ಬೆಂಗಳೂರು : ಬೆಂಗಳೂರಿನ ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕನಕಪುರದಲ್ಲಿ ನಿರ್ಮಿಸುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಈ ಸಂಬಂಧ ಡಿ.ಕೆ. ಶಿವಕುಮಾರ್ ಅವರಿಗೆ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ. ಕನಕಪುರ ಬದಲಾಗಿ ರಾಜ್ಯದ ಮಧ್ಯಭಾಗದಲ್ಲಿರುವ ತುಮಕೂರು ನಗರವನ್ನು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಆಯ್ಕೆ ಮಾಡಿಕೊಳ್ಳಬೇಕು ಎಂದು ಅವರು ಸರ್ಕಾರಕ್ಕೆ ಪ್ರಮುಖ ಸಲಹೆ ನೀಡಿದ್ದಾರೆ.
ಬೆಂಗಳೂರು ಈಗಾಗಲೇ ಜನಸಂಖ್ಯೆ, ಸಂಚಾರ ದಟ್ಟಣೆ, ಕುಡಿಯುವ ನೀರು ಮತ್ತು ಪರಿಸರದ ಮೇಲಿನ ಅತಿಯಾದ ಒತ್ತಡದಿಂದ ತತ್ತರಿಸುತ್ತಿದೆ. ಇಂತಹ ಸಂದರ್ಭದಲ್ಲಿ ಮತ್ತೊಂದು ಬೃಹತ್ ಮೂಲಸೌಕರ್ಯ ಯೋಜನೆಯನ್ನು ಬೆಂಗಳೂರಿನ ಸುತ್ತಮುತ್ತಲೇ ಕೇಂದ್ರೀಕರಿಸುವುದು ಸಮಸ್ಯೆಗಳನ್ನು ಮತ್ತಷ್ಟು ಉಲ್ಬಣಗೊಳಿಸುತ್ತದೆ ಎಂದು ವಿಜಯೇಂದ್ರ ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಕನಕಪುರವು ರಾಜ್ಯದ ದಕ್ಷಿಣ ತುದಿಯಲ್ಲಿದ್ದು, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ, ಮೀಸಲು ಅರಣ್ಯ ಹಾಗೂ ಫಲವತ್ತಾದ ಕೃಷಿ ಭೂಮಿಗೆ ಹತ್ತಿರ ಇರುವುದರಿಂದ ಇಲ್ಲಿ ವಿಮಾನ ನಿಲ್ದಾಣ ನಿರ್ಮಿಸುವುದು ಪರಿಸರ ಮತ್ತು ಕೃಷಿ ಎರಡೂ ದೃಷ್ಟಿಯಿಂದ ಸೂಕ್ತವಲ್ಲ ಎಂದು ಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
ಹಿಂದಿನ ಯೋಜನೆಗಳಾದ ಎಲೆಕ್ಟ್ರಾನಿಕ್ ಸಿಟಿ ಮತ್ತು ದೇವನಹಳ್ಳಿ ಕೆಂಪೇಗೌಡ ವಿಮಾನ ನಿಲ್ದಾಣಗಳ ಅಭಿವೃದ್ಧಿಯು ಕೇವಲ ಬೆಂಗಳೂರು ಸುತ್ತಮುತ್ತಲ ಪ್ರದೇಶಗಳಿಗೆ ಸೀಮಿತವಾಗಿದ್ದನ್ನು ನೆನಪಿಸಿರುವ ಅವರು, ವಿಕೇಂದ್ರೀಕರಣದ ಮಹತ್ವವನ್ನು ಒತ್ತಿ ಹೇಳಿದ್ದಾರೆ. ನೆರೆಯ ತಮಿಳುನಾಡು, ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶಗಳು ವಿವಿಧ ನಗರಗಳನ್ನು ಸಮಾನವಾಗಿ ಅಭಿವೃದ್ಧಿಪಡಿಸಿದ ಮಾದರಿಯನ್ನು ನಾವು ಅಳವಡಿಸಿಕೊಳ್ಳಬೇಕು. ತುಮಕೂರು ಈಗಾಗಲೇ ರಾಷ್ಟ್ರೀಯ ಹೆದ್ದಾರಿಗಳು ಮತ್ತು ರೈಲು ಸಂಪರ್ಕದೊಂದಿಗೆ ರಾಜ್ಯದ ಸಹಜ ಪ್ರವೇಶದ್ವಾರದಂತಿದೆ. ಇಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಮಧ್ಯ ಕರ್ನಾಟಕ, ಉತ್ತರ ಕರ್ನಾಟಕ ಹಾಗೂ ಹಳೆ ಮೈಸೂರು ಭಾಗಗಳ ಜನರಿಗೆ ಸಮಾನ ಅನುಕೂಲ ದೊರೆಯಲಿದ್ದು, ಪ್ರಾದೇಶಿಕ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗುತ್ತದೆ ಎಂದು ವಿಜಯೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.