ಬೆಂಗಳೂರು : ಕ್ರಿಮಿನಲ್ ಪ್ರಕರಣವೊಂದರಲ್ಲಿ ಆರೋಪಿಯ ವಿರುದ್ಧ ಒಮ್ಮೆ ನಿರೀಕ್ಷಣಾ ಜಾಮೀನು ಮಂಜೂರಾದರೆ, ಅದು ತನಿಖೆ ಮುಗಿದು ಆರೋಪ ಪಟ್ಟಿ (ಚಾರ್ಜ್ ಶೀಟ್) ಸಲ್ಲಿಕೆಯಾದ ಬಳಿಕವೂ ಮುಂದುವರೆಯಲಿದೆ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಒಮ್ಮೆ ಮಂಜೂರಾದ ನಿರೀಕ್ಷಣಾ ಜಾಮೀನನ್ನು ಕಾನೂನುಬದ್ಧವಾಗಿ ರದ್ದುಗೊಳಿಸುವುದಕ್ಕೂ ಮುನ್ನ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವುದಕ್ಕೆ ಅವಕಾಶವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ನಿರೀಕ್ಷಣಾ ಜಾಮೀನು ಹೊಂದಿದ್ದರೂ ತಮ್ಮನ್ನು ಬಂಧಿಸಲು ಆದೇಶಿಸಿದ್ದ ವಿಚಾರಣಾ ನ್ಯಾಯಾಲಯದ ಕ್ರಮವನ್ನು ಪ್ರಶ್ನಿಸಿ ಆರೋಪಿಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಜಯ್ ಕುಮಾರ್ ಎ. ಪಾಟೀಲ್ ಅವರಿದ್ದ ಏಕಸದಸ್ಯ ಪೀಠವು ಈ ಆದೇಶವನ್ನು ಹೊರಡಿಸಿದೆ.
ಪ್ರಕರಣದಲ್ಲಿ ಆರೋಪಿಗೆ ಈಗಾಗಲೇ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರಾಗಿದ್ದು, ಅವರು ಯಾವುದೇ ಷರತ್ತುಗಳನ್ನು ಉಲ್ಲಂಘಿಸಿರುವುದಕ್ಕೆ ಸಾಕ್ಷ್ಯಾಧಾರಗಳಿಲ್ಲ ಎಂದು ಹೈಕೋರ್ಟ್ ಗಮನಿಸಿದೆ. ಜೊತೆಗೆ, ರಾಜ್ಯ ಸರ್ಕಾರವಾಗಲಿ ಅಥವಾ ಸಂತ್ರಸ್ತೆಯ ಪರವಾಗಿಯಾಗಲಿ ಜಾಮೀನು ರದ್ದುಗೊಳಿಸುವಂತೆ ಕೋರಿ ಯಾವುದೇ ಅರ್ಜಿಯನ್ನು ಸಲ್ಲಿಸಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ನಿರೀಕ್ಷಣಾ ಜಾಮೀನನ್ನು ರದ್ದುಪಡಿಸದೇ ಆರೋಪಿಯನ್ನು ವಶಕ್ಕೆ ಪಡೆದುಕೊಳ್ಳುವಂತೆ ನಿರ್ದೇಶನ ನೀಡಿರುವ ವಿಶೇಷ ನ್ಯಾಯಾಲಯದ ಕ್ರಮವು ಸಂಪೂರ್ಣವಾಗಿ ಕಾನೂನು ಬಾಹಿರವಾಗಿದೆ ಎಂದು ಪೀಠವು ಅಭಿಪ್ರಾಯಪಟ್ಟಿದೆ.
ತನ್ನ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ನ ಪ್ರಮುಖ ತೀರ್ಪುಗಳಾದ 'ಡಾ. ರಾಜೇಶ್ ಪ್ರತಾಪ್ ಗಿರಿ ವಿರುದ್ಧ ಉತ್ತರ ಪ್ರದೇಶ ಸರ್ಕಾರ' ಮತ್ತು 'ಸುಶೀಲಾ ಅಗರ್ವಾಲ್ ವಿರುದ್ಧ ದೆಹಲಿ ರಾಜ್ಯ ಸರ್ಕಾರ' ಪ್ರಕರಣಗಳನ್ನು ಹೈಕೋರ್ಟ್ ಉಲ್ಲೇಖಿಸಿದೆ. ಆರೋಪಿಯ ವಿರುದ್ಧ ಕೇವಲ ಆರೋಪ ಪಟ್ಟಿ ಸಲ್ಲಿಕೆಯಾಗಿದೆ ಎಂಬ ಕಾರಣಕ್ಕೆ ಆತ ನ್ಯಾಯಾಲಯಕ್ಕೆ ಶರಣಾಗಿ ನಿಯಮಿತ (ರೆಗ್ಯುಲರ್) ಜಾಮೀನು ಪಡೆಯಬೇಕಾದ ಅಗತ್ಯವಿಲ್ಲ. ಒಮ್ಮೆ ಮಂಜೂರಾದ ನಿರೀಕ್ಷಣಾ ಜಾಮೀನು ಇಡೀ ವಿಚಾರಣೆ ಪೂರ್ಣಗೊಳ್ಳುವವರೆಗೂ ಚಾಲ್ತಿಯಲ್ಲಿರುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ. ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಆರೋಪಿಯನ್ನು ತಕ್ಷಣವೇ ಬಿಡುಗಡೆ ಮಾಡಲು ಆದೇಶಿಸಿದೆ ಮತ್ತು ನಿಯಮಿತ ಜಾಮೀನು ಅರ್ಜಿಯನ್ನು ಕಾನೂನು ಪ್ರಕಾರ ಮರುಪರಿಶೀಲಿಸುವಂತೆ ಸೂಚಿಸಿದೆ.