image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರೀ ಮಳೆ, ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಭಾರೀ ಮಳೆ, ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ

ಬೆಂಗಳೂರು : ನೈಋತ್ಯ ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ, ಚಂಡಮಾರುತದ ಸುಳಿ ಹಾಗೂ ಟ್ರಫ್ ಪ್ರಭಾವದಿಂದಾಗಿ ಕರ್ನಾಟಕ ರಾಜ್ಯಾದ್ಯಂತ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವಿಜ್ಞಾನಿ ಡಾ. ಎನ್. ಪುವಿಯರಸನ್ ತಿಳಿಸಿದ್ದಾರೆ. ಜೂನ್ ತಿಂಗಳ ಆರಂಭದ ಬೆನ್ನಲ್ಲೇ ವರುಣನ ಅಬ್ಬರ ಜೋರಾಗಲಿದ್ದು, ಹವಾಮಾನ ಇಲಾಖೆಯು ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ. ಪ್ರಸ್ತುತ ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯ ಕೆಲವು ಭಾಗಗಳಲ್ಲಿ ಸಕ್ರಿಯವಾಗಿರುವ ಮುಂಗಾರು ಮಳೆಯು ವೇಗವಾಗಿ ಭಾರತದತ್ತ ಮುನ್ನುಗ್ಗುತ್ತಿದ್ದು, ಜೂನ್ 4ರ ಸುಮಾರಿಗೆ ಅರಬ್ಬಿ ಸಮುದ್ರದ ಉಳಿದ ಭಾಗಗಳು, ಲಕ್ಷದ್ವೀಪ, ಕೇರಳ ಮತ್ತು ತಮಿಳುನಾಡಿನ ಕೆಲವು ಭಾಗಗಳಿಗೆ ಪ್ರವೇಶಿಸಲು ಪೂರಕ ವಾತಾವರಣ ನಿರ್ಮಾಣವಾಗಿದೆ. ಇದರ ನೇರ ಪರಿಣಾಮವಾಗಿ ಕರ್ನಾಟಕದಲ್ಲೂ ಮಳೆಯ ಪ್ರಮಾಣ ಗಣನೀಯವಾಗಿ ಏರಿಕೆಯಾಗಲಿದೆ. ದಕ್ಷಿಣ ಕೇರಳ ಕರಾವಳಿಯ ಅರಬ್ಬಿ ಸಮುದ್ರದಲ್ಲಿ ಸಮುದ್ರ ಮಟ್ಟದಿಂದ ಸುಮಾರು 5.8 ಕಿಮೀ ಎತ್ತರದಲ್ಲಿ ಸುಳಿಗಾಳಿ ಉಂಟಾಗಿದ್ದು, ಇದರೊಂದಿಗೆ ಮಧ್ಯಪ್ರದೇಶದಿಂದ ತಮಿಳುನಾಡಿನವರೆಗೆ ಹರಡಿರುವ ಕಡಿಮೆ ಒತ್ತಡದ ಪಟ್ಟಿ (ಟ್ರಫ್) ಕಾರಣದಿಂದಾಗಿ ರಾಜ್ಯದ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ಹವಾಮಾನ ಇಲಾಖೆಯ ವರದಿಯ ಪ್ರಕಾರ, ಜೂನ್ 6 ರವರೆಗೆ ರಾಜ್ಯದ ಹಲವೆಡೆ ಹಳದಿ ಅಲರ್ಟ್ (Yellow Alert) ಜಾರಿಯಲ್ಲಿರಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 2 ರಿಂದ ಜೂನ್ 6 ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಜೂನ್ 7 ಮತ್ತು 8 ರಂದು ಕರಾವಳಿಯ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಇನ್ನು ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಜೂನ್ 2 ರಿಂದ ಜೂನ್ 5 ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿರುವುದರಿಂದ ಜನ ಜಾಗರೂಕರಾಗಿರಲು ಸೂಚಿಸಲಾಗಿದೆ. ಇದೇ ವೇಳೆ ಬೀದರ್, ಕಲಬುರಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಇತ್ತ ದಕ್ಷಿಣ ಒಳನಾಡಿನ ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದ್ದು, ಇಲ್ಲಿ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಲ್ಲಿ ಜೂನ್ 3 ರಿಂದ ಮಳೆಯ ಅಬ್ಬರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ಸಮಯದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ. ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನವು ವಾಡಿಕೆಗಿಂತ 3 ರಿಂದ 5 ಡಿಗ್ರಿ ಸೆಲ್ಸಿಯಸ್ ಅಧಿಕವಾಗಿ ದಾಖಲಾಗಿದ್ದರೂ, ಮುಂದಿನ ಐದು ದಿನಗಳಲ್ಲಿ ಮಳೆ ಆರಂಭವಾಗುವುದರಿಂದ ತಾಪಮಾನದಲ್ಲಿ ಯಾವುದೇ ದೊಡ್ಡ ಮಟ್ಟದ ಏರಿಕೆ ಕಂಡುಬರುವುದಿಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ, ಸಾರ್ವಜನಿಕರು ಗುಡುಗು ಮತ್ತು ಮಿಂಚಿನ ಸಂದರ್ಭದಲ್ಲಿ ಮರದ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯಬಾರದು ಹಾಗೂ ಗಾಳಿ ಜೋರಾಗಿ ಬೀಸುವುದರಿಂದ ಹಳೆಯ ಕಟ್ಟಡಗಳು ಮತ್ತು ತಗಡಿನ ಶೆಡ್‌ಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

Category
ಕರಾವಳಿ ತರಂಗಿಣಿ