ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಲ್ಲಿ ಗೋವುಗಳ ಅಕ್ರಮ ಸಾಗಣೆ ಅಥವಾ ಹತ್ಯೆ ಮಾಡುವುದು ಕಂಡುಬಂದಲ್ಲಿ ಏಳು ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 10 ಲಕ್ಷ ರೂಪಾಯಿಗಳವರೆಗೆ ದಂಡ ವಿಧಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಮುಂಬರುವ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಒಂಟೆ ಮತ್ತು ಗೋವುಗಳ ಅಕ್ರಮ ಸಾಗಣೆ ಹಾಗೂ ಹತ್ಯೆಯನ್ನು ತಡೆಗಟ್ಟಲು ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ ಎಂದು ತಿಳಿಸಿದರು. ಜಿಲ್ಲೆಗೆ ಬರುವ ಎಲ್ಲಾ ವಾಹನಗಳನ್ನು ಕೂಲಂಕಷವಾಗಿ ತಪಾಸಣೆ ನಡೆಸಬೇಕು ಮತ್ತು ಅನಧಿಕೃತವಾಗಿ ಪ್ರಾಣಿಗಳನ್ನು ಸಾಗಿಸುತ್ತಿರುವುದು ಪತ್ತೆಯಾದಲ್ಲಿ ತಕ್ಷಣವೇ ವಾಹನಗಳನ್ನು ವಶಪಡಿಸಿಕೊಂಡು, ಅದರಲ್ಲಿರುವ ಗೋವುಗಳನ್ನು ಪಶುಪಾಲನಾ ಇಲಾಖೆಯ ಸಹಕಾರದೊಂದಿಗೆ ಸುರಕ್ಷಿತವಾಗಿ ಗೋಶಾಲೆಗಳಿಗೆ ರವಾನಿಸಬೇಕು ಎಂದು ಪೊಲೀಸ್ ಮತ್ತು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಂದ ಪ್ರಾಣಿಗಳನ್ನು ಅಕ್ರಮವಾಗಿ ತರುವುದನ್ನು ತಡೆಯಲು ನಗರದ ಪ್ರಮುಖ ಪ್ರವೇಶ ದ್ವಾರಗಳಾದ ಮೈಸೂರು ರಸ್ತೆ (ಕುಂಬಳಗೂಡು), ತುಮಕೂರು ರಸ್ತೆ (ಎಕ್ಸಿಬಿಷನ್ ಕೇಂದ್ರ), ಮಾಗಡಿ ರಸ್ತೆ (ತಾವರೆಕೆರೆ), ಹೊಸೂರು ರಸ್ತೆ (ಅತ್ತಿಬೆಲೆ) ಮತ್ತು ಹಳೆ ಮದ್ರಾಸ್ ರಸ್ತೆ (ಹೊಸಕೋಟೆ) ಸೇರಿದಂತೆ ಒಟ್ಟು 10 ಕಡೆಗಳಲ್ಲಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕೇಂದ್ರಗಳಲ್ಲಿ ಸಾರಿಗೆ ಇಲಾಖೆಯ ನೇತೃತ್ವದಲ್ಲಿ ಮೂರು ಪಾಳಿಗಳಲ್ಲಿ ಸಿಬ್ಬಂದಿಗಳು ಕಾರ್ಯನಿರ್ವಹಿಸಲಿದ್ದು, ಅಕ್ರಮ ಚಟುವಟಿಕೆಗಳ ಮೇಲೆ ನಿರಂತರ ನಿಗಾ ಇಡಲಿದ್ದಾರೆ. ಇದರೊಂದಿಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕರಪತ್ರ ವಿತರಣೆ ಮತ್ತು ಆಟೋರಿಕ್ಷಾಗಳ ಮೂಲಕ ಪ್ರಚಾರ ಕೈಗೊಳ್ಳಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ಅಕ್ರಮವಾಗಿ ಒಂಟೆ ಅಥವಾ ಗೋಹತ್ಯೆ ನಡೆಯುತ್ತಿರುವುದು ಗಮನಕ್ಕೆ ಬಂದಲ್ಲಿ ಸಾರ್ವಜನಿಕರು ತಕ್ಷಣವೇ ಬೆಂಗಳೂರು ನಗರ ಪಾಲಿಕೆಯ ಸಹಾಯವಾಣಿ ಸಂಖ್ಯೆ 1533ಕ್ಕೆ ಕರೆ ಮಾಡಿ ದೂರು ನೀಡಬಹುದಾಗಿದೆ. ಹಬ್ಬದ ಸಂದರ್ಭದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಸುರಿಯಬಾರದು ಮತ್ತು ಪ್ರಾಣಿ ವಧೆಯಿಂದ ಉಂಟಾಗುವ ತ್ಯಾಜ್ಯವನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಆದೇಶಿಸಿದರು. ಈ ಮಹತ್ವದ ಸಭೆಯಲ್ಲಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಡಾ. ಪರಮೇಶ್ವರ್ ಹಾಗೂ ಜಿಬಿಎ ಉಪ ನಿರ್ದೇಶಕ ಡಾ. ಚಂದ್ರಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.