image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬಂಡಿಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಶಿವಕುಮಾರ್ ಸೂಚನೆ

ಬಂಡಿಪುರ-ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಸಿಎಂ ಶಿವಕುಮಾರ್ ಸೂಚನೆ

ಬೆಂಗಳೂರು : ಸೂಕ್ತ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮೂಲಕ ಬಂಡಿಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನಗಳಲ್ಲಿ ಸ್ಥಗಿತಗೊಂಡಿದ್ದ ಸಫಾರಿ ಮತ್ತು ಪರಿಸರ ಪ್ರವಾಸೋದ್ಯಮ ಚಟುವಟಿಕೆಗಳನ್ನು ತಕ್ಷಣವೇ ಪುನರಾರಂಭಿಸುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಂಡಿಪುರ ಮತ್ತು ನಾಗರಹೊಳೆ ಸಫಾರಿ ವಲಯಗಳಲ್ಲಿ ಹುಲಿ ಹಾಗೂ ಚಿರತೆಗಳ ಸಾಂದ್ರತೆ ಹೆಚ್ಚಾಗಿದೆ. ಇದು ಮಾನವ-ವನ್ಯಜೀವಿ ಸಂಘರ್ಷದ ಪ್ರದೇಶಗಳಿಗಿಂತಲೂ ಅಧಿಕವಾಗಿರುವುದರಿಂದ, ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ ಪ್ರವಾಸೋದ್ಯಮಕ್ಕೆ ಚಾಲನೆ ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದೇ ಸಭೆಯಲ್ಲಿ ಮೇಕೆದಾಟು ಯೋಜನೆ ಕುರಿತು ಚರ್ಚಿಸಿದ ಸಿಎಂ, ತಮಿಳುನಾಡು ಸರ್ಕಾರವು ಸಣ್ಣಪುಟ್ಟ ತಾಂತ್ರಿಕ ನೆಪಗಳನ್ನು ಒಡ್ಡಿ ಸುಪ್ರೀಂಕೋರ್ಟ್‌ನಲ್ಲಿ ತಕರಾರು ತೆಗೆಯಲು ಯತ್ನಿಸುತ್ತಿದೆ. ಆದ್ದರಿಂದ ನಮ್ಮ ಕಡೆಯಿರುವ ಸಣ್ಣಪುಟ್ಟ ತಾಂತ್ರಿಕ ಲೋಪದೋಷಗಳನ್ನು ಪರಿಶೀಲಿಸಿ, ಅವುಗಳನ್ನು ಪರಿಣಾಮಕಾರಿಯಾಗಿ ಬಗೆಹರಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇನ್ನು ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷದ ಬಗ್ಗೆ ಕಳವಳ ವ್ಯಕ್ತಪಡಿಸಿದ ಅಧಿಕಾರಿಗಳು, ಬಿಎಂಐಸಿ ಕಾರಿಡಾರ್‌ ನಿರ್ಮಾಣದಿಂದಾಗಿ ಆನೆ, ಹುಲಿ ಹಾಗೂ ಚಿರತೆಗಳ ಸಾಂಪ್ರದಾಯಿಕ ಸಂಚಾರ ಮಾರ್ಗಗಳಿಗೆ ಅಡ್ಡಿಯಾಗಿದೆ. ಇದರಿಂದಾಗಿ ವನ್ಯಜೀವಿಗಳು ಅರಣ್ಯ ಬಿಟ್ಟು ಚನ್ನಪಟ್ಟಣ ಹಾಗೂ ರಾಮನಗರ ಭಾಗಗಳತ್ತ ವಲಸೆ ಬರುತ್ತಿವೆ ಎಂದು ಸಭೆಯ ಗಮನಕ್ಕೆ ತಂದರು. ಜೊತೆಗೆ, ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣದ ಸಂದರ್ಭದಲ್ಲಿ ವನ್ಯಜೀವಿಗಳ ಸುರಕ್ಷಿತ ಸಂಚಾರಕ್ಕಾಗಿ ಅಂಡರ್‌ಪಾಸ್‌ ಹಾಗೂ ಓವರ್‌ಪಾಸ್‌ಗಳನ್ನು ನಿರ್ಮಿಸುವ ಷರತ್ತನ್ನು ವಿಧಿಸಲಾಗಿತ್ತು. ಆದರೆ, ರಸ್ತೆ ನಿರ್ಮಾಣದ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ಷರತ್ತುಗಳನ್ನು ಸಮರ್ಪಕವಾಗಿ ಪಾಲಿಸಿಲ್ಲ ಎಂಬ ಗಂಭೀರ ವಿಚಾರವನ್ನು ಅಧಿಕಾರಿಗಳು ಮುಖ್ಯಮಂತ್ರಿಗಳ ಮುಂದೆ ಮಂಡಿಸಿದರು.

Category
ಕರಾವಳಿ ತರಂಗಿಣಿ