ಬೆಂಗಳೂರು : ರಾಜ್ಯದಲ್ಲಿ ನೈಋತ್ಯ ಮುಂಗಾರು ಮಾರುತಗಳು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣನ ಅಬ್ಬರ ಜೋರಾಗಿದೆ. ಇದರಿಂದಾಗಿ ಒಣಗುತ್ತಿದ್ದ ಜಲಾಶಯಗಳಿಗೆ ಬಂಪರ್ ಒಳಹರಿವು ಹರಿದುಬರುತ್ತಿದ್ದು, ನದಿ-ನಾಡುಗಳಿಗೆ ಹೊಸ ಜೀವಕಳೆ ಬಂದಂತಾಗಿದೆ. ಕೊಡಗು ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ತೀವ್ರ ಚಳಿ ಆವರಿಸಿದೆ. ಮಡಿಕೇರಿ, ಸೋಮವಾರಪೇಟೆ, ವಿರಾಜಪೇಟೆ ಹಾಗೂ ಮೂರ್ನಾಡು ಭಾಗಗಳಲ್ಲಿ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ರಸ್ತೆಗಳು ಜಲಾವೃತಗೊಂಡು ವಾಹನ ಸವಾರರು ಹಾಗೂ ಸಾರ್ವಜನಿಕರ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟ ನಿಧಾನವಾಗಿ ಏರಿಕೆಯಾಗುತ್ತಿದೆ. ಇತ್ತ ಹಾರಂಗಿ ಜಲಾಶಯಕ್ಕೆ ಸದ್ಯ 1,470 ಕ್ಯೂಸೆಕ್ ಒಳಹರಿವು ಬರುತ್ತಿದ್ದು, 8.5 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯ 2.7 ಟಿಎಂಸಿ ನೀರು ಸಂಗ್ರಹವಾಗಿದೆ. ಇದು ಕಾವೇರಿ ಕೊಳ್ಳದ ರೈತರಲ್ಲಿ ಹೊಸ ಭರವಸೆ ಮೂಡಿಸಿದೆ.
ಮತ್ತೊಂದೆಡೆ ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ರಾಜಾಪುರ ಬ್ಯಾರೇಜ್‌ನಿಂದ ನೀರನ್ನು ಹೊರಬಿಡಲಾಗುತ್ತಿದೆ. ಪರಿಣಾಮವಾಗಿ ರಾಜ್ಯದ ಕೃಷ್ಣಾ, ದೂಧ್‌ಗಂಗಾ ಹಾಗೂ ವೇದ್‌ಗಂಗಾ ನದಿಗಳಿಗೆ ಭಾರಿ ಪ್ರಮಾಣದ ನೀರು ಹರಿದುಬರುತ್ತಿದ್ದು, ಮಲಪ್ರಭಾ ನದಿಯ ನೀರಿನ ಮಟ್ಟವೂ ಗಣನೀಯವಾಗಿ ಏರಿಕೆಯಾಗಿದೆ. ಕರಾವಳಿ ಭಾಗದಲ್ಲೂ ಉತ್ತಮ ಮಳೆಯಾಗುತ್ತಿರುವುದರಿಂದ ತುಂಗಭದ್ರಾ, ಅಘನಾಶಿನಿ, ಕಾಳಿ ಮತ್ತು ಶರಾವತಿ ನದಿಗಳಲ್ಲಿ ನೀರಿನ ಮಟ್ಟ ಕೊಂಚ ಸುಧಾರಿಸಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಬಾಳೆಹೊನ್ನೂರು, ಎನ್.ಆರ್.ಪುರ ಹಾಗೂ ಕಳಸ ಭಾಗದಲ್ಲಿ ಮಳೆಯ ಆರ್ಭಟ ಮಿತಿ ಮೀರಿದ್ದು, ಹಲವೆಡೆ ಭಾರಿ ಗಾಳಿಗೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ಶಿವಮೊಗ್ಗ, ಧಾರವಾಡ, ಹಾವೇರಿ, ಬೀದರ್, ಯಾದಗಿರಿ, ವಿಜಯಪುರ ಹಾಗೂ ದಕ್ಷಿಣ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲೂ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮುಂಬರುವ ದಿನಗಳಲ್ಲಿ ಮಳೆ ಮತ್ತಷ್ಟು ಬಿರುಸುಕೊಳ್ಳುವ ಸಾಧ್ಯತೆಯಿದೆ.