆಯಲು ಹಾದಿ ಸುಗಮವಾಗಿದೆ.
ಈ ಹಿಂದೆ ಪ್ರಕರಣದ ದೋಷಾರೋಪ ನಿಗದಿ ಪ್ರಕ್ರಿಯೆಗೆ ಹೈಕೋರ್ಟ್ ನೀಡಿದ್ದ ತಡೆಯಾಜ್ಞೆಯನ್ನು 2026ರ ಫೆಬ್ರವರಿ 5ರಂದು ತೆರವುಗೊಳಿಸಲಾಗಿತ್ತು. ವಿಚಾರಣೆ ವೇಳೆ ಸರ್ಕಾರಿ ಅಭಿಯೋಜಕರು ಈ ವಿಷಯವನ್ನು ನ್ಯಾಯಾಲಯದ ಗಮನಕ್ಕೆ ತಂದು, ಈಗಾಗಲೇ ವಿಶೇಷ ನ್ಯಾಯಾಲಯವು ವಿಚಾರಣಾ ಪ್ರಕ್ರಿಯೆಯನ್ನು ಆರಂಭಿಸಿದೆ ಎಂದು ತಿಳಿಸಿದರು. ಮನೆಗೆಲಸದ ಮಹಿಳೆಯನ್ನು ಅಪಹರಿಸಿದ ಆರೋಪದ ಮೇಲೆ ಹೆಚ್.ಡಿ. ರೇವಣ್ಣ, ಭವಾನಿ ರೇವಣ್ಣ ಸೇರಿದಂತೆ ಒಟ್ಟು ಒಂಬತ್ತು ಜನರ ವಿರುದ್ಧ ಮೈಸೂರಿನ ಕೆ.ಆರ್. ಪೇಟೆ ಪೊಲೀಸ್ ಠಾಣೆಯಲ್ಲಿ 2025ರ ಮೇ ತಿಂಗಳಲ್ಲಿ ದೂರು ದಾಖಲಾಗಿತ್ತು. ಪ್ರಸ್ತುತ ಹೈಕೋರ್ಟ್‌ನ ನಿರ್ದೇಶನದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆರೋಪಿಗಳ ವಿರುದ್ಧ ದೋಷಾರೋಪ ನಿಗದಿ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಲಿದೆ.