ಬೆಂಗಳೂರು : ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವರ್ಚುವಲ್ ಮೂಲಕ ಸಭೆ ನಡೆಸಿದ ಅವರು, ಇಂದು ಮುಂಜಾನೆಯಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಎಲ್ಲ ಅಧಿಕಾರಿಗಳು ಮುಂಜಾಗ್ರತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆ ರಸ್ತೆಗಳಲ್ಲಿ ನೀರು ನಿಂತು ಜಲಾವೃತವಾಗುವ ಕಾರಣ ಹೆಚ್ಚು ಸಂಚಾರ ದಟ್ಟಣೆಯಾಗಲಿದೆ. ಈ ಸಂಬಂಧ ರಸ್ತೆ ಮೂಲಭೂತ ಸೌಕರ್ಯ ವಿಭಾಗದ ಅಧಿಕಾರಿಗಳು ಎಲ್ಲ ಪ್ರಮುಖ ರಸ್ತೆಗಳಲ್ಲಿ ಪರಿಶೀಲನೆ ನಡೆಸಿ ನೀರು ನಿಲ್ಲದಂತೆ ಸೂಕ್ತ ಕ್ರಮ ವಹಿಸಬೇಕು. ಪಾಲಿಕೆ ಸಿಬ್ಬಂದಿಯ ಸಹಯೋಗದೊಂದಿಗೆ ಗ್ರೇಟಿಂಗ್ಸ್ಗಳ ಬಳಿ ತ್ಯಾಜ್ಯವನ್ನು ಸ್ವಚ್ಛಗೊಳಿಸಿ ಸೈಡ್ ಡ್ರೈನ್‌ಗಳಿಗೆ ಸರಾಗವಾಗಿ ಮಳೆ ನೀರು ಹರಿದು ಹೋಗುವಂತೆ ನೋಡಿಕೊಳ್ಳಬೇಕು. ರಾಜಕಾಲುವೆಗಳಲ್ಲಿಯೂ ಸರಾಗವಾಗಿ ನೀರು ಹರಿದು ಹೊಗಬೇಕು. ಎಲ್ಲಿಯೂ ಯಾವುದೇ ರೀತಿಯ ಸಮಸ್ಯೆಯಾಗದಂತೆ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕ್ರಮ ವಹಿಸಬೇಕೆಂದು ಸೂಚಿಸಿದರು.