ಶಿವಮೊಗ್ಗ: ಮಲವಗೊಪ್ಪ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿಯಿಂದ ಭೂಮಿ ಹಾಗೂ ಆಸ್ತಿ ಕಳೆದುಕೊಳ್ಳುತ್ತಿರುವ ಮಾಲೀಕರಿಗೆ ಸೂಕ್ತ ಮತ್ತು ನ್ಯಾಯಸಮ್ಮತ ಪರಿಹಾರ ಒದಗಿಸುವಂತೆ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕಿ ಶಾರದಾ ಪೂರ್ಯನಾಯ್ಕ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ನಡೆದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ನಗರಾಭಿವೃದ್ಧಿ ಇಲಾಖೆಯ ಉನ್ನತಾಧಿಕಾರಿಗಳ ಪ್ರಮುಖ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿಯ ಪ್ರಗತಿ, ಭೂಸ್ವಾಧೀನ ಪ್ರಕ್ರಿಯೆ ಮತ್ತು ಪರಿಹಾರ ವಿತರಣೆಯ ಸ್ಥಿತಿಗತಿಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು.
ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಅತ್ಯಗತ್ಯವಾಗಿದ್ದರೂ, ತಮ್ಮ ಜಮೀನು ಮತ್ತು ಆಸ್ತಿಯನ್ನು ತ್ಯಾಗ ಮಾಡುತ್ತಿರುವ ಭೂ ಮಾಲೀಕರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಬಾರದು ಎಂದು ಶಾಸಕರು ಬಲವಾಗಿ ಪ್ರತಿಪಾದಿಸಿದರು. ಭೂಸ್ವಾಧೀನದಿಂದ ಸಂತ್ರಸ್ತರಾದ ಪ್ರತಿಯೊಬ್ಬರಿಗೂ ಸರ್ಕಾರದ ನಿಯಮಾವಳಿಗಳಂತೆ ಪಾರದರ್ಶಕ ಹಾಗೂ ನ್ಯಾಯಯುತವಾಗಿ ಪರಿಹಾರ ತಲುಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದರು. ಪರಿಹಾರ ವಿತರಣೆಯಲ್ಲಿ ಅನಗತ್ಯ ವಿಳಂಬವಾಗದಂತೆ ದಾಖಲೆಗಳ ಪರಿಶೀಲನೆ ಹಾಗೂ ಮೌಲ್ಯಮಾಪನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ ಶಾಸಕರು, ಸಾರ್ವಜನಿಕರ ಅಹವಾಲುಗಳಿಗೆ ಮೊದಲ ಆದ್ಯತೆ ನೀಡಿ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸಲು ಸೂಚಿಸಿದರು. ಸ್ಥಳೀಯ ಜನರ ಹಿತಾಸಕ್ತಿ ಕಾಯಲು ಎನ್‌ಎಚ್‌ಎಐ ಮತ್ತು ಜಿಲ್ಲಾಡಳಿತ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸಭೆಯಲ್ಲಿ ತಿಳಿಸಲಾಯಿತು.