image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ಚುರುಕು: ಜು. 5 ರಂದು ದೆಹಲಿಗೆ ಸಿಎಂ ಡಿ.ಕೆ.ಶಿವಕುಮಾರ್ ಪ್ರಯಾಣ

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಕಸರತ್ತು ಚುರುಕು: ಜು. 5 ರಂದು ದೆಹಲಿಗೆ ಸಿಎಂ ಡಿ.ಕೆ.ಶಿವಕುಮಾರ್ ಪ್ರಯಾಣ

ಬೆಂಗಳೂರು : ಕರ್ನಾಟಕ ಕಾಂಗ್ರೆಸ್‌ ಸರ್ಕಾರದಲ್ಲಿ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಸರತ್ತು ತೀವ್ರಗೊಂಡಿದೆ. ಹೈಕಮಾಂಡ್ ನಾಯಕರೊಂದಿಗೆ ಅಂತಿಮ ಸುತ್ತಿನ ಮಾತುಕತೆ ನಡೆಸಿ, ಸಚಿವ ಸ್ಥಾನ ವಂಚಿತರಾಗಿರುವ ಶಾಸಕರನ್ನು ಸಮಾಧಾನಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ. ಹೈಕಮಾಂಡ್‌ ನಾಯಕರಾದ ರಾಹುಲ್ ಗಾಂಧಿ ಅವರು ತಮ್ಮ ವಿದೇಶಿ ಪ್ರವಾಸ ಮುಗಿಸಿ ರಾಜಧಾನಿಗೆ ಮರಳುತ್ತಿರುವ ಬೆನ್ನಲ್ಲೇ, ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ರಚನೆಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ನೂತನ ಸಚಿವರ ಸಂಭಾವ್ಯ ಪಟ್ಟಿಯೊಂದಿಗೆ ಜುಲೈ 5ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮತ್ತೊಂದೆಡೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ದೆಹಲಿ ತಲುಪಲಿದ್ದು, ಜುಲೈ 6 ಮತ್ತು 7ರಂದು ಎಐಸಿಸಿ ವರಿಷ್ಠರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಹೈಕಮಾಂಡ್ ಮಟ್ಟದಲ್ಲಿ ಎಲ್ಲವೂ ಅಂದುಕೊಂಡಂತೆ ನಡೆದಲ್ಲಿ ಜುಲೈ 10ರಿಂದ 12ರ ಒಳಗಾಗಿ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಸದ್ಯ ಸಂಪುಟದಲ್ಲಿ ಸ್ಥಾನ ಪಡೆಯಲು ಹಲವು ಹಿರಿಯ ಹಾಗೂ ಪ್ರಭಾವಿ ಶಾಸಕರು ತೀವ್ರ ಪೈಪೋಟಿ ನಡೆಸುತ್ತಿದ್ದು, ಮುಂಚೂಣಿಯಲ್ಲಿ ಕೇಳಿಬರುತ್ತಿರುವ ಸಂಭಾವ್ಯರ ವಿವರ ಹೀಗಿದೆ.

ಉತ್ತರ ಮತ್ತು ಕಲ್ಯಾಣ ಕರ್ನಾಟಕ ಭಾಗಕ್ಕೆ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ಸಿಗುವ ನಿರೀಕ್ಷೆಯಿದೆ. ಬೆಳಗಾವಿ ಜಿಲ್ಲೆಯಿಂದ ಲಕ್ಷ್ಮಣ ಸವದಿ ಅವರ ಹೆಸರು ಪ್ರಬಲವಾಗಿ ಕೇಳಿಬರುತ್ತಿದ್ದರೆ, ಹುಬ್ಬಳ್ಳಿ-ಧಾರವಾಡ ಭಾಗದಲ್ಲಿ ಪ್ರಸಾದ್ ಅಬ್ಬಯ್ಯ ಅವರು ಮುಂಚೂಣಿಯಲ್ಲಿದ್ದಾರೆ. ವಿಜಯಪುರ ಜಿಲ್ಲೆಯ ಜವಾಬ್ದಾರಿಗಾಗಿ ಯಶವಂತರಾಯ ಪಾಟೀಲ ಅಥವಾ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ತೀವ್ರ ಪರಿಶೀಲನೆಯಲ್ಲಿವೆ. ಇನ್ನು ಕಲ್ಯಾಣ ಕರ್ನಾಟಕ ಭಾಗದ ಮುಸ್ಲಿಂ ಪ್ರಾತಿನಿಧ್ಯವನ್ನು ಸಮತೋಲನಗೊಳಿಸಲು ಸಲೀಂ ಅಹ್ಮದ್ ಅವರ ಹೆಸರನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ತಿಳಿದುಬಂದಿದೆ. ಈ ದೆಹಲಿ ಪ್ರವಾಸದ ಬಳಿಕ ನೂತನ ಸಚಿವರ ಅಧಿಕೃತ ಪಟ್ಟಿ ಅಂತಿಮಗೊಳ್ಳುವ ಸಾಧ್ಯತೆಯಿದೆ.

Category
ಕರಾವಳಿ ತರಂಗಿಣಿ