image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಸೂರ್ಯಕಾಂತಿ ಬೆಳೆಗಾರರಿಗೆ ಬಂಪರ್ ಕೊಡುಗೆ: ಬೆಂಬಲ ಬೆಲೆಯಲ್ಲಿ ಖರೀದಿಗೆ ಕೇಂದ್ರ ಅಸ್ತು

ಸೂರ್ಯಕಾಂತಿ ಬೆಳೆಗಾರರಿಗೆ ಬಂಪರ್ ಕೊಡುಗೆ: ಬೆಂಬಲ ಬೆಲೆಯಲ್ಲಿ ಖರೀದಿಗೆ ಕೇಂದ್ರ ಅಸ್ತು

ಹುಬ್ಬಳ್ಳಿ: ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಕರ್ನಾಟಕದ ಸೂರ್ಯಕಾಂತಿ ಬೆಳೆಗಾರರ ಪಾಲಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಅವರ ವಿಶೇಷ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ, ಇದೀಗ ಬೆಂಬಲ ಬೆಲೆ (MSP) ಯೋಜನೆಯಡಿ ರಾಜ್ಯದಿಂದ ಒಟ್ಟು 9,023 ಮೆಟ್ರಿಕ್ ಟನ್ ಸೂರ್ಯಕಾಂತಿ ಖರೀದಿಸಲು ಹಸಿರು ನಿಶಾನೆ ತೋರಿಸಿದೆ.

​ಕೇಂದ್ರ ಕೃಷಿ ಸಚಿವಾಲಯವು ಪ್ರತಿ ಕ್ವಿಂಟಾಲ್ ಸೂರ್ಯಕಾಂತಿಗೆ ₹7,721 ಬೆಂಬಲ ಬೆಲೆಯನ್ನು ನಿಗದಿಪಡಿಸಿದ್ದು, ಈ ದರದಲ್ಲಿ ರೈತರಿಂದ ನೇರ ಖರೀದಿ ಪ್ರಕ್ರಿಯೆ ಆರಂಭಿಸಲು ಅನುಮೋದನೆ ನೀಡಿದೆ. ರಾಜ್ಯದಲ್ಲಿ ಸೂರ್ಯಕಾಂತಿ ಪ್ರಮುಖ ಎಣ್ಣೆಬೀಜ ಬೆಳೆಯಾಗಿದ್ದು, ಸುಮಾರು 0.59 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 0.44 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಬೆಲೆ ತೀವ್ರವಾಗಿ ಕುಸಿದಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಗಂಭೀರ ಪರಿಸ್ಥಿತಿಯನ್ನು ಅರಿತ ಸಚಿವ ಪ್ರಲ್ಹಾದ ಜೋಶಿ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರ ಗಮನ ಸೆಳೆದು, ರೈತರ ರಕ್ಷಣೆಗೆ ಧಾವಿಸುವಂತೆ ಪತ್ರ ಬರೆದು ಒತ್ತಾಯಿಸಿದ್ದರು.

​ಸಚಿವ ಜೋಶಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಬೆಂಬಲ ಬೆಲೆಯಲ್ಲಿ ಖರೀದಿ ಪ್ರಕ್ರಿಯೆಗೆ ಅನುಮೋದನೆ ನೀಡಿರುವುದಾಗಿ ಅಧಿಕೃತವಾಗಿ ತಿಳಿಸಿದ್ದಾರೆ. ಈ ನಿರ್ಧಾರದಿಂದಾಗಿ ಮಾರುಕಟ್ಟೆಯಲ್ಲಿ ಬೆಲೆ ಕುಸಿತದ ಆತಂಕ ಎದುರಿಸುತ್ತಿದ್ದ ಸಾವಿರಾರು ರೈತರಿಗೆ ದೊಡ್ಡ ಮಟ್ಟದ ಆರ್ಥಿಕ ನೆರವು ಸಿಗಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಆದಾಯ ಹೆಚ್ಚಿಸಲು ಮತ್ತು ಅವರಿಗೆ ಸೂಕ್ತ ಬೆಲೆ ದೊರಕಿಸಿಕೊಡಲು ಸದಾ ಬದ್ಧರಾಗಿದ್ದಾರೆ ಎಂದು ಈ ಸಂದರ್ಭದಲ್ಲಿ ಸಚಿವ ಪ್ರಲ್ಹಾದ ಜೋಶಿ ಹರ್ಷ ವ್ಯಕ್ತಪಡಿಸಿ, ಕೇಂದ್ರ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

Category
ಕರಾವಳಿ ತರಂಗಿಣಿ