ಕೊಡಗು : ಕೊಡಗು ಜಿಲ್ಲೆಯ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಶಾಲನಗರದಲ್ಲಿರುವ ಪ್ರಸಿದ್ಧ ಹಾರಂಗಿ ಜಲಾಶಯವು ಬಹುತೇಕ ಭರ್ತಿಯಾಗುವ ಹಂತ ತಲುಪಿದೆ. ಜಲಾಶಯಕ್ಕೆ ಒಳಹರಿವು ಗಣನೀಯವಾಗಿ ಹೆಚ್ಚಿರುವುದರಿಂದ, ನಾಳೆ ಮಧ್ಯಾಹ್ನ 2 ಗಂಟೆಗೆ ನದಿಗೆ ನೀರು ಬಿಡುಗಡೆ ಮಾಡಲು ಜಲಾಶಯದ ಅಧಿಕಾರಿಗಳು ನಿರ್ಧರಿಸಿದ್ದಾರೆ. ಕೊಡಗಿನ ಬೆಟ್ಟಗುಡ್ಡಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಾರಂಗಿ ಜಲಾಶಯಕ್ಕೆ ಪ್ರಸ್ತುತ 4,500 ಕ್ಯೂಸೆಕ್ ನೀರು ಹರಿದುಬರುತ್ತಿದೆ. ಇದರಿಂದಾಗಿ ಜಲಾಶಯದ ನೀರಿನ ಮಟ್ಟ ವೇಗವಾಗಿ ಏರಿಕೆಯಾಗುತ್ತಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2,856 ಅಡಿಗಳಿಗೆ ತಲುಪಿದೆ. ಗರಿಷ್ಠ ಮಟ್ಟ ತಲುಪಲು ಇನ್ನು ಕೇವಲ 3 ಅಡಿ ಮಾತ್ರ ಬಾಕಿಯಿದ್ದು, ಸುರಕ್ಷತೆಯ ದೃಷ್ಟಿಯಿಂದ ಅಧಿಕಾರಿಗಳು ನಾಳೆ ಮಧ್ಯಾಹ್ನದಿಂದ ಸುಮಾರು 5,000 ಕ್ಯೂಸೆಕ್ ನೀರನ್ನು ನದಿಗೆ ಹರಿಸಲು ಸಜ್ಜಾಗಿದ್ದಾರೆ.
ಹಾರಂಗಿ ಜಲಾಶಯದಿಂದ ನದಿಗೆ ನೀರು ಹರಿಸಲಿರುವ ಹಿನ್ನೆಲೆಯಲ್ಲಿ ಹಾರಂಗಿ ನೀರಾವರಿ ಇಲಾಖೆಯ ಅಧಿಕಾರಿಗಳು ಕಾವೇರಿ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ಸಂದೇಶ ನೀಡಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿರುವ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ತಕ್ಷಣವೇ ಜಾಗರೂಕರಾಗಿರಬೇಕು. ನದಿಯತ್ತ ತೆರಳದಂತೆ ಹಾಗೂ ತಮ್ಮ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯುವಂತೆ ಸೂಚಿಸಲಾಗಿದೆ. ಅಗತ್ಯ ಬಿದ್ದಲ್ಲಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಲು ಸಿದ್ಧರಿರಬೇಕು ಎಂದು ಎಚ್ಚರಿಸಲಾಗಿದೆ. ಹಾರಂಗಿ ಜಲಾಶಯ ಭರ್ತಿಯಾಗುತ್ತಿರುವುದು ಕೊಡಗು ಹಾಗೂ ಮೈಸೂರು ಭಾಗದ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಕಾವೇರಿ ಕೊಳ್ಳದ ಜಲಾಶಯಗಳ ನೀರಿನ ಮಟ್ಟದಲ್ಲೂ ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದೆ.