image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಆರ್‌ಟಿಐ ಅಡಿ ಸರ್ಕಾರಿ ನೌಕರರ ವೈಯಕ್ತಿಕ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಆರ್‌ಟಿಐ ಅಡಿ ಸರ್ಕಾರಿ ನೌಕರರ ವೈಯಕ್ತಿಕ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು : ಮಾಹಿತಿ ಹಕ್ಕು ಕಾಯ್ದೆ (RTI) ಅಡಿ ಸರ್ಕಾರಿ ನೌಕರರ ಎಲ್ಲ ವೈಯಕ್ತಿಕ ಮಾಹಿತಿಯನ್ನು ಕಡ್ಡಾಯವಾಗಿ ನೀಡಬೇಕೆಂಬ ನಿಯಮವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಸರ್ಕಾರಿ ಸೇವೆಯಲ್ಲಿ ಇದ್ದಾರೆ ಎಂಬ ಕಾರಣಕ್ಕೆ ಅವರ ಖಾಸಗಿ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಖಾಸಗಿ ವ್ಯಕ್ತಿಗಳ ನಡುವಿನ ಸಿವಿಲ್ ಪ್ರಕರಣಗಳಲ್ಲಿ ಸಾಕ್ಷ್ಯ ಸಂಗ್ರಹಿಸಲು ಆರ್‌ಟಿಐ ಕಾಯ್ದೆಯನ್ನು ಸಾಧನವಾಗಿ ಬಳಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸದ ಮಾಹಿತಿಯನ್ನು ಈ ಕಾಯ್ದೆಯಡಿ ಪಡೆಯಲು ಸಾಧ್ಯವಿಲ್ಲ ಎಂಬುದನ್ನು ಒತ್ತಿ ಹೇಳಿದೆ.

ಬನಶಂಕರಿಯ ನಿವಾಸಿ ಸವಿತಮ್ಮ ಅವರು, ಕೆಎಸ್‌ಆರ್‌ಟಿಸಿಯ ನಿವೃತ್ತ ಅಧಿಕಾರಿಯಾಗಿದ್ದ ಎಸ್.ಪಿ. ಜಯಪಾಲ್ ಅವರ ಆಸ್ತಿ ವಿವರಗಳನ್ನು ಪಡೆಯಲು ಆರ್‌ಟಿಐ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. 1997ರಿಂದ 2005ರವರೆಗೆ ಅವರು ಸರ್ಕಾರಕ್ಕೆ ಸಲ್ಲಿಸಿದ್ದ ಆಸ್ತಿ ಘೋಷಣೆಯ ದಾಖಲೆಗಳನ್ನು ನೀಡುವಂತೆ ಮನವಿ ಮಾಡಲಾಗಿತ್ತು. ಸವಿತಮ್ಮ ಅವರ ಪ್ರಕಾರ, ಜಯಪಾಲ್ ಅವರೊಂದಿಗೆ ಆಸ್ತಿ ಖರೀದಿ ಸಂಬಂಧಿತ ವಿವಾದ ಉಂಟಾಗಿದ್ದು, ಈ ಬಗ್ಗೆ ಈಗಾಗಲೇ ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣಗಳು ನಡೆಯುತ್ತಿವೆ. ಇದೇ ಹಿನ್ನೆಲೆಯಲ್ಲಿ ಆಸ್ತಿ ವಿವರಗಳನ್ನು ಆರ್‌ಟಿಐ ಮೂಲಕ ಪಡೆಯಲು ಅವರು ಮುಂದಾಗಿದ್ದರು. ಆದರೆ ಈ ಮಾಹಿತಿಯು ವೈಯಕ್ತಿಕ ಸ್ವರೂಪದ್ದಾಗಿದ್ದು, ಆರ್‌ಟಿಐ ಕಾಯ್ದೆಯ ವಿನಾಯಿತಿಗಳ ವ್ಯಾಪ್ತಿಗೆ ಬರುತ್ತದೆ ಎಂದು ಕೆಎಸ್‌ಆರ್‌ಟಿಸಿ ಹಾಗೂ ರಾಜ್ಯ ಮಾಹಿತಿ ಆಯೋಗ ಮಾಹಿತಿ ನೀಡಲು ನಿರಾಕರಿಸಿತ್ತು.

ಬಳಿಕ ಸವಿತಮ್ಮ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ, ರಾಜ್ಯ ಮಾಹಿತಿ ಆಯೋಗ ಮತ್ತು ಕೆಎಸ್‌ಆರ್‌ಟಿಸಿ ನೀಡಿದ್ದ ಆದೇಶಗಳನ್ನು ಎತ್ತಿ ಹಿಡಿದು ಅರ್ಜಿಯನ್ನು ವಜಾಗೊಳಿಸಿದೆ. ಅಧಿಕಾರಿಗಳ ವೈಯಕ್ತಿಕ ಮಾಹಿತಿಯನ್ನು ಆರ್‌ಟಿಐ ಅಡಿಯಲ್ಲಿ ಬಹಿರಂಗಪಡಿಸಬೇಕಾದರೆ, ಅದರಲ್ಲಿ ವ್ಯಕ್ತಿಗತ ಹಿತಾಸಕ್ತಿಗಿಂತ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿರಬೇಕು ಎಂದು ನ್ಯಾಯಾಲಯ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.

Category
ಕರಾವಳಿ ತರಂಗಿಣಿ