ಬೆಂಗಳೂರು: ಭಾರತದಲ್ಲಿ ತಯಾರಾಗುವ ಟ್ರ್ಯಾಕ್ಟರ್ ಹಾಗೂ ಇತರ ಕೃಷಿ ಯಂತ್ರೋಪಕಣಗಳ 'ಗರಿಷ್ಠ ಚಿಲ್ಲರೆ ಮಾರಾಟ ದರ'ವನ್ನು (ಎಂಆರ್‌ಪಿ) ಆಯಾ ಉತ್ಪಾದಕ ಕಂಪನಿಗಳ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುವುದು ಹಾಗೂ ಉಪಕರಣಗಳ ಮೇಲೆ ಮುದ್ರಿಸುವುದನ್ನು ಕಡ್ಡಾಯಗೊಳಿಸುವಂತೆ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿದಾರರಿಗೆ ಹೈಕೋರ್ಟ್ 5 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದೆ.
ದಾವಣಗೆರೆಯ ವಿ.ರಾಘವೇಂದ್ರ ಪ್ರಸಾದ್ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ.ಕೆ.ವಿ.ಅರವಿಂದ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಈ ಆದೇಶ ನೀಡಿದೆ.
ಅಲ್ಲದೆ, ಇದೊಂದು ಸರ್ಕಾರದ ನೀತಿ ನಿರ್ಧಾರಕ ವಿಚಾರವಾಗಿದ್ದು, ನ್ಯಾಯಾಲಯ ಮಧ್ಯಪ್ರವೇಶ ಮಾಡುವುದಿಲ್ಲ. ಅರ್ಜಿದಾರರು ತಮ್ಮ ಮನವಿಯನ್ನು ಸಂಬಂಧಪಟ್ಟ ಇಲಾಖೆ, ಅಧಿಕಾರಿಗಳ ಮುಂದೆ ಸಲ್ಲಿಸಲು ಸ್ವತಂತ್ರರಾಗಿದ್ದಾರೆ ಎಂದು ಹೇಳಿ ಅರ್ಜಿಯನ್ನು ಇತ್ಯರ್ಥಪಡಿಸುವುದಾಗಿ ಕೋರ್ಟ್ ಹೇಳಿತ್ತು.
ಆದರೆ, ಕೇಂದ್ರ ಸರ್ಕಾರದ ಪರ ವಕೀಲರು, ''ಸ್ವತಃ ಅರ್ಜಿದಾರರು ಕಳೆದ 30 ವರ್ಷಗಳಿಂದ ಸ್ವರಾಜ್ ಮಜ್ದಾ ಟ್ರ್ಯಾಕ್ಟರ್‌ಗಳ ಸೇಲ್ಸ್ ಮತ್ತು ಸರ್ವಿಸ್ ಸೆಂಟರ್ ನಡೆಸುತ್ತಿದ್ದಾರೆ'' ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ''ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಾಗಲು ಸಾಧ್ಯವಿಲ್ಲ'' ಎಂದು ಅರ್ಜಿದಾರರಿಗೆ 5 ಸಾವಿರ ರೂ. ದಂಡ ವಿಧಿಸಿದೆ. ದಂಡದ ಮೊತ್ತವನ್ನು ಮೂರು ವಾರಗಳಲ್ಲಿ ರಾಜ್ಯ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸುವಂತೆ ನಿರ್ದೇಶನ ನೀಡಿ, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.