ಬೆಂಗಳೂರು : ಬೆಂಗಳೂರಿನ ಶಿವಾಜಿನಗರದಲ್ಲಿ ನಡೆದ ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳ ಮೇಲೆ ನಡೆದ ಹಲ್ಲೆ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ದಾಳಿಗೆ ಹೆದರದೆ ಅಧಿಕಾರಿಗಳು ಪಾದಾಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪುನರಾರಂಭಿಸಿದ್ದಾರೆ. ಸಚಿವ ಕೃಷ್ಣ ಬೈರೇಗೌಡ ಅವರ ಕಟ್ಟುನಿಟ್ಟಿನ ಸೂಚನೆಯ ಮೇರೆಗೆ ಬೆಂಗಳೂರು ಕೇಂದ್ರ ಪಾಲಿಕೆಯ ಆಯುಕ್ತ ಜಗದೀಶ್ ಹಾಗೂ ಅಪರ ಆಯುಕ್ತ ವೆಂಕಟಾಚಲಪತಿ ಅವರು ಖುದ್ದಾಗಿ ಸ್ಥಳದಲ್ಲೇ ನಿಂತು ತೆರವು ಕಾರ್ಯಾಚರಣೆಯನ್ನು ಮುನ್ನಡೆಸುತ್ತಿದ್ದಾರೆ.
ಪಾದಾಚಾರಿ ಮಾರ್ಗ ಒತ್ತುವರಿ ತೆರವು ಮಾಡುವುದು ಸುಪ್ರೀಂ ಕೋರ್ಟ್‌ನ ಆದೇಶವಾಗಿದ್ದು, ಈ ವಿಚಾರದಲ್ಲಿ ಕರ್ನಾಟಕ ಸರ್ಕಾರ ಯಾವುದೇ ಕಾರಣಕ್ಕೂ ಹಿಂದಡಿ ಇಡುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಅಧಿಕಾರಿಗಳು ಕಾನೂನು ಪ್ರಕಾರ ಕರ್ತವ್ಯ ನಿರ್ವಹಿಸುವಾಗ ಅವರ ಕೆಲಸಕ್ಕೆ ಅಡ್ಡಿಪಡಿಸುವುದು ಹಾಗೂ ಹಲ್ಲೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ದಾಳಿಕೋರರ ವಿರುದ್ಧ ಕೊಲೆ ಯತ್ನ (ಸೆಕ್ಷನ್ 307) ಸೇರಿದಂತೆ ಗಂಭೀರ ಕಾನೂನು ಕ್ರಮ ಜರುಗಿಸಲಾಗುವುದು ಎಂದಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ 10 ಜನ ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿಯ ಪ್ರಮುಖ ಸೂತ್ರಧಾರ ಬಸವರಾಜ್ ಪಡುಕೋಟೆ ಎಂಬ ವ್ಯಕ್ತಿಯ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಕಾರ್ಯಾಚರಣೆಯ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮನವಿ ಮಾಡಿದ್ದಾರೆ.