image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿದ ಸಂಸದ ಯದುವೀರ್

ಹಿಂದೂ ಸಂಘಟನೆ ಕಾರ್ಯಕರ್ತರನ್ನು ಬಿಡುಗಡೆಗೊಳಿಸಿದ ಸಂಸದ ಯದುವೀರ್

ಮೈಸೂರು : ಮೈಸೂರಿನ ಕರ್ನಾಟಕ ಸರ್ಕಾರಿ ರಿಸರ್ವ್ ಪೊಲೀಸ್ ಠಾಣೆಗೆ ಭೇಟಿ ನೀಡಿದ ಮೈಸೂರು - ಕೊಡಗು ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಬಂಧನಕ್ಕೊಳಗಾಗಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತರನ್ನು ಬಿಡುಗಡೆ ಮಾಡಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ವಲಸಿಗರು ರೈಲಿನ ಮೂಲಕ ಮೈಸೂರಿಗೆ ಬಂದಿದ್ದಾರೆ ಎಂಬ ಮಾಹಿತಿ ತಿಳಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ಸ್ಥಳಕ್ಕೆ ತೆರಳಿ ಪೊಲೀಸರಿಗೆ ಮಾಹಿತಿ ನೀಡಿ, ಅಗತ್ಯ ಪರಿಶೀಲನೆ ನಡೆಸುವಂತೆ ಮನವಿ ಮಾಡಿದ್ದರು. ನಂತರ ಕಾರ್ಯಕರ್ತರು ವಲಸಿಗರೊಂದಿಗೆ ಪೊಲೀಸ್ ಠಾಣೆಗೆ ತೆರಳಿದಾಗ ವಲಸಿಗರು, ಪೊಲೀಸರು ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಆರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಈ ವಿಷಯ ತಿಳಿಯುತ್ತಿದ್ದಂತೆ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಂಸದ ಯದುವೀರ್ ಅವರು ಪರಿಸ್ಥಿತಿಯ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ವಿವರವಾದ ಚರ್ಚೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ತನಿಖೆಗೆ ನಮ್ಮ ಯಾವುದೇ ವಿರೋಧವಿಲ್ಲ. ಆದರೆ ತನಿಖೆ ನ್ಯಾಯಸಮ್ಮತವಾಗಿ ಮತ್ತು ಸರಿಯಾದ ರೀತಿಯಲ್ಲಿ ನಡೆಯಬೇಕು. ವಲಸಿಗರನ್ನು ಮುಕ್ತವಾಗಿ ಬಿಟ್ಟು, ನಮ್ಮ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಿಸಿರುವುದು ಸರಿಯಲ್ಲ. ಕಾನೂನು ಎಲ್ಲರಿಗೂ ಸಮಾನವಾಗಿರಬೇಕು ಎಂದು ಹೇಳಿದರು. ತನಿಖೆ ಪಕ್ಷಪಾತವಿಲ್ಲದೆ ನಡೆಯಬೇಕು ಹಾಗೂ ಎಲ್ಲರಿಗೂ ಸಮಾನ ನ್ಯಾಯ ದೊರಕಬೇಕು ಎಂದು ಅವರು ಒತ್ತಿಹೇಳಿದರು. ಕೊನೆಯಲ್ಲಿ ನಡೆದ ಸುದೀರ್ಘ ಚರ್ಚೆಯ ನಂತರ ಎಲ್ಲಾ ಕಾರ್ಯಕರ್ತರನ್ನು ಬಿಡುಗಡೆ ಮಾಡಲಾಯಿತು.

ಈ ಸಂದರ್ಭದಲ್ಲಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ, ಚಾಮರಾಜ ಮಂಡಲ ಅಧ್ಯಕ್ಷ ದಿನೇಶ್ ಗೌಡ, ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಮಂಡಲ ಅಧ್ಯಕ್ಷ ಪೈಲ್ವಾನ್ ರವಿ, ಬಿಜೆಪಿ ಮುಖಂಡ ಗಿರಿಧರ್ ಹಾಗೂ ಇತರ ಹಿಂದೂ ಸಂಘಟನೆಗಳ ಮತ್ತು ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

Category
ಕರಾವಳಿ ತರಂಗಿಣಿ