ಬೆಂಗಳೂರು : ಘನತ್ಯಾಜ್ಯ ನಿರ್ವಹಣಾ ನಿಯಮಿತ (ಬಿಎಸ್‌ಡಬ್ಲ್ಯುಎಂಎಲ್) ಕರೆದಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ (ಐಎಸ್‌ಡಬ್ಲ್ಯುಎಂ) ಟೆಂಡರ್ ಪ್ರಕ್ರಿಯೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಲೋಕಾಯುಕ್ತ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಸುದೀರ್ಘ ಪತ್ರ ಬರೆದಿದ್ದಾರೆ. ಇಬ್ಬರು ಐಎಎಸ್ ಅಧಿಕಾರಿಗಳು ಈ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಈ ದೂರು ದಾಖಲಾಗಿರುವುದು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಉತ್ತರ ಮತ್ತು ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮತ್ತು ಸಾಗಣೆಗಾಗಿ ಬಿಎಸ್‌ಡಬ್ಲ್ಯುಎಂಎಲ್ ಕರೆದಿರುವ ಬೃಹತ್ ಪ್ಯಾಕೇಜ್ ಟೆಂಡರ್‌ನಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ. ನಿರ್ದಿಷ್ಟವಾಗಿ 'ರಾಮ್ಕಿ ಇನ್ಫ್ರಾಸ್ಟ್ರಕ್ಚರ್ ಪ್ರೈವೆಟ್ ಲಿಮಿಟೆಡ್' ಸಂಸ್ಥೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಯನ್ನು ಉಲ್ಲಂಘಿಸಿ ಬಿಡ್ ಪರಿಷ್ಕರಣೆ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.
ಭೂಸ್ವಾಧೀನ ಪ್ರಕ್ರಿಯೆ ಮತ್ತು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದರೂ, ದಿಢೀರನೆ ಮುಖ್ಯ ಇಂಜಿನಿಯರ್‌ಗಳನ್ನು ವರ್ಗಾವಣೆ ಮಾಡಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಯೋಜನಾ ವೆಚ್ಚದ ಬದಲಾವಣೆ, ಹಣಕಾಸಿನ ಮಾರ್ಗಸೂಚಿಗಳ ಉಲ್ಲಂಘನೆ ಮತ್ತು ಅಧಿಕಾರಿಗಳ ಅಧಿಕಾರ ದುರ್ಬಳಕೆಯ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಈ ಕುರಿತು 'ಎಕ್ಸ್' ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಯತ್ನಾಳ್, ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಆಗಿರುವ ಕಾರ್ಯವಿಧಾನದ ಲೋಪಗಳ ಬಗ್ಗೆ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರಿಗೆ ವಿವರವಾದ ದಾಖಲೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ಈ ಬೃಹತ್ ಹಗರಣದ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿರುವ ಶಂಕೆ ವ್ಯಕ್ತಪಡಿಸಿರುವ ಅವರು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.