ಬೆಂಗಳೂರು : ಕೆಲವರು ನನ್ನನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆಸುತ್ತಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಗೆ ಸಚಿವ ಸಂಪುಟದಲ್ಲಿ ಸ್ಥಾನ ಸಿಗುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಸಂಪುಟ ವಿಸ್ತರಣೆಯ ನಿರ್ಧಾರವನ್ನು ಮುಖ್ಯಮಂತ್ರಿಗಳೇ ತೆಗೆದುಕೊಳ್ಳಬೇಕು. ಪಕ್ಷದಲ್ಲಿ 140 ಶಾಸಕರಿದ್ದು, ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದನ್ನು ಹೈಕಮಾಂಡ್ ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿ ಮಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ ಅವರು, ಕರ್ನಾಟಕದಲ್ಲಿ ನಡೆಯಲಿರುವ ಅಭಿಯಾನದಲ್ಲಿ ಭಾಗವಹಿಸುವಂತೆ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಲಾಗಿದ್ದು, ಅವರು ಸದ್ಯದಲ್ಲೇ ತಮ್ಮ ಭೇಟಿಯನ್ನು ಖಚಿತಪಡಿಸಲಿದ್ದಾರೆ ಎಂದು ಹೇಳಿದರು. ಇದೇ ವೇಳೆ ದೇಶದ ಶಿಕ್ಷಣ ವ್ಯವಸ್ಥೆಯ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿದ ಅವರು, ಕೋಟಾ ಎಜುಕೇಶನ್ ಹಬ್‌ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಸರಣಿ ಆತ್ಮಹತ್ಯೆಗಳ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಅವರು 'ಛಾತ್ರೋಂಕಿ ಗೂಂಜ್' ಎಂಬ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ ಎಂದರು.
ದೇಶದಲ್ಲಿ ಇದುವರೆಗೆ 152 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲೇ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು, ಇದರಿಂದ ಸಾಮಾನ್ಯ ವಿದ್ಯಾರ್ಥಿಗಳ ಭವಿಷ್ಯ ಆತಂಕಕ್ಕೆ ಸಿಲುಕಿದೆ. ರಾಜಸ್ಥಾನ, ಗುಜರಾತ್ ಸೇರಿದಂತೆ ದೇಶದ ಹಲವೆಡೆ ನಡೆದಿರುವ ಈ ಹಗರಣಗಳ ಫಲಾನುಭವಿಗಳು ಬಿಜೆಪಿ ನಾಯಕರ ಮಕ್ಕಳೇ ಆಗಿದ್ದು, ಪೊಲೀಸರು ಅವರನ್ನೇ ವಶಕ್ಕೆ ಪಡೆದಿದ್ದಾರೆ ಎಂದು ಹರಿಪ್ರಸಾದ್ ಟೀಕಿಸಿದರು.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಅವರ ದೂರದೃಷ್ಟಿಯಿಂದಾಗಿ ದೇಶದಲ್ಲಿ 550ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಸ್ಥಾಪನೆಯಾಗಿ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಅತ್ಯುತ್ತಮ ಶಿಕ್ಷಣ ವ್ಯವಸ್ಥೆ ನಿರ್ಮಾಣವಾಗಿತ್ತು. ಆದರೆ ಇಂದು ಶಿಕ್ಷಣ ವ್ಯವಸ್ಥೆಯ ಮೇಲೆ ನಿರಂತರ ದಾಳಿ ನಡೆಯುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧವೂ ವಾಗ್ದಾಳಿ ನಡೆಸಿದ ಹರಿಪ್ರಸಾದ್, 'ಚಾಯ್ ಪೇ ಚರ್ಚಾ' ಮಾತನಾಡುವ ಪ್ರಧಾನಿ ಅವರದ್ದು ನಕಲಿ ಪದವಿ ಪ್ರಮಾಣಪತ್ರವಾಗಿದೆ. ಕಳೆದ 10 ವರ್ಷಗಳಲ್ಲಿ ಇಷ್ಟೊಂದು ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿದ್ದರೂ ಯಾವುದೇ ಸೂಕ್ತ ತನಿಖೆ ನಡೆದಿಲ್ಲ. ಇಂತಹ ದಂಧೆಕೋರರಿಗೆ ರಕ್ಷಣೆ ನೀಡುತ್ತಿರುವವರು ಯಾರು ಎಂದು ಅವರು ತೀವ್ರವಾಗಿ ಪ್ರಶ್ನಿಸಿದರು.