image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಆರೆಸ್ಸೆಸ್ ಮಾನಹಾನಿ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ

ಆರೆಸ್ಸೆಸ್ ಮಾನಹಾನಿ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೋರ್ಟ್ ಆದೇಶ

ಬೆಂಗಳೂರು : ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರೆಸ್ಸೆಸ್) ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಗೃಹಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಯುವ ಕಾಂಗ್ರೆಸ್ ಮುಖಂಡ ಮುಹಮ್ಮದ್ ನಲಪಾಡ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಆರೆಸ್ಸೆಸ್ ಕಾರ್ಯಕರ್ತ ಎ. ತೇಜಸ್ ಎಂಬುವರು ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿರುವ ಮ್ಯಾಜಿಸ್ಟ್ರೇಟ್ ಸಂದೀಪ್ ಪಾಟೀಲ್ ಅವರ ಪೀಠವು ಈ ಮಹತ್ವದ ಆದೇಶ ನೀಡಿದೆ. ಆದರೆ, ಇದೇ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ಮಾಜಿ ಸಚಿವ ದಿನೇಶ್ ಗುಂಡೂರಾವ್ ವಿರುದ್ಧದ ಕಾನೂನು ಪ್ರಕ್ರಿಯೆಯನ್ನು ನ್ಯಾಯಾಲಯವು ಕೈಬಿಟ್ಟಿದೆ.

ಪ್ರಿಯಾಂಕ್ ಖರ್ಗೆ ಮತ್ತು ಮೊಹಮ್ಮದ್ ನಲಪಾಡ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್) ಸೆಕ್ಷನ್ 356ರ ಅಡಿ ಕ್ರಿಮಿನಲ್ ಮಾನಹಾನಿ ಮೊಕದ್ದಮೆ ಹೂಡಲು ಕಾಗ್ನೈಜೆನ್ಸ್ (ವಿಚಾರಣೆಗೆ ಪರಿಗಣನೆ) ತೆಗೆದುಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ, ಸಮನ್ಸ್ ಜಾರಿಗೊಳಿಸುವಂತೆ ನ್ಯಾಯಾಲಯದ ಕಚೇರಿಗೆ ಸೂಚಿಸಲಾಗಿದ್ದು, ಮುಂದಿನ ವಿಚಾರಣೆಯನ್ನು ಜುಲೈ 21ಕ್ಕೆ ಮುಂದೂಡಲಾಗಿದೆ. ಈ ಕಾನೂನು ಹೋರಾಟಕ್ಕೆ ಕಾರಣವಾಗಿರುವ ಹಿನ್ನೆಲೆಯನ್ನು ನೋಡುವುದಾದರೆ, 2025ರ ಅಕ್ಟೋಬರ್ 4ರಂದು ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿಗೆ ಬರೆದಿದ್ದ ಪತ್ರವೊಂದನ್ನು ಎಕ್ಸ್ (ಟ್ವಿಟರ್) ಖಾತೆಯಲ್ಲಿ ಹಂಚಿಕೊಂಡಿದ್ದರು. ಅದರಲ್ಲಿ, ಆರೆಸ್ಸೆಸ್ ಸಂಘಟನೆಯು ಸರ್ಕಾರಿ ಜಾಗ ಹಾಗೂ ಶಾಲಾ ಆವರಣಗಳಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ನಿಷೇಧ ಹೇರಬೇಕು, ಅವರು ಜನರಿಗೆ ತಪ್ಪು ಸಂದೇಶ ನೀಡಿ ದೇಶಕ್ಕೆ ಮಾರಕವಾಗುತ್ತಿದ್ದಾರೆ ಮತ್ತು ಯುವಕರನ್ನು ತಪ್ಪುದಾರಿಗೆ ಎಳೆಯುತ್ತಿದ್ದಾರೆ ಎಂದು ಆರೋಪಿಸಿದ್ದರು. ಮತ್ತೊಂದೆಡೆ, ಯುವ ಕಾಂಗ್ರೆಸ್ ನಾಯಕ ಮುಹಮ್ಮದ್ ನಲಪಾಡ್ ಅವರು ಆರೆಸ್ಸೆಸ್ ಕಾರ್ಯಕರ್ತರ ಕುರಿತು ಆಕ್ಷೇಪಾರ್ಹವಾಗಿ ಮಾತನಾಡಿದ್ದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿತ್ತು.

ಇದೇ ಪ್ರಕರಣದಲ್ಲಿ ಮಾಜಿ ಸಚಿವ ದಿನೇಶ್ ಗುಂಡೂರಾವ್ ಅವರು ಕೂಡ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಗೌರಿ ಲಂಕೇಶ್, ಗೋವಿಂದ ಪನ್ಸಾರೆ ಹಾಗೂ ಎಂ.ಎಂ. ಕಲಬುರ್ಗಿ ಅವರ ಹತ್ಯೆಗೆ ಆರೆಸ್ಸೆಸ್ ನೇರ ಹೊಣೆ ಮತ್ತು ಅವರದ್ದು ತಾಲಿಬಾನ್ ಸಂಸ್ಕೃತಿ ಎಂದು ಬರೆದುಕೊಂಡಿದ್ದರು. ಈ ಎಲ್ಲಾ ನಾಯಕರ ಹೇಳಿಕೆಗಳು ಆರೆಸ್ಸೆಸ್ ಸಂಸ್ಥೆಯ ಗೌರವಕ್ಕೆ ಧಕ್ಕೆ ತಂದಿದ್ದು, ಲಕ್ಷಾಂತರ ಕಾರ್ಯಕರ್ತರ ಭಾವನೆಗಳಿಗೆ ಘಾಸಿ ಮಾಡಿದೆ ಎಂದು ತೇಜಸ್ ಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ನ್ಯಾಯಾಲಯವು ದಿನೇಶ್ ಗುಂಡೂರಾವ್ ಅವರನ್ನು ಪ್ರಕರಣದಿಂದ ಮುಕ್ತಗೊಳಿಸಿದ್ದು, ಪ್ರಿಯಾಂಕ್ ಖರ್ಗೆ ಹಾಗೂ ನಲಪಾಡ್ ಅವರಿಗೆ ಕಾನೂನು ಸಂಕಷ್ಟ ಎದುರಾಗುವಂತೆ ಮಾಡಿದೆ.

Category
ಕರಾವಳಿ ತರಂಗಿಣಿ