ತುಮಕೂರು : ರಾಜ್ಯದಲ್ಲಿ ಸುಮಾರು 40 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿದ್ದು, ಕಳೆದ ಒಂದೂವರೆ ವರ್ಷದಲ್ಲಿ 14 ಲಕ್ಷ ವಾರಸುದಾರರ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಡಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಮೇ 20ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರು ನಗರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯದಾದ್ಯಂತ 'ನನ್ನ ಭೂಮಿ' ಅಭಿಯಾನದಡಿ ಪೌತಿ ಖಾತೆ ಮತ್ತು ಪೋಡಿ ದುರಸ್ತಿ ಆಂದೋಲನವನ್ನು ಚುರುಕುಗೊಳಿಸಲಾಗಿದೆ. 2018 ರಿಂದ 2023ರ ಅವಧಿಯಲ್ಲಿ ಕೇವಲ 8,500 ಪೋಡಿ ದುರಸ್ತಿಗಳಾಗಿದ್ದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2.52 ಲಕ್ಷ ರೈತರ ಜಮೀನುಗಳ ಪೋಡಿ ಕಾರ್ಯ ಪೂರ್ಣಗೊಂಡಿದೆ ಎಂದು ಅವರು ಅಂಕಿಅಂಶಗಳ ಸಮೇತ ವಿವರಿಸಿದರು.
ಇದೇ ವೇಳೆ ಹಟ್ಟಿ, ತಾಂಡಾ ಮತ್ತು ಕ್ಯಾಂಪ್‌ಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಪ್ರಕ್ರಿಯೆಯ ಬಗ್ಗೆಯೂ ಮಾಹಿತಿ ನೀಡಿದ ಸಚಿವರು, 2017 ರಿಂದ 2023ರವರೆಗೆ 1.06 ಲಕ್ಷ ಜನರಿಗೆ ಹಕ್ಕುಪತ್ರ ನೀಡಲಾಗಿತ್ತು. ಆದರೆ ಕಳೆದ ಎರಡೂವರೆ ವರ್ಷಗಳಲ್ಲಿಯೇ 2.20 ಲಕ್ಷ ಮನೆಗಳಿಗೆ ಹಕ್ಕುಪತ್ರ ವಿತರಿಸಲಾಗಿದ್ದು, ಇನ್ನೂ 2 ಲಕ್ಷ ಬಾಕಿ ಇವೆ. ಪ್ರಸ್ತುತ ಗಣತಿ ಕಾರ್ಯ ನಡೆಯುತ್ತಿರುವುದರಿಂದ ಈ ವಿಳಂಬ ಉಂಟಾಗಿದೆ ಎಂದರು. ತುಮಕೂರು ಜಿಲ್ಲೆಯಲ್ಲಿ ಇದುವರೆಗೆ 1.06 ಲಕ್ಷ ಮಾಲೀಕರಿಗೆ ಪೌತಿ ಖಾತೆ, 24,256 ಪೋಡಿ ದುರಸ್ತಿ ಹಾಗೂ 20,666 ಜನರಿಗೆ ಹಕ್ಕುಪತ್ರಗಳನ್ನು ನೀಡಲಾಗಿದ್ದು, ಮುಂದಿನ ಸಾಧನಾ ಸಮಾವೇಶದ ವೇಳೆಗೆ ಎಲ್ಲಾ ಅರ್ಹರಿಗೆ ದಾಖಲೆ ತಲುಪಿಸುವ ಗುರಿ ಹೊಂದಲಾಗಿದೆ ಎಂದು ಅವರು ಭರವಸೆ ನೀಡಿದರು.
ಕಂದಾಯ ಇಲಾಖೆಯಲ್ಲಿ ತಂತ್ರಜ್ಞಾನದ ಬಳಕೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ರಾಜ್ಯದ 83 ಕೋಟಿ ಪುಟಗಳ ಮೂಲ ಕಡತಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಇದಕ್ಕಾಗಿ ₹120 ಕೋಟಿ ವ್ಯಯಿಸಲಾಗಿದ್ದು, ಈಗಾಗಲೇ 122 ತಾಲ್ಲೂಕುಗಳು ಮತ್ತು ಜಿಲ್ಲಾಧಿಕಾರಿ ಕಚೇರಿಗಳಲ್ಲಿ ಕಾರ್ಯ ಮುಗಿದಿದೆ. ಮುಂದಿನ ನಾಲ್ಕು ತಿಂಗಳಲ್ಲಿ ಇಡೀ ರಾಜ್ಯದ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳ್ಳಲಿದ್ದು, ಇದರಿಂದ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಿ ದಾಖಲೆ ಪಡೆಯಬಹುದಾಗಿದೆ. ಈ ಸಂದರ್ಭದಲ್ಲಿ ಕಾಡುಗೊಲ್ಲರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಹಾರೋಗೆರೆ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಬಿ.ವಿ.ಅಶ್ವಿಜ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಉಪಸ್ಥಿತರಿದ್ದರು.