image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ರಾಜ್ಯದಲ್ಲಿ 70 ಸಾವಿರ ಹುದ್ದೆಗಳ ಬೃಹತ್ ನೇಮಕಾತಿ: ಪಾರದರ್ಶಕ ಪರೀಕ್ಷೆಗೆ ಡಿಕೆಶಿ ಖಡಕ್ ಸೂಚನೆ

ರಾಜ್ಯದಲ್ಲಿ 70 ಸಾವಿರ ಹುದ್ದೆಗಳ ಬೃಹತ್ ನೇಮಕಾತಿ: ಪಾರದರ್ಶಕ ಪರೀಕ್ಷೆಗೆ ಡಿಕೆಶಿ ಖಡಕ್ ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಅಧಿಕ ಸರ್ಕಾರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಭರಪೂರ ಸಿದ್ಧತೆ ನಡೆಸಿದೆ. ಈ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿ, ಪರೀಕ್ಷಾ ಸನ್ನದ್ಧತೆಯ ಪರಿಶೀಲನೆ ನಡೆಸಿದ್ದಾರೆ. ಇಡೀ ನೇಮಕಾತಿ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕ ಹಾಗೂ ಕಟ್ಟುನಿಟ್ಟಾಗಿ ಪೂರ್ಣಗೊಳಿಸಿ ಇಡೀ ದೇಶಕ್ಕೇ ಮಾದರಿಯಾಗುವಂತೆ ನಡೆಸಬೇಕೆಂದು ಅಧಿಕಾರಿಗಳಿಗೆ ಅವರು ಖಡಕ್ ಸೂಚನೆ ನೀಡಿದ್ದಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತರಲು ರಾಜ್ಯ ಸರ್ಕಾರವು ವಿಶೇಷ ಸಮಿತಿಯೊಂದನ್ನು ರಚಿಸಿದೆ. ಈ ಸಮಿತಿಗೆ ಎಸ್.ವಿ. ರಂಗನಾಥ್ ಅಧ್ಯಕ್ಷರಾಗಿದ್ದು, ಟಿ.ಎಂ. ವಿಜಯಭಾಸ್ಕರ್, ವಂದಿತಾ ಶರ್ಮಾ ಹಾಗೂ ಎಲ್.ಕೆ. ಅಥೀಕ್ ಸದಸ್ಯರಾಗಿದ್ದಾರೆ. ನೇಮಕಾತಿ ಮತ್ತು ಪರೀಕ್ಷಾ ಪ್ರಕ್ರಿಯೆಯನ್ನು ಹೆಚ್ಚು ಪರಿಣಾಮಕಾರಿ, ಪಾರದರ್ಶಕ ಹಾಗೂ ವಿಶ್ವಾಸಾರ್ಹವಾಗಿಸಲು ಅಗತ್ಯ ಸುಧಾರಣೆಗಳನ್ನು ಅಧ್ಯಯನ ಮಾಡಿ ಶಿಫಾರಸು ಸಲ್ಲಿಸುವ ಜವಾಬ್ದಾರಿಯನ್ನು ಈ ಸಮಿತಿಗೆ ನೀಡಲಾಗಿದೆ.

ಮುಂದಿನ ಆರು ತಿಂಗಳಲ್ಲಿ 36,773 ಹುದ್ದೆಗಳನ್ನು ಭರ್ತಿ ಮಾಡಲು ಕೆಪಿಎಸ್ಸಿ (KPSC) ಮತ್ತು ಕೆಇಎ (KEA) ಈಗಾಗಲೇ ವೇಳಾಪಟ್ಟಿ ಹೊರಡಿಸಿದ್ದು, ಸುಮಾರು 35 ಲಕ್ಷ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗುವ ನಿರೀಕ್ಷೆಯಿದೆ. ತಾಂತ್ರಿಕ ಕ್ಷೇತ್ರದಲ್ಲಿ ಕರ್ನಾಟಕಕ್ಕೆ ದೊಡ್ಡ ಇತಿಹಾಸವಿದ್ದು, ಆಧುನಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡು ಈ ಬೃಹತ್ ನೇಮಕಾತಿಯನ್ನು ಅತ್ಯಂತ ವೃತ್ತಿಪರವಾಗಿ ನಡೆಸಲು ಸೂಚಿಸಲಾಗಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಆಸ್ಪದ ನೀಡಬಾರದು ಎಂದು ಎಚ್ಚರಿಸಿರುವ ಡಿ.ಕೆ. ಶಿವಕುಮಾರ್ ಅವರು, ಸಭೆಯಲ್ಲಿ ಅಧಿಕಾರಿಗಳಿಗೆ ಹಲವು ಮಹತ್ವದ ಮಾರ್ಗದರ್ಶಿ ಸೂತ್ರಗಳನ್ನು ನೀಡಿದ್ದಾರೆ. ಪರೀಕ್ಷೆಯಲ್ಲಿ ಅಕ್ರಮ ನಡೆದರೆ ಆಯಾ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಂಪೂರ್ಣ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಅಲ್ಲದೆ, ರಾಜ್ಯದ ಎಲ್ಲಾ ಕೋಚಿಂಗ್ ಸೆಂಟರ್‌ಗಳ ಮೇಲೆಯೂ ತೀವ್ರ ಕಣ್ಗಾವಲು ಇರಿಸಲು ಸೂಚಿಸಲಾಗಿದೆ.

ಯುಪಿಎಸ್ಸಿ (UPSC) ಮಾದರಿಯಲ್ಲಿರುವ ಉತ್ತಮ ಅಂಶಗಳನ್ನು ನಮ್ಮ ಪರೀಕ್ಷಾ ವ್ಯವಸ್ಥೆಯಲ್ಲೂ ಅಳವಡಿಸಿಕೊಳ್ಳಬೇಕು ಹಾಗೂ ಪಾರದರ್ಶಕತೆಗಾಗಿ ಕೈಗೊಂಡಿರುವ ಕ್ರಮಗಳ ಬಗ್ಗೆ ಅಭ್ಯರ್ಥಿಗಳಿಗೆ ಸ್ಪಷ್ಟ ಮಾಹಿತಿ ಒದಗಿಸಬೇಕು ಎಂದು ಅವರು ನಿರ್ದೇಶಿಸಿದ್ದಾರೆ. ಪ್ರತಿಯೊಬ್ಬ ಅಧಿಕಾರಿಗೂ ನಿರ್ದಿಷ್ಟ ಜವಾಬ್ದಾರಿ ನಿಗದಿಪಡಿಸಲಾಗಿದ್ದು, ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಖಡಕ್ ಸಂದೇಶ ರವಾನಿಸಿದ್ದಾರೆ.

Category
ಕರಾವಳಿ ತರಂಗಿಣಿ