ಬೆಂಗಳೂರು : ಕರ್ನಾಟಕ ಸರ್ಕಾರವು ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಯುವಜನತೆಗೆ ಹಾಗೂ ಕ್ರೀಡಾಪಟುಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 72 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಶೇ. 2 ರಷ್ಟು ಕ್ರೀಡಾ ಮೀಸಲಾತಿಯನ್ನು ಕಲ್ಪಿಸಲಾಗುತ್ತಿದ್ದು, ಇದರ ಅನ್ವಯ ಸುಮಾರು 2 ಸಾವಿರ ಹುದ್ದೆಗಳು ಕ್ರೀಡಾಪಟುಗಳಿಗೆ ಲಭ್ಯವಾಗಲಿವೆ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದ್ದಾರೆ. ಬೆಂಗಳೂರಿನ ಯವನಿಕಾ ಸಭಾಂಗಣದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಮೀಸಲಾತಿಗೆ ಸಂಬಂಧಿಸಿದ ಕರಡು ಅಧಿಸೂಚನೆಯನ್ನು ಈಗಾಗಲೇ ಹೊರಡಿಸಲಾಗಿದ್ದು, ಸಾರ್ವಜನಿಕರ ಆಕ್ಷೇಪಣೆ ಹಾಗೂ ಸಲಹೆಗಳನ್ನು ಪರಿಶೀಲಿಸಿ ಶೀಘ್ರದಲ್ಲೇ ಅಂತಿಮ ಆದೇಶ ಹೊರಡಿಸಲಾಗುವುದು ಎಂದಿದ್ದಾರೆ.
ಇದಲ್ಲದೆ ಕ್ರೀಡಾಪಟು ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ನೆರವಾಗಲು ಹಾಜರಾತಿಯಲ್ಲಿ ದೊಡ್ಡ ವಿನಾಯಿತಿ ಘೋಷಿಸಲಾಗಿದೆ. ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಶೇ. 15 ರಷ್ಟು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಹಾಜರಾತಿ ವಿನಾಯಿತಿ ನೀಡಲು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಯಾವುದೇ ಕ್ರೀಡಾಪಟು ಹಾಜರಾತಿ ಕೊರತೆಯಿಂದ ಪರೀಕ್ಷೆಯಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ, ಒಟ್ಟು 34 ವಿವಿಧ ಕ್ರೀಡೆಗಳ ಸಾಧಕ ವಿದ್ಯಾರ್ಥಿಗಳಿಗೆ ಕನಿಷ್ಠ ಶೇ. 50ರಷ್ಟು ಹಾಜರಾತಿ ಇದ್ದರೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ.
ವಿಶೇಷವಾಗಿ ಕಾಮನ್‌ವೆಲ್ತ್, ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಪ್ಯಾರಾ ಗೇಮ್ಸ್‌ಗಳಲ್ಲಿ ಪದಕ ಗೆದ್ದ ಸಾಧಕ ಕ್ರೀಡಾಪಟುಗಳಿಗೆ ನೇರವಾಗಿ 'ಎ' ಮತ್ತು 'ಬಿ' ಗುಂಪಿನ ಉದ್ಯೋಗಗಳನ್ನು ವಿಶೇಷ ನೇಮಕಾತಿಯಡಿ ನೀಡಲಾಗುತ್ತಿದ್ದು, ಈಗಾಗಲೇ 13 ಜನರಿಗೆ ಆದೇಶ ಪತ್ರ ನೀಡಲಾಗಿದೆ. ಈ ಪ್ರತಿಷ್ಠಿತ ಕ್ರೀಡಾಕೂಟಗಳಲ್ಲಿ ರಾಜ್ಯವನ್ನು ಪ್ರತಿನಿಧಿಸುವ ಕ್ರೀಡಾಪಟುಗಳಿಗೆ ನಗದು ಪುರಸ್ಕಾರದ ಜೊತೆಗೆ ಹೆಚ್ಚುವರಿಯಾಗಿ 5 ಲಕ್ಷ ರೂ. ವಿಶೇಷ ಪ್ರೋತ್ಸಾಹಧನ ನೀಡಲು ಸರ್ಕಾರ ನಿರ್ಧರಿಸಿದೆ. ಇದರೊಂದಿಗೆ ಕ್ರೀಡಾ ಇಲಾಖೆಯಲ್ಲಿ ಖಾಲಿ ಇರುವ 50 ಖಾಯಂ ತರಬೇತುದಾರರ ಹುದ್ದೆಗಳ ಭರ್ತಿಗೂ ಆರ್ಥಿಕ ಇಲಾಖೆಯಿಂದ ಅನುಮೋದನೆ ಸಿಕ್ಕಿದ್ದು, ಶೀಘ್ರದಲ್ಲೇ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಡಾ. ಜಿ. ಪರಮೇಶ್ವರ್ ಮಾಹಿತಿ ನೀಡಿದ್ದಾರೆ.