image image
ಬ್ರೇಕಿಂಗ್ ನ್ಯೂಸ್
ಬ್ರೇಕಿಂಗ್ ನ್ಯೂಸ್
ರಾಜ್ಯ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಜೆಡಿಎಸ್ ಪಾದಯಾತ್ರೆಗೆ ಬಿಜೆಪಿ ಬೆಂಬಲ

ಬಿಡದಿ ಟೌನ್‌ಶಿಪ್ ವಿರೋಧಿಸಿ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಜೆಡಿಎಸ್ ಪಾದಯಾತ್ರೆಗೆ ಬಿಜೆಪಿ ಬೆಂಬಲ

ಬೆಂಗಳೂರು : ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು ಸಾಂಕೇತಿಕವಾಗಿ ಪಾಲ್ಗೊಳ್ಳಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಒಟ್ಟಾಗಿ ಹೋರಾಟ ನಡೆಸಲು ತೀರ್ಮಾನಿಸಲಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಬಿಜೆಪಿ - ಜೆಡಿಎಸ್ ಸಮನ್ವಯ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಎರಡೂ ಪಕ್ಷಗಳ ಪ್ರಮುಖ ನಾಯಕರು ಪಾಲ್ಗೊಂಡಿದ್ದರು.

ಬಿಡದಿ ಟೌನ್‌ಶಿಪ್ ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿ ಆ.9 ಮತ್ತು 10ರಂದು ಬೈರಮಂಗಲದಿಂದ ಕೆಂಗೇರಿಯವರೆಗೆ ಎರಡು ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಇದರಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವ ವಹಿಸಲಿದ್ದು, ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಬೆಂಬಲ ನೀಡಲಿದ್ದಾರೆ. ಪಾದಯಾತ್ರೆ ಮುಕ್ತಾಯದ ನಂತರ, ಆಗಸ್ಟ್ 19 ಅಥವಾ 20ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಜಂಟಿಯಾಗಿ ಬೃಹತ್ ಸಮಾರೋಪ ಸಮಾವೇಶ ನಡೆಸಲಿವೆ.

ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, "ರೈತರು ಯಾವುದೇ ಕಾರಣಕ್ಕೂ ಭೂಮಿ ನೀಡಲು ತಯಾರಿಲ್ಲ. ಸರ್ಕಾರ ಬೆದರಿಕೆ ಹಾಗೂ ಒತ್ತಡ ಹೇರಿ ಭೂಸ್ವಾಧೀನಕ್ಕೆ ಮುಂದಾಗಿದೆ. ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಬಿಡದಿ ಟೌನ್‌ಶಿಪ್, ಬರ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಗಳ ಕುರಿತು ಎರಡೂ ಪಕ್ಷಗಳು ಒಟ್ಟಾಗಿ ಧ್ವನಿ ಎತ್ತಲಿವೆ" ಎಂದರು. ವಿಪಕ್ಷ ನಾಯಕ ಆರ್. ಅಶೋಕ್ ಮಾತನಾಡಿ, "ಕಾಂಗ್ರೆಸ್ ಸರ್ಕಾರ ರಿಯಲ್ ಎಸ್ಟೇಟ್ ಮಾಡಲು ಹೊರಟಿದ್ದು, ಇದರ ವಿರುದ್ಧ ಜಂಟಿ ಹೋರಾಟ ರೂಪಿಸಲಾಗಿದೆ. ಎರಡೂ ಪಕ್ಷಗಳ ನಡುವೆ ಸುಲಭ ಸಮನ್ವಯಕ್ಕಾಗಿ 2-3 ದಿನಗಳಲ್ಲಿ ಸಮನ್ವಯ ಸಮಿತಿ ರಚಿಸಲಾಗುವುದು" ಎಂದು ಸ್ಪಷ್ಟಪಡಿಸಿದರು.

Category
ಕರಾವಳಿ ತರಂಗಿಣಿ