ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಭೈರತಿ ರಣಗಲ್" ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿದೆ. ಶಿವರಾಜಕುಮಾರ್ ಅವರ ಖಡಕ್ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರದಲ್ಲಿದ್ದಾರೆ. ಈಗಾಗಲೇ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ನವೆಂಬರ್ 15 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.
ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ "ಮಫ್ತಿ" ಚಿತ್ರದ ಪ್ರೀಕ್ವೆಲ್ ಆಗಿರುವ "ಭೈರತಿ ರಣಗಲ್" ಚಿತ್ರದಲ್ಲಿ ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ನಟಿಸಿದ್ದಾರೆ. ದೇವರಾಜ್, ರಾಹುಲ್ ಬೋಸ್, ಅವಿನಾಶ್, ಛಾಯಾಸಿಂಗ್, ಡ್ಯಾನ್ಸಿಂಗ್ ರೋಸ್ ಶಬೀರ್, ಬಾಬು ಹಿರಣಯ್ಯ, ಗೋಪಾಲಕೃಷ್ಣ ದೇಶಪಾಂಡೆ, ಪ್ರತಾಪ್, ಮಧು ಗುರುಸ್ವಾಮಿ ಮುಂತಾದವರು ತಾರಾಬಳಗದಲ್ಲಿದ್ದಾರೆ.
ರವಿ ಬಸ್ರೂರ್ ಸಂಗೀತ ನಿರ್ದೇಶನ, ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ಬರಾಯನ್, ಚೇತನ್ ಡಿಸೋಜ ಸಾಹಸ ನಿರ್ದೇಶನ "ಭೈರತಿ ರಣಗಲ್" ಚಿತ್ರಕ್ಕಿದೆ.