image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹಿಸಿ ವಕೀಲರ ಸಂಘದಿಂದ ಬೃಹತ್ ಪ್ರತಿಭಟನಾ ಜಾಥಾ

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಆಗ್ರಹಿಸಿ ವಕೀಲರ ಸಂಘದಿಂದ ಬೃಹತ್ ಪ್ರತಿಭಟನಾ ಜಾಥಾ

ಶಿವಮೊಗ್ಗ : ಮಲೆನಾಡ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿಯೇ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನಾ ಜಾಥಾ ನಡೆಯಿತು. ಶಿವಮೊಗ್ಗ ಜಿಲ್ಲಾ ಕೋರ್ಟ್ ಆವರಣದಿಂದ ಪ್ರಾರಂಭವಾದ ಈ ಪ್ರತಿಭಟನಾ ಜಾಥಾವು ಬಾಲರಾಜ್ ಅರಸ್ ರಸ್ತೆ, ಮಹಾವೀರ ವೃತ್ತ, ಕುವೆಂಪು ರಂಗ ಮಂದಿರ ರಸ್ತೆ, ಬಸವೇಶ್ವರ ವೃತ್ತ, ಬಿ.ಹೆಚ್. ರಸ್ತೆಯ ಮೂಲಕ ಶಿವಪ್ಪ ನಾಯಕ ವೃತ್ತ, ನೆಹರು ರಸ್ತೆ ಹಾಗೂ ಟಿ. ಶೀನಪ್ಪ ಶೆಟ್ಟಿ ವೃತ್ತದ ಮಾರ್ಗವಾಗಿ ಸಾಗಿತು. ಬಳಿಕ ಸರ್‌. ಎಂ. ವಿಶ್ವೇಶ್ವರಯ್ಯ ರಸ್ತೆಯ ತೆರೆದ ವೇದಿಕೆಯಲ್ಲಿ ಬಹಿರಂಗ ಸಭೆಯನ್ನು ನಡೆಸಲಾಯಿತು. ಈ ಬೃಹತ್ ಹೋರಾಟಕ್ಕೆ ಜಿಲ್ಲೆಯ ಎಲ್ಲಾ ತಾಲೂಕುಗಳ ವಕೀಲರ ಸಂಘಗಳು, ವರ್ತಕರ ಸಂಘ, ನಾಗರಿಕ ಹಿತರಕ್ಷಣ ವೇದಿಕೆ, ರಾಷ್ಟ್ರ ಭಕ್ತರ ಬಳಗ, ವಿವಿಧ ದಲಿತ ಸಂಘಟನೆಗಳು ಹಾಗೂ ಜೆಸಿಐ ಸಂಸ್ಥೆಗಳು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದವು. ಇದರೊಂದಿಗೆ ಜೆಡಿಎಸ್, ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಪಕ್ಷಾತೀತವಾಗಿ ಜಾಥಾದಲ್ಲಿ ಪಾಲ್ಗೊಂಡು ಧ್ವನಿಗೂಡಿಸಿದರು.

ಮಂಗಳೂರಿನಲ್ಲಿಯೂ ಸಹ ಹೈಕೋರ್ಟ್ ಪೀಠಕ್ಕಾಗಿ ಹೋರಾಟ ನಡೆಯುತ್ತಿದ್ದು, ಅಲ್ಲಿನ ವಕೀಲರು ಸಲ್ಲಿಸಿದ್ದ ಮನವಿಯಲ್ಲಿ ಮಂಗಳೂರು, ಉಡುಪಿ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳನ್ನು ಸೇರ್ಪಡೆ ಮಾಡಿಕೊಳ್ಳಲಾಗಿತ್ತು. ಆದರೆ, ಇದಕ್ಕೆ ಶಿವಮೊಗ್ಗ ಜಿಲ್ಲಾ ವಕೀಲರ ಸಂಘವು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಪ್ರಸ್ತುತ ಮಂಗಳೂರಿನ ಪ್ರಸ್ತಾವನೆಯಿಂದ ಶಿವಮೊಗ್ಗ ಜಿಲ್ಲೆಯನ್ನು ಕೈಬಿಡಲಾಗಿದೆ. ಶಿವಮೊಗ್ಗ ಜಿಲ್ಲೆಗೆ ಚಿಕ್ಕಮಗಳೂರು, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳು ಕೇವಲ 100 ಕಿಲೋಮೀಟರ್ ವ್ಯಾಪ್ತಿಯಲ್ಲಿ ಬರುವುದರಿಂದ, ಭೌಗೋಳಿಕವಾಗಿ ಮಂಗಳೂರಿಗಿಂತ ಶಿವಮೊಗ್ಗವೇ ಮಧ್ಯ ಕರ್ನಾಟಕದ ಜನರಿಗೆ ಹೆಚ್ಚು ಅನುಕೂಲಕರವಾಗಿದೆ ಎಂದು ಪ್ರತಿಭಟನಾಕಾರರು ಪ್ರತಿಪಾದಿಸಿದರು.

ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಶಿವಮೊಗ್ಗ ಬಸವಕೇಂದ್ರದ ಶ್ರೀ ಮರುಳ ಬಸವಸಿದ್ದ ಸ್ವಾಮೀಜಿಯವರು, ನಮಗೆ ಸಾರ್ವಜನಿಕರ ಹಿತದೃಷ್ಟಿ ಮುಖ್ಯವಾಗಿದೆ. ಶಿವಮೊಗ್ಗ ಜಿಲ್ಲೆಯು ಉತ್ತಮ ವಿಮಾನ ನಿಲ್ದಾಣ, ರೈಲ್ವೆ ಸಂಪರ್ಕ ಹಾಗೂ ಸುತ್ತಮುತ್ತಲಿನ ಎಲ್ಲಾ ಜಿಲ್ಲೆಗಳಿಂದ ಅತ್ಯುತ್ತಮ ರಸ್ತೆ ಸಂಪರ್ಕ ವ್ಯವಸ್ಥೆಯನ್ನು ಹೊಂದಿದೆ. ಸಾರ್ವಜನಿಕರಿಗೆ ಮಂಗಳೂರಿಗಿಂತ ಶಿವಮೊಗ್ಗದಲ್ಲಿ ಸಂಚಾರಿ ಪೀಠ ಸ್ಥಾಪನೆಯಾದರೆ ಹೆಚ್ಚಿನ ಅನುಕೂಲವಾಗಲಿದ್ದು, ಇಲ್ಲಿ ಪೀಠ ಸ್ಥಾಪನೆಗೆ ಅಗತ್ಯವಿರುವಷ್ಟು ಪ್ರಕರಣಗಳ ಸಂಖ್ಯೆಯೂ ಲಭ್ಯವಿದೆ. ಹೀಗಾಗಿ ಈ ನ್ಯಾಯಸಮ್ಮತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಬೇಕಾಗಿದ್ದು, ಸಾರ್ವಜನಿಕರು ಕೈಜೋಡಿಸಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಮಧ್ಯ ಕರ್ನಾಟಕಕ್ಕೆ ಹೈಕೋರ್ಟ್ ಸಂಚಾರಿ ಪೀಠದ ಅಗತ್ಯತೆಯ ಕುರಿತು ಮಾತನಾಡಿದ ಜಿಲ್ಲಾ ವಕೀಲರ ಸಂಘದ ಗೌರವಾಧ್ಯಕ್ಷ ಬಸಪ್ಪ ಗೌಡ ಅವರು, ಮಧ್ಯ ಕರ್ನಾಟಕ ಭಾಗದಲ್ಲಿ ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಿದ್ದು, ಈ ಎಲ್ಲಾ ಪ್ರದೇಶಗಳಿಂದ ಶಿವಮೊಗ್ಗ ನಗರವು ಕೇವಲ 100 ರಿಂದ 120 ಕಿಲೋಮೀಟರ್ ದೂರದಲ್ಲಿದೆ. ಇಲ್ಲಿ ಸಂಚಾರಿ ಪೀಠ ಸ್ಥಾಪನೆಯಾದರೆ ಜನಸಾಮಾನ್ಯರಿಗೆ ತ್ವರಿತವಾಗಿ ನ್ಯಾಯ ಸಿಗಲು ಸಹಕಾರಿಯಾಗುತ್ತದೆ ಎಂದರು. ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕದ ಮಾದರಿಯಲ್ಲಿ ಈಗ ಮಧ್ಯ ಕರ್ನಾಟಕದ ಹೋರಾಟ ಆರಂಭವಾಗಿದೆ. ಕೇವಲ ಕರಾವಳಿ ಭಾಗದ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳನ್ನು ಮಾತ್ರ ಗಮನದಲ್ಲಿಟ್ಟುಕೊಂಡು ಸಂಚಾರಿ ಪೀಠದ ಪ್ರಸ್ತಾವನೆ ಮಾಡಿರುವುದು ಸರಿಯಲ್ಲ. ಆದ್ದರಿಂದ ಸರ್ಕಾರವು ಮಂಗಳೂರಿನ ಪ್ರಸ್ತುತ ಪ್ರಸ್ತಾವನೆಯನ್ನು ರದ್ದುಪಡಿಸಿ, ಹೊಸ ಪ್ರಸ್ತಾವನೆಯನ್ನು ಪರಿಗಣಿಸುವ ಮೂಲಕ ಮಧ್ಯ ಕರ್ನಾಟಕದ ಶಿವಮೊಗ್ಗಕ್ಕೆ ಹೈಕೋರ್ಟ್ ಸಂಚಾರಿ ಪೀಠವನ್ನು ಮಂಜೂರು ಮಾಡಬೇಕು ಎಂದು ವಕೀಲರ ಸಂಘದ ಮುಖಂಡರು ಒಕ್ಕೊರಲಿನಿಂದ ಒತ್ತಾಯಿಸಿದರು.

Category
ಕರಾವಳಿ ತರಂಗಿಣಿ