ಬೆಂಗಳೂರು : ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯಲ್ಲಿ ಉಂಟಾಗಿರುವ ಗೊಂದಲವನ್ನು ಕಾನೂನಾತ್ಮಕವಾಗಿ ಬಗೆಹರಿಸಲು ಸಂಬಂಧಪಟ್ಟ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಭರವಸೆ ನೀಡಿದ್ದಾರೆ. 14ನೇ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ಕಾರ್ಯಕ್ರಮದ ಸ್ಥಳದ ಬಳಿ ತಮಗೆ ಮನವಿ ಸಲ್ಲಿಸಲು ಆಗಮಿಸಿದ್ದ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಗಮನಿಸಿದ ಅವರು, ಖುದ್ದಾಗಿ ಹತ್ತಿರ ಕರೆದು, ಮರದ ನೆರಳಿಗೆ ಕರೆದೊಯ್ದು ಸಮಸ್ಯೆಯ ವಸ್ತುಸ್ಥಿತಿಯನ್ನು ಆಲಿಸಿದರು. ನೇಮಕಾತಿ ಪ್ರಕ್ರಿಯೆಯ ಯಾವ ಹಂತದಲ್ಲಿ ಗೊಂದಲ ಉಂಟಾಗಿದೆ ಎಂಬುದನ್ನು ತಿಳಿದುಕೊಂಡರು.
ಸರ್ಕಾರವು ಇತ್ತೀಚೆಗಷ್ಟೇ 900ಕ್ಕೂ ಹೆಚ್ಚು ಕೃಷಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಆದರೆ ಈ ಹುದ್ದೆಗಳಿಗೆ ಬಿ.ಇ ಹಾಗೂ ಬಿ.ಟೆಕ್ನಲ್ಲಿ ಬಯೋ ಕೆಮಿಸ್ಟ್ರಿ ವ್ಯಾಸಂಗ ಮಾಡಿದ ಅಭ್ಯರ್ಥಿಗಳಿಗೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು. ಇದರಿಂದ ಕೃಷಿ ಪದವೀಧರರಲ್ಲಿ ತೀವ್ರ ಅಸಮಾಧಾನ ವ್ಯಕ್ತವಾಗಿ ಪ್ರತಿಭಟನೆ ಆರಂಭವಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿದ ಅವರು, "ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿಯಮಗಳಿಗೆ ತಿದ್ದುಪಡಿ ತಂದಿದ್ದರಿಂದ ಈ ಸಮಸ್ಯೆ ಎದುರಾಗಿದೆ. ನಮ್ಮ ಸರ್ಕಾರ ನಿರುದ್ಯೋಗ ನಿರ್ಮೂಲನೆಗೆ ಶ್ರಮಿಸುತ್ತಿದ್ದು, ಕೃಷಿ ಪದವೀಧರರಿಗೆ ಯಾವುದೇ ರೀತಿಯ ಅನ್ಯಾಯವಾಗದಂತೆ ಶೀಘ್ರವೇ ಕಾನೂನಾತ್ಮಕ ಪರಿಹಾರ ಕಂಡುಕೊಳ್ಳಲಾಗುವುದು" ಎಂದು ಭರವಸೆ ನೀಡಿದರು. ಅಲ್ಲದೆ ವಿದ್ಯಾರ್ಥಿಗಳು ತಮ್ಮ ಪ್ರತಿಭಟನೆಯನ್ನು ಕೈಬಿಡುವಂತೆ ವಿನಂತಿಸಿಕೊಂಡರು.