ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ಹದಗೆಟ್ಟಿರುವ ವಾರ್ಡ್ ರಸ್ತೆಗಳನ್ನು ಸುಧಾರಿಸಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದಿಂದ 2000 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡಲಾಗಿದ್ದು, ನಗರದ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಜಿಬಿಎ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತು ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ ಅವರು, ನಗರದಲ್ಲಿ ಹಾಳಾಗಿರುವ ವಾರ್ಡ್ ರಸ್ತೆಗಳನ್ನು ಗುರುತಿಸಿ ಅಲ್ಪಾವಧಿಯ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಹೊಸ ಸರ್ಕಾರ ಅಧಿಕಾರ ಸ್ವೀಕರಿಸಿದ ನಂತರ ಜನರ ನಿರೀಕ್ಷೆಗಳು ಸಾಕಷ್ಟಿದ್ದು, ಅದಕ್ಕೆ ತಕ್ಕಂತೆ ಕೆಲಸ ಮಾಡಲು ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿಕೊಂಡಿದೆ. ಅದರಂತೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಪ್ರಮುಖ ತೀರ್ಮಾನವನ್ನು ಕೈಗೊಳ್ಳಲಾಗಿದ್ದು, ಎಲ್ಲವನ್ನೂ ತ್ವರಿತವಾಗಿ ಹಾಗೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ನಿರ್ದೇಶನ ನೀಡಲಾಗಿದೆ. ಬೆಂಗಳೂರಿನಲ್ಲಿ ರಸ್ತೆಗಳ ಪರಿಸ್ಥಿತಿಯನ್ನು ಸುಧಾರಿಸಬೇಕೆಂಬುದು ಜನರ ಪ್ರಮುಖ ಬೇಡಿಕೆಯಾಗಿದ್ದು, ಈ ನಿಟ್ಟಿನಲ್ಲಿ ಪ್ರಮುಖ ರಸ್ತೆಗಳಾದ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳನ್ನು ಹೊರತುಪಡಿಸಿ, ಹದಗೆಟ್ಟಿರುವ ವಾರ್ಡ್ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಈ 2000 ಕೋಟಿ ರೂ. ವಿಶೇಷ ಅನುದಾನವನ್ನು ಬಳಸಿಕೊಳ್ಳಲಾಗುತ್ತದೆ.
ಐದು ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಹಾಳಾಗಿರುವ ವಾರ್ಡ್ ರಸ್ತೆಗಳನ್ನು ಗುರುತಿಸಿ, ಹೊಸದಾಗಿ ಡಾಂಬರೀಕರಣ ಮಾಡಲು ಅಂದಾಜು ಪಟ್ಟಿ ತಯಾರಿಸಿ, ಅಲ್ಪಾವಧಿಯ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಆದಷ್ಟು ಶೀಘ್ರವೇ ರಸ್ತೆ ಕಾಮಗಾರಿಯನ್ನು ಆರಂಭಿಸುವಂತೆ ಸರ್ಕಾರದಿಂದ ಈಗಾಗಲೇ ಆದೇಶ ಹೊರಡಿಸಲಾಗಿದೆ. ಜಿಬಿಎ ಮುಖ್ಯ ಆಯುಕ್ತರು ಹಾಗೂ 5 ನಗರ ಪಾಲಿಕೆಗಳ ಆಯುಕ್ತರು ತಮ್ಮ ವ್ಯಾಪ್ತಿಯ ಹದಗೆಟ್ಟಿರುವ ರಸ್ತೆಗಳನ್ನು ಪಟ್ಟಿ ಮಾಡಿ, ಅಗತ್ಯವಿರುವ ಎಲ್ಲಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಆದಷ್ಟು ಶೀಘ್ರದಲ್ಲಿ ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಅಧಿಕಾರಿಗಳಿಗೆ ಆದ್ಯತೆ ಮೇರೆಗೆ ಕೆಲಸ ಮಾಡಲು ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಈ ಕಾಮಗಾರಿಗಳಿಗೆ ಕಟ್ಟುನಿಟ್ಟಿನ ಡೆಡ್‌ಲೈನ್ ವಿಧಿಸಲಾಗಿದ್ದು, ವಾರ್ಡ್ ರಸ್ತೆಗಳ ಅಂದಾಜು ಹಾಗೂ ಟೆಂಡರ್ ಪ್ರಕ್ರಿಯೆಯನ್ನು ಮುಂದಿನ ಎರಡು ತಿಂಗಳೊಳಗೆ ಪೂರ್ಣಗೊಳಿಸಿ, ನಾಲ್ಕರಿಂದ ಆರು ತಿಂಗಳ ಅವಧಿಯಲ್ಲಿ ಕಾಮಗಾರಿಗಳನ್ನು ಮುಗಿಸುವ ಗುರಿ ಹೊಂದಲಾಗಿದೆ. ಮುಂಬರುವ ಮಳೆಗಾಲವನ್ನು ಗಮನದಲ್ಲಿಟ್ಟುಕೊಂಡು, ಗುಣಮಟ್ಟಕ್ಕೆ ಯಾವುದೇ ಧಕ್ಕೆಯಾಗದಂತೆ ಮಳೆ ಇಲ್ಲದ ಅವಧಿಯಲ್ಲಿ ಅಗತ್ಯ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು.
ಇನ್ನು ಮುಂದೆ ಪ್ರಮಾಣಿತ ಕಾರ್ಯವಿಧಾನ (SOP) ಅನುಸಾರ ಸಂಬಂಧಿತ ಎಲ್ಲಾ ಅಂಗಸಂಸ್ಥೆಗಳೊಂದಿಗೆ ಸಮನ್ವಯ ಸಾಧಿಸಿ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗುವುದು ಹಾಗೂ ಪೂರ್ವಾನುಮತಿ ಇಲ್ಲದೆ ರಸ್ತೆಗಳನ್ನು ಅಗೆಯದಂತೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುತ್ತದೆ. ಡಾಂಬರೀಕರಣ ಕಾಮಗಾರಿ ವೇಳೆ ಸಚಿವರಾದ ಕೃಷ್ಣ ಭೈರೇಗೌಡ ಅವರು ಸ್ವತಃ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದು, ಅಧಿಕಾರಿಗಳಿಗೂ ನಿರಂತರ ಪರಿಶೀಲನೆಗೆ ಸೂಚಿಸಿದ್ದಾರೆ. ರಸ್ತೆ ಗುಣಮಟ್ಟವನ್ನು ಹೆಚ್ಚಿಸುವುದು ಸರ್ಕಾರದ ಮೊದಲ ಆದ್ಯತೆಯಾಗಿದ್ದು, ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಸಚಿವರು ಭರವಸೆ ನೀಡಿದ್ದಾರೆ.